
ಅಹಮದಾಬಾದ್(ಮಾ.09): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಉಭಯ ತಂಡಗಳು ಸಮಬಲದ ಹೋರಾಟ ತೋರಿವೆ. ಮೊದಲ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಆಸ್ಟ್ರೇಲಿಯಾ ತಂಡವು 2 ವಿಕೆಟ್ ಕಳೆದುಕೊಂಡು 75 ರನ್ ಬಾರಿಸಿದೆ. ಅಶ್ವಿನ್ ಹಾಗೂ ಶಮಿ ತಲಾ ಒಂದೊಂದು ವಿಕೆಟ್ ಕಬಳಿಸಿದ್ದಾರೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು ದಿಟ್ಟ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಟ್ರಾವಿಸ್ ಹೆಡ್ ಹಾಗೂ ಉಸ್ಮಾನ್ ಖವಾಜ ಅರ್ಧಶತಕದ ಜತೆಯಾಟವಾಡುವ ಮೂಲಕ ಭರ್ಜರಿ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 93 ಎಸೆತಗಳನ್ನು ಎದುರಿಸಿ 61 ರನ್‌ಗಳ ಜತೆಯಾಟವಾಡಿತು. ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದ್ದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. ಟ್ರಾವಿಸ್ ಹೆಡ್ 44 ಎಸೆತಗಳನ್ನು ಎದುರಿಸಿ 7 ಆಕರ್ಷಕ ಬೌಂಡರಿ ಸಹಿತ 32 ರನ್ ಬಾರಿಸಿ ರವೀಂದ್ರ ಜಡೇಜಾಗೆ ವಿಕೆಟ್ ಒಪ್ಪಿಸಿದರು. ಇದಾಗಿ ಆಸ್ಟ್ರೇಲಿಯಾ ತನ್ನ ಖಾತೆಗೆ 11 ರನ್ ಸೇರಿಸುವಷ್ಟರಲ್ಲಿ ತಂಡದ ನಂಬಿಗಸ್ಥ ಬ್ಯಾಟರ್ ಮಾರ್ನಸ್ ಲಬುಶೇನ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅನುಭವಿ ಮೊಹಮ್ಮದ್ ಶಮಿ ಎಸೆದ ಇನ್‌ಸ್ವಿಂಗ್ ಚೆಂಡು ಮಾರ್ನಸ್ ಲಬುಶೇನ್ ಬ್ಯಾಟ್ ಅಂಚನ್ನು ಸವರಿ ವಿಕೆಟ್‌ಗೆ ಅಪ್ಪಳಿಸಿತು.
ಖವಾಜ ಎಚ್ಚರಿಕೆಯ ಆಟ: ಒಂದು ತುದಿಯಲ್ಲಿ ಆಸ್ಟ್ರೇಲಿಯಾ ತಂಡವು ಟ್ರಾವಿಸ್ ಹೆಡ್ ಹಾಗೂ ಮಾರ್ನಸ್ ಲಬುಶೇನ್ ವಿಕೆಟ್ ಕಳೆದುಕೊಂಡಿತಾದರೂ ಮತ್ತೊಂದು ತುದಿಯಲ್ಲಿ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜ ಅವುಡುಗಚ್ಚಿ ಆಡುವ ಮೂಲಕ ತಂಡಕ್ಕೆ ಆಸರೆಯಾಗುವ ಯತ್ನ ನಡೆಸಿದ್ದಾರೆ. ಖವಾಜ 94 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 27 ರನ್ ಗಳಿಸಿದರೆ, ಮತ್ತೊಂದು ತುದಿಯಲ್ಲಿ ಸ್ಟೀವ್ ಸ್ಮಿತ್ ಕೇವಲ 2 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಅಹಮದಾಬಾದ್ ಟೆಸ್ಟ್‌ಗೆ ಸಾಕ್ಷಿಯಾದ ಪ್ರಧಾನಿ ಮೋದಿ, ಆಸೀಸ್ ಪ್ರಧಾನಿ ಆಂಥೋನಿ! ಕ್ರಿಕೆಟ್‌ನ ಐತಿಹಾಸಿಕ ಕ್ಷಣ
ಭಾರತ ತಂಡದಲ್ಲಿ ಒಂದು ಬದಲಾವಣೆ: ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್‌ಗಳ ಆಘಾತಕಾರಿ ಸೋಲು ಅನುಭವಿಸಿತ್ತು. ಹೀಗಾಗಿ ನಾಲ್ಕನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಒಂದು ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಹೈದರಾಬಾದ್ ಮೂಲದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿದ್ದು, ಅನುಭವಿ ವೇಗಿ ಮೊಹಮ್ಮದ್ ಶಮಿ ತಂಡ ಕೂಡಿಕೊಂಡಿದ್ದಾರೆ. ಶಮಿ ತಮ್ಮ ಮೊನಚಾದ ದಾಳಿ ಮೂಲಕ ನಂ.1 ಬ್ಯಾಟರ್ ಮಾರ್ನಸ್ ಲಬುಶೇನ್ ಬಲಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.