
ಬೆಂಗಳೂರು (ಹೊಸಕೋಟೆ) ಮುಖ್ಯಮಂತ್ರಿಗಳು ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯಾದ್ಯಂತ ಬಡವರಿಗೆ ಐದು ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಜಮೀನು ಗುರುತಿಸುವ ಹಾಗೂ ಅಗತ್ಯ ಪ್ರಕ್ರಿಯೆಗಳನ್ನು ಕೈಗೊಳ್ಳುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ತಾಲೂಕಿನ ದೊಡ್ಡಹುಲ್ಲೂರಿನಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಮಾತನಾಡಿದ ಅವರು, ಕಂದಾಯ ಸಚಿವರ ನೇತೃತ್ವದಲ್ಲಿ ರಾಜ್ಯಾದ್ಯಂತ 5 ಲಕ್ಷ ಎಕರೆ ಜಮೀನನ್ನು ಗುರುತಿಸಲಾಗಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ 5 ಲಕ್ಷ ನಿವೇಶನ ಗುರ್ತಿಸಿ ಹಸ್ತಾಂತರಿಸಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1175 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಮನೆ ಹಾಗೂ ನಿವೇಶನಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ಹೊಸಕೋಟೆ ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದ ಬಡವರಿಗೆ ಅತಿ ಹೆಚ್ಚು ನಿವೇಶನಗಳನ್ನು ಹಂಚಲಾಗಿದೆ. ಶಾಸಕ ಶರತ್ ಬಚ್ಚೇಗೌಡರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹಕ್ಕುಪತ್ರ ಹಾಗೂ ಭೂ ದಾಖಲೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿಯೂ ತಾಲೂಕು ಮುಂಚೂಣಿಯಲ್ಲಿದೆ ಎಂದರು.ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ :
ರಾಜ್ಯದಲ್ಲಿ ಪ್ರಸ್ತುತ 874 ವಸತಿ ಶಾಲೆಗಳಿದ್ದು, ಸಮಾಜದ ಎಲ್ಲ ವರ್ಗಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಸಾಮಾನ್ಯ ವರ್ಗದ ಮಕ್ಕಳಿಗೂ ಸಮಾನ ಶಿಕ್ಷಣಾವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯದಲ್ಲಿ 860 ವಿದ್ಯಾರ್ಥಿನಿಲಯಗಳಿದ್ದು, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಹಾಸಿಗೆ, ಮೂಲಸೌಕರ್ಯ ಹಾಗೂ ಇತರೆ ಸೌಲಭ್ಯಗಳ ಕುರಿತು ಜಿಲ್ಲಾಧಿಕಾರಿಗಳು ಸಮೀಕ್ಷೆ ನಡೆಸಿ ಒಂದು ತಿಂಗಳೊಳಗೆ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಸತಿ ಶಾಲೆಗಳನ್ನು ಪಿಯುಸಿ ಹಂತದವರೆಗೂ ವಿಸ್ತರಿಸುವ ಗುರಿ ಹೊಂದಿದ್ದೇವೆ ಎಂದರು.
ಇದನ್ನೂ ಓದಿ: ₹2500 ಕೋಟಿ ವೆಚ್ಚದಲ್ಲಿ ಹೊಸಕೋಟೆಗೆ ಕಾವೇರಿ ನೀರು; ಇತ್ತ ಮೆಟ್ರೋ ಸಂಪರ್ಕಕ್ಕೆ ಡಿಪಿಆರ್