ಬಜೆಟ್ ನಲ್ಲಿ ನಾರಿಗೆ ಗೃಹಲಕ್ಷ್ಮಿ ಬಲ; ಸ್ತನ ಕ್ಯಾನ್ಸರ್ ತಡೆಗೆ ಕ್ರಮ,ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್

By Suvarna NewsFirst Published Feb 16, 2024, 12:32 PM IST
Highlights

ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳೆಯರಿಗೆ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿಲ್ಲ. ಆದರೆ, ಗೃಹಲಕ್ಷ್ಮಿ ಯೋಜನೆಗೆ  28,608 ಕೋಟಿ ರೂ. ಮೀಸಲಿಟ್ಟಿದ್ದಾರೆ. ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಯೋಜನೆಗಳನ್ನು ಘೋಷಿಸಿದ್ದಾರೆ. 

ಬೆಂಗಳೂರು (ಫೆ.16): ರಾಜ್ಯ ಬಜೆಟ್ ನಲ್ಲಿ 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ. ಒದಗಿಸಲಾಗಿದೆ. ಹಾಗೆಯೇ ಮಕ್ಕಳ ಉದ್ದೇಶಿತ ಯೋಜನೆಗಳಿಗೆ 54,617 ಕೋಟಿ ರೂ. ಒದಗಿಸಲಾಗಿದೆ. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದರು. ಇನ್ನು ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು  ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಬಜೆಟ್ ನಲ್ಲಿ ತಿಳಿಸಿದ್ದಾರೆ. ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಉತ್ತೇಜನ ನೀಡಲು ಪ್ರಾರಂಭಿಸಿರುವ ಗೃಹಲಕ್ಷ್ಮೀ ಯೋಜನೆಯ ವಿಸ್ತರಣೆಗೆ ಕೂಡ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ ಆರ್ಥಿಕ ಬೆಂಬಲ ನೀಡಲು ಪ್ರಾರಂಭಿಸಿದ ಗೃಹಲಕ್ಷ್ಮಿ ಯೋಜನೆಗೆ 2024-25ನೇ ಸಾಲಿಗೆ ಬಜೆಟ್ ನಲ್ಲಿ ಸರ್ಕಾರ 28,608 ಕೋಟಿ ರೂ. ಮೀಸಲಿಟ್ಟಿದೆ. ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತಿದೆ. ಈ ಯೋಜನೆಗೆ  ಎಪಿಎಲ್, ಬಿಪಿಎಲ್, ಎಎವೈ ಪಡಿತರ ಚೀಟಿ ಹೊಂದಿರುವ 1.33 ಕೋಟಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಇನ್ನು ಈ ವರ್ಷದ ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಈ ತನಕ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. 

ಕರ್ನಾಟಕ ಬಜೆಟ್ 2024: ಕೃಷಿ ಸಂಬಂಧಿತ ಎಲ್ಲ ಇಲಾಖೆಗಳ ಸಮನ್ವಯಕ್ಕೆ'ಕೃಷಿ ಅಭಿವೃದ್ಧಿ ಪ್ರಾಧಿಕಾರ' ರಚನೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚುಟಿ
ಅಂಗನವಾಡಿ ಮೂಲಕ ಮಹಿಳಾ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾರ್ಯಗಳನ್ನು ಸುಗಮಗೊಳಿಸಲು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ 75,938 ಸ್ಮಾರ್ಟ್ ಫೋನ್ ಗಳನ್ನು ಒದಗಿಸೋದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಗ್ರ್ಯಾಚುಟಿ ಸವಲತ್ತುಗಳನ್ನು ನೀಡಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಘೋಷಿಸಿದ್ದಾರೆ. ಇನ್ನು 20 ಸಾವಿರ  ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮಕ್ಕಳ ಪ್ರಾರಂಭಿಕ ಶಿಕ್ಷಣ ಹಾಗೂ ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಒದಗಿಸಲಾಗಿದೆ.

ಅಂಗನವಾಡಿಗೆ ಸ್ವಂತ ಕಟ್ಟಡ
ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. 

ಜಿಲ್ಲಾಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಪತ್ತೆ ಯಂತ್ರ
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಹಾಗೂ ಗರ್ಭಕಂಠ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್ ಮಮ್ಮೋಗ್ರಾಫಿ ಯಂತ್ರಗಳನ್ನು ಅಳವಡಿಸಲಾಗುವುದು. ಹಾಗೆಯೇ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾಸ್ಪತ್ರೆಗಳಿಗೆ Colposcopy ಉಪಕರಣಗಳ ಖರೀದಿಗೆ ಒಟ್ಟು 21 ಕೋಟಿ ರೂ. ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 

ಕರ್ನಾಟಕ ಬಜೆಟ್ 2024: ಶಾಲಾ- ಪಿಯು ಕಾಲೇಜುಗಳಿಗೆ 850 ಕೋಟಿ ರೂ.; 2000 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಆರಂಭ

ಮಾಜಿ ದೇವದಾಸಿಯರ ಕಲ್ಯಾಣಕ್ಕೆ ವಿವಿಧ ಕಾರ್ಯಕ್ರಮ
ಮಾಜಿ ದೇವದಾಸಿಯರಿಗೆ ಪ್ರಸ್ತುತ ನೀಡುತ್ತಿರುವ ಮಾಸಾಶನ 1500ರೂ.ನಿಂದ 2000ರೂ.ಗೆ ಹೆಚ್ಚಳ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ನೀಡಲಾಗುವುದು. ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು. 
 

click me!