
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಇಚಂಗೂರು ಗ್ರಾಮದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ 'ಲೇಕ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್'ಯಲ್ಲಿ ಸರಣಿ ಸ್ಫೋಟ ಉಂಟಾಗಿದ್ದು, ಘಟನೆಯಲ್ಲಿ ಮೂವರು ಯುವಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಮನೆಗಳು ಹಾಗೂ ಕಟ್ಟಡಗಳ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ತಂದಿಟ್ಟಿದೆ.
ಈ ದುರಂತದಲ್ಲಿ ಗಾಯಗೊಂಡ ಮೂವರೂ ಯುವಕರು ತಮಿಳುನಾಡು ಮೂಲದವರೆಂದು ತಿಳಿದುಬಂದಿದೆ. ಸ್ಫೋಟದ ತೀವ್ರತೆಯಿಂದಾಗಿ ಯುವಕರ ಮುಖ ಹಾಗೂ ಕೈಗಳ ಭಾಗ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಲೇಕ್ ಕೆಮಿಕಲ್ ಕಾರ್ಖಾನೆಯಲ್ಲಿ ಈ ಹಿಂದೆಯೂ ಕೂಡ ಇದೇ ರೀತಿಯಲ್ಲಿ ಸ್ಫೋಟಗೊಂಡಿತ್ತು .ಆದರೆ ಪದೇ ಪದೇ ಇಂತಹ ಅವಘಡಗಳು ಸಂಭವಿಸುತ್ತಿದ್ದರೂ ಕಾರ್ಖಾನೆಯ ಆಡಳಿತ ಮಂಡಳಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿಲ್ಲವೆಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ
ಸ್ಫೋಟದ ಮಾಹಿತಿ ತಿಳಿಯುತ್ತಿದ್ದಂತೆಯೇ ಅತ್ತಿಬೆಲೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುರಿತು ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಲೇಕ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಪ್ರಮುಖ ಔಷಧೀಯ ರಾಸಾಯನಿಕ ಮತ್ತು ಆಕ್ಟಿವ್ ಫಾರ್ಮಾಸ್ಯುಟಿಕಲ್ ಇಂಗ್ರಿಡಿಯಂಟ್ಸ್ ತಯಾರಿಕಾ ಕಂಪನಿಯಾಗಿದೆ. ಇದು ಪ್ರಪಂಚದ 65 ಕ್ಕೂ ಹೆಚ್ಚು ದೇಶಗಳಿಗೆ ತನ್ನ ಉತ್ಪನ್ನಗಳನ್ನು ರಫ್ತು ಮಾಡುತ್ತದೆ.