
ಬೆಂಗಳೂರು: ರಾಜ್ಯ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ₹2000 ಮೊತ್ತವನ್ನು ಯಾವುದೇ ಕಾರಣಕ್ಕೂ ಹಳೆಯ ಸಾಲದ ಕಂತು, ಬಡ್ಡಿ ಅಥವಾ ಇತರೆ ಬಾಕಿಗಳಿಗೆ ಜಮೆ ಮಾಡಿಕೊಳ್ಳಬಾರದು ಎಂದು ಸರ್ಕಾರ ನಿರ್ದೇಶನ ನೀಡಿದೆ.
ಈ ಸಂಬಂಧ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಉಮಾ ಮಹಾದೇವನ್ ಅವರು ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿಗೆ (ಎಸ್‌ಎಲ್‌ಬಿಸಿ) ಸುತ್ತೋಲೆ ಮೂಲಕ ಖಡಕ್ ಸೂಚನೆ ನೀಡಿದ್ದಾರೆ.
ಇದರಿಂದಾಗಿ ಗೃಹಲಕ್ಷ್ಮಿ ಹಣ ಸಾಲಕ್ಕೆ ಜಮೆ ಮಾಡಿಕೊಳ್ಳುವ ಪ್ರಕ್ರಿಯೆಗೆ ಬ್ರೇಕ್ ಬಿದ್ದಂತಾಗಿದೆ. ಈ ಸಂಬಂಧ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೊಳಿಗೌಡ ಅವರು ಸಲ್ಲಿಸಿದ್ದ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಬಳಿಕ ಸರ್ಕಾರದ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.
ಸಿಎಂ ಅವರ ಈ ಆದೇಶದ ಬೆನ್ನಲ್ಲೇ ಇದೀಗ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ ಸಂಚಾಲಕರಿಗೆ ಅಧಿಕೃತ ಪತ್ರ ಬರೆದು, ರಾಜ್ಯದ ಎಲ್ಲಾ ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಹಾಗೂ ಇತರೆ ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸಬೇಕಾದ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಅಲ್ಲದೆ, ಮಾರ್ಗಸೂಚಿಗಳಂತೆ ಕೈಗೊಂಡ ಕ್ರಮಗಳ ಕುರಿತು ತಿಳಿಸುವಂತೆ ಎಸ್‌ಎಲ್‌ಬಿಸಿಗೆ ತಿಳಿಸಿದ್ದಾರೆ.
ಮಾರ್ಗಸೂಚಿಗಳಲ್ಲಿ ಪ್ರಮುಖವಾದವೆಂದರೆ, ಗೃಹಲಕ್ಷ್ಮಿ ಯೋಜನೆ ಯಡಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಕಂತು, ಬಡ್ಡಿ ಅಥವಾ ಇತರೆ ಸಾಲದ ಬಾಕಿಗೆ ಹೊಂದಾಣಿಕೆ ಮಾಡಿಕೊಳ್ಳುವಂತಿಲ್ಲ. ಫಲಾನುಭವಿಯ ಖಾತೆಯಿಂದ ಸದರಿ ಮೊತ್ತವನ್ನು ಯಾವುದೇ ಕಾರಣಕ್ಕೂ ಸ್ವಯಂಚಾಲಿತವಾಗಿ ಡೆಬಿಟ್ (ಆಟೋ ಡೆಬಿಟ್) ಅಥವಾ ಹೊಂದಾಣಿಕೆ ಮಾಡದಂತೆ ಬ್ಯಾಂಕುಗಳು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು. ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ಸಂಪೂರ್ಣವಾಗಿ ತಲುಪುವಂತೆ ಎಲ್ಲಾ ಬ್ಯಾಂಕ್ ಶಾಖೆಗಳಿಗೆ ಹಾಗೂ ಸಂಬಂಧಪಟ್ಟ ಸಿಬ್ಬಂದಿಗೆ ಸ್ಪಷ್ಟ ಸೂಚನೆಗಳನ್ನು ರವಾನಿಸಬೇಕು. ಫಲಾನುಭವಿಗಳ ಸ್ಪಷ್ಟ ಲಿಖಿತ ಒಪ್ಪಿಗೆ ಇಲ್ಲದೆ ಸಾಲದ ಬಾಕಿಗೆ ಈಗಾಗಲೇ ಕಡಿತಗೊಳಿಸಲಾಗಿರುವ ಹಣವನ್ನು ತಕ್ಷಣವೇ ಆ ಮಹಿಳೆಯರ ಖಾತೆಗೆ ಮರುಜಮೆ ಮಾಡಬೇಕು ಎಂದು ತಿಳಿಸಿದ್ದಾರೆ.