ಬೆಂಗಳೂರು ಬೆಳೆಯುತ್ತಿದೆ ಹೀಗಾಗಿ 10 ವರ್ಷದಲ್ಲಿ ಹೊಸ ಏರ್‌ಪೋರ್ಟ್, ಸಚಿವರಿಂದ ಸಾಧಕರಿಗೆ ಎಫ್‌ಕೆಸಿಸಿಐ ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ
ಬೆಂಗಳೂರು(ಸೆ.22): ಸಿಲಿಕಾನ್ ಸಿಟಿ ಬೆಂಗಳೂರು ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 10 ವರ್ಷದಲ್ಲಿ ತುಮಕೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಚಿಂತನೆ ಹೊಂದಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ(ಎಫ್‌ಕೆಸಿಸಿಐ)ಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ವಿವಿಧ ವಲಯಗಳ ಸಾಧಕರಿಗೆ ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗದಿದ್ದರೆ ನಾವು ಈಗ ಎಚ್‌ಎಎಲ್ ವಿಮಾನ ನಿಲ್ದಾಣವನ್ನು ದೇಶೀಯ ವಿಮಾನ ಸಂಚಾರಕ್ಕೂ ಬಳಸಿಕೊಳ್ಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತಿತ್ತು. ಇನ್ನು 10 ವರ್ಷದ ಬಳಿಕ ದೇವನಹಳ್ಳಿಯ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸ್ಥಿತಿಯೂ ಎಚ್‌ಎಎಲ್ ವಿಮಾನ ನಿಲ್ದಾಣದಂತೆ ಆಗುತ್ತದೆ. ಆದ್ದರಿಂದ ಮುಂದಿನ 10 ವರ್ಷದಲ್ಲಿ ತುಮಕೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಚಿಂತನೆ ಇದೆ ಎಂದು ಸ್ಪಷ್ಟಪಡಿಸಿದರು.
ಯುಪಿಐ ಪಾವತಿ ವಿಫಲವಾದಾಗ ಏನ್ ಮಾಡ್ಬೇಕು? ಇಲ್ಲಿದೆ ಮಾಹಿತಿ
ಬೆಂಗಳೂರು ಬೃಹದಾಕಾರವಾಗಿ ಬೆಳೆಯುತ್ತಿದ್ದು ಉತ್ತರ ಭಾಗವನ್ನು ಅಭಿವೃದ್ಧಿಪಡಿಸಬೇಕಿದೆ. ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳ ಅಭಿವೃದ್ಧಿಗೂ ಸರ್ಕಾರ ಒತ್ತು ನೀಡಿದೆ. ಬಾಗಲಕೋಟೆ, ರಾಯಚೂರು, ಕೊಪ್ಪಳ, ದಾವಣಗೆರೆ ಮತ್ತು ಚಿಕ್ಕಮಗಳೂರಿನಲ್ಲೂ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ವಿವಿಧ ವಲಯದಲ್ಲಿ ಸಾಧನೆ ಮಾಡಿದ ಹಲವು ಕಂಪೆನಿಗಳಿಗೆ ಇದೇ ಸಂದರ್ಭದಲ್ಲಿ ರಫ್ತು ಶ್ರೇಷ್ಠತಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಫ್‌ಕೆಸಿಸಿಐ ಅಧ್ಯಕ್ಷ ಡಾ.ಪ್ರಸಾದ್, ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷೆ ಉಮಾ ರೆಡ್ಡಿ, ಎಸ್‌ಬಿಐ ಪ್ರಧಾನ ವ್ಯವಸ್ಥಾಪಕ ರಾಧಾಕೃಷ್ಣ, ಎಫ್‌ಕೆಸಿಸಿಐನ ಬಿ.ವಿ.ಗೋಪಾಲರೆಡ್ಡಿ, ರಮೇಶ್‌ಚಂದ್ರ ಲಹೋಟಿ, ಕೆ.ಲಕ್ಷ್ಮಣ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರಿನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ ವಿವಿಧ ವಲಯಗಳ ಸಾಧಕರಿಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಮಾಡಿದರು. ಎಫ್‌ಕೆಸಿಸಿಐ ಅಧ್ಯಕ್ಷ ಡಾ.ಪ್ರಸಾದ್, ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಮತ್ತಿತರರು ಹಾಜರಿದ್ದರು.