
ಆನೇಕಲ್/ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರು ಹೊರವಲಯದ ಅತ್ತಿಬೆಲೆ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕನ್ನಡ ಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ 'ಖಾಲಿ ಕೊಡ ಚಳುವಳಿ'ಯು ಗಡಿ ಭಾಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣ ಮಾಡಿತ್ತು.
ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ಅವರ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ನೂರಾರು ಮಹಿಳೆಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಜಲಾಶಯಗಳು ಬರಿದಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆ ಜಾರಿಯಾದರೆ ನೀರಿನ ಸಮಸ್ಯೆ ನೀಗಿಸಬಹುದು. ಆದರೆ ತಮಿಳುನಾಡು ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ಯೋಜನೆಗೆ ಅಡ್ಡಗಾಲು ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ತೀವ್ರತೆ ಹೆಚ್ಚಾದಂತೆ, ಹೋರಾಟಗಾರರು ಹೊಸೂರು ಮುಖ್ಯ ಹೆದ್ದಾರಿಯನ್ನು ತಡೆದು ರಸ್ತೆ ಮಧ್ಯೆಯೇ ಕುಳಿತು ಆಕ್ರೋಶ ಹೊರಹಾಕಲು ಮುಂದಾದರು. ಇದರಿಂದ ಕೆಲ ಕಾಲ ಸಂಚಾರ ವ್ಯತ್ಯಯ ಉಂಟಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಅತ್ತಿಬೆಲೆ ಪೊಲೀಸರು, ಹೆದ್ದಾರಿ ತಡೆಯಲು ಯತ್ನಿಸಿದ ಮಂಜುನಾಥ್ ದೇವ ಸೇರಿದಂತೆ ನೂರಾರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ನಮ್ಮ ನೆಲದ ನೀರನ್ನು ಬಳಸಿಕೊಳ್ಳಲು ನಮಗೆ ಹಕ್ಕಿದೆ. ಬೆಂಗಳೂರಿನ ಜನ ನೀರಿಲ್ಲದೆ ಪರದಾಡುತ್ತಿದ್ದಾರೆ. ಆದರೂ ನೆರೆ ರಾಜ್ಯ ತಮಿಳುನಾಡು ಅನಗತ್ಯವಾಗಿ ವಿರೋಧಿಸುತ್ತಿದೆ. ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯಪ್ರವೇಶಿಸಿ ಮೇಕೆದಾಟು ಯೋಜನೆಗೆ ಅನುಮತಿ ನೀಡಬೇಕು ಎಂದು ಹೋರಾಟಗಾರರು ಈ ವೇಳೆ ಸರ್ಕಾರವನ್ನು ಒತ್ತಾಯಿಸಿದರು.