ದೇವನಹಳ್ಳಿ ರೈತರೊಂದಿಗೆ ಸಿಎಂ ಇಂದು ಸಭೆ

Published : Jul 04, 2025, 06:40 AM IST
Karnataka Chief Minister Siddaramaiah (File Photo/ANI)

ಸಾರಾಂಶ

ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ ನಡೆಸಲಿದ್ದಾರೆ.

ಬೆಂಗಳೂರು : ಉದ್ದೇಶಿತ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮನವೊಲಿಕೆ ಸಭೆ ನಡೆಸಲಿದ್ದಾರೆ.

ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆ.27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿ, 2022ರ ಫೆ.15ರಂದು ಆದೇಶಿಸಲಾಗಿದೆ. ಆದರೆ, ಭೂಸ್ವಾಧಿನಕ್ಕೆ ಸಂಬಂಧಿಸಿದಂತೆ ರೈತರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣ ಹೋಬಳಿಯ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ 495 ಎಕರೆ ಭೂಮಿ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಈಗಾಗಲೇ ಪ್ರಕಟಿಸಲಾಗಿದೆ.

ಆದರೆ, ಉಳಿದ 10 ಗ್ರಾಮಗಳ ರೈತರೂ ಕೂಡ ಭೂಸ್ವಾಧೀನ ಮಾಡಿಕೊಳ್ಳದಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ಸಂಬಂಧ ಚರ್ಚೆ ನಡೆಸಲು, ಭೂಮಿಯನ್ನು ನೀಡುವುದಕ್ಕೆ ಸಂಬಂಧಿಸಿದಂತೆ ರೈತರ ಮನವೊಲಿಕೆ ಮಾಡಲು ಸಿದ್ದರಾಮ್ಯಯ ಸಭೆ ನಡೆಸಲಿದ್ದಾರೆ.

ರೈತರೊಂದಿಗಿನ ಸಭೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗುರುವಾರ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಎಚ್‌.ಕೆ. ಪಾಟೀಲ್‌, ಎಂ.ಬಿ. ಪಾಟೀಲ್‌, ಕೆ.ಎಚ್‌. ಮುನಿಯಪ್ಪ, ಬಿ.ಎಸ್‌. ಸುರೇಶ್‌, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರೊಂದಿಗೆ ಸಭೆ ನಡೆಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಯೋಜನೆ ಮತ್ತು ರೈತರ ಮನವೊಲಿಕೆಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಬಗ್ಗೆ ಮಾಹಿತಿಯನ್ನು ಪಡೆದರು.

ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ

ಚನ್ನರಾಯಪಟ್ಟಣ ಹೋಬಳಿಯಲ್ಲಿ ಹೈಟೆಕ್‌ ಡಿಫೆನ್ಸ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ನಿರ್ಮಾಣಕ್ಕೆ 10 ಗ್ರಾಮಗಳ 1,282 ಎಕರೆ ಭೂಮಿಯ ಅವಶ್ಯಕತೆಯಿದೆ. ಆದರೆ, ಭೂಮಿ ನೀಡಲು ರೈತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕಾಗಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಲಿದ್ದಾರೆ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಹೊಸ ಕಾಯ್ದೆಯನ್ವಯ ಸೂಕ್ತ ಪರಿಹಾರ ನೀಡಲಾಗುವುದು.

-ಎಂ.ಬಿ.ಪಾಟೀಲ್‌, ಕೈಗಾರಿಕಾ ಸಚಿವ

PREV
Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!