
ಬೆಂಗಳೂರು: ಸಾರ್ವಜನಿಕ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗಿದ್ದ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಮಂಡ್ಯ ತಾಲೂಕಿನ ಡಣಾಯಕನಪುರದ ಡಿ.ಎಸ್.ರವಿಕುಮಾರ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಪೀಠ ಈ ಆದೇಶ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರತಿಭಟನೆ ವೇಳೆ ಅರ್ಜಿದಾರರು ಆ ಕ್ಷಣದ ಒತ್ತಡದಲ್ಲಿ ತಪ್ಪಾಗಿ ಇಂತಹ ಘೋಷಣೆ ಕೂಗಿದ್ದಾರೆ. ಅವರಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಹಾಗಾಗಿ, ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದರು.
ಪ್ರಕರಣದ ಪೊಲೀಸರು ಎಫ್‌ಐಆರ್ ಹಾಗೂ ತನಿಖಾ ದಾಖಲೆಗಳನ್ನು ಪರಿಶೀಲಿಸಿದ ಪೀಠ, ಅರ್ಜಿದಾರರು ಉದ್ದೇಶಪೂರ್ವಕ ಕೃತ್ಯ ಅಲ್ಲ ಎಂದು ಅಭಿಪ್ರಾಯಪಟ್ಟು ಪ್ರಕರಣ ರದ್ದುಪಡಿಸಿತು.
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾರತ ಹಾಗೂ ಪ್ರಧಾನಿ ಮೋದಿ ಕುರಿತಾಗಿ ಪಾಕಿಸ್ತಾನದ ವಿದೇಶಾಂಗ ಮಂತ್ರಿಯು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆಕ್ಷೇಪಿಸಿ
2022ರ ಡಿ.18ರಂದು ಮಂಡ್ಯದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆದಿತ್ತು. ಈ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಆರೋಪ ಹಿನ್ನೆಲೆಯಲ್ಲಿ ಅರ್ಜಿದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು