
ಅಹಮದಾಬಾದ್(ಮಾ.13): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಅಹಮದಾಬಾದ್ ಟೆಸ್ಟ್ ಪಂದ್ಯವು ನೀರಸ ಡ್ರಾನಲ್ಲಿ ಅಂತ್ಯವಾಗಿದೆ. ಇದೀಗ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಜಯಿಸಿದೆ. ಮೊದಲೆರಡು ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿತ್ತು. ಇದಾದ ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್ ಜಯ ಸಾಧಿಸಿತ್ತು. ಇದೀಗ ಕೊನೆಯ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ 88 ರನ್‌ಗಳ ಇನಿಂಗ್ಸ್ ಹಿನ್ನಡೆಯೊಂದಿಗೆ 5ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಆರಂಭದಲ್ಲೇ ನೈಟ್ ವಾಚ್‌ಮನ್ ಮ್ಯಾಥ್ಯೂ ಕುಹ್ನೆಮನ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಮಾರ್ನಸ್ ಲಬುಶೇನ್ ಹಾಗೂ ಟ್ರಾವಿಸ್ ಹೆಡ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಇನಿಂಗ್ಸ್ ಮುನ್ನಡೆ ಒದಗಿಸಿಕೊಡಲು ನೆರವಾದರು. ಎರಡನೇ ವಿಕೆಟ್‌ಗೆ ಈ ಜೋಡಿ 292 ಎಸೆತಗಳನ್ನು ಎದುರಿಸಿ 139 ರನ್‌ಗಳ ಜತೆಯಾಟವಾಡಿತು.
ಶತಕದ ಹೊಸ್ತಿಲಲ್ಲಿ ಮುಗ್ಗರಿಸಿದ ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ಪರ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಮತ್ತೊಮ್ಮೆ ಆಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಆದರೆ ಕೇವಲ 10 ರನ್ ಅಂತರದಲ್ಲಿ ಶತಕ ಸಿಡಿಸುವ ಅವಕಾಶವನ್ನು ಕೈಚೆಲ್ಲಿದರು. ಭಾರತೀಯ ಬೌಲರ್‌ಗಳನ್ನು ದಿಟ್ಟವಾಗಿಯೇ ಎದುರಿಸಿದ ಟ್ರಾವಿಸ್ ಹೆಡ್ 163 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ 90 ರನ್ ಬಾರಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.
ಇನ್ನು ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ನಂ.1 ಟೆಸ್ಟ್ ಬ್ಯಾಟರ್ ಮಾರ್ನಸ್ ಲಬುಶೇನ್ 213 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 63 ರನ್ ಬಾರಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ನಾಯಕ ಸ್ಟೀವ್ ಸ್ಮಿತ್ 10 ರನ್ ಗಳಿಸಿದರು. ಆಸ್ಟ್ರೇಲಿಯಾ ತಂಡವು 78.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತ್ತು. ಈ ಸಂದರ್ಭದಲ್ಲಿ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.
ಹೇಗಿತ್ತು ಅಹಮದಾಬಾದ್ ಟೆಸ್ಟ್?
ಅಹಮದಾಬಾದ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟ್ ಬೀಸಿದ ಉಸ್ಮಾನ್ ಖವಾಜ(180) ಹಾಗು ಕ್ಯಾಮರೋನ್ ಗ್ರೀನ್(114) ಆಕರ್ಷಕ ಶತಕಗಳ ನೆರವಿನಿಂದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 480 ರನ್ ಗಳಿಸಿ ಸರ್ವಪತನ ಕಂಡಿತು. ಭಾರತ ಪರ ರವಿಚಂದ್ರನ್ ಅಶ್ವಿನ್ 91 ರನ್ ನೀಡಿ 6 ವಿಕೆಟ್ ಪಡೆದರು.
Ahmedabad Test: ಶತಕದ ಹೊಸ್ತಿಲಲ್ಲಿ ಮುಗ್ಗರಿಸಿದ ಟ್ರಾವಿಸ್ ಹೆಡ್, ಆಸೀಸ್‌ಗೆ 67 ಮುನ್ನಡೆ
ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ಮೂಲಕ ಆಸೀಸ್ ಬೌಲರ್‌ಗಳನ್ನು ಕಾಡಿತು. ಭಾರತ ಪರ ಶುಭ್‌ಮನ್ ಗಿಲ್(128) ಹಾಗೂ ವಿರಾಟ್ ಕೊಹ್ಲಿ(186) ಅಮೋಘ ಶತಕ ಸಿಡಿಸಿ ಮಿಂಚಿದರೆ, ಆಲ್ರೌಂಡರ್ ಅಕ್ಷರ್ ಪಟೇಲ್(79) ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ 571 ರನ್ ಬಾರಿಸಿ ಸರ್ವಪತನ ಕಂಡಿತು. ಈ ಮೂಲಕ ಮೊದಲ ಇನಿಂಗ್ಸ್‌ನಲ್ಲಿ ಭಾರತ 91 ರನ್‌ಗಳ ಮುನ್ನಡೆ ಗಳಿಸಿತು. ಇನ್ನು ಎರಡನೇ ಇನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ, ಟ್ರಾವಿಸ್ ಹೆಡ್(90) ಹಾಗೂ ಮಾರ್ನಸ್ ಲಬುಶೇನ್(63*) ರನ್‌ಗಳ ನೆರವಿನಿಂದ 2 ವಿಕೆಟ್ ಕಳೆದುಕೊಂಡು 175 ರನ್ ಬಾರಿಸಿದಾಗ ಪಂದ್ಯ ಡ್ರಾ ಮಾಡಿಕೊಳ್ಳಲು ಉಭಯ ತಂಡದ ನಾಯಕರು ಸಮ್ಮತಿ ಸೂಚಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.