
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಸಭೆಯ ಬಳಿಕ ಅಜಿತ್ ಅಗರ್ಕರ್ ಬಿಸಿಸಿಐ ಚೀಫ್ ಸೆಲೆಕ್ಟರ್ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆಯಿದೆ. ಒಪ್ಪಂದ ವಿಸ್ತರಣೆ ಬಗ್ಗೆ ಬಿಸಿಸಿಐ ಕಡೆಯಿಂದ ಯಾವುದೇ ಪಾಸಿಟಿವ್ ರೆಸ್ಪಾನ್ಸ್ ಬಾರದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರಿಗೆ ಅಗರ್ಕರ್ ಶೀಘ್ರದಲ್ಲೇ ಥ್ಯಾಂಕ್ಸ್ ಹೇಳುವ ಇಮೇಲ್ ಕಳುಹಿಸಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
2023ರ ಜುಲೈನಲ್ಲಿ ಅಗರ್ಕರ್ ಟೀಂ ಇಂಡಿಯಾದ ಚೀಫ್ ಸೆಲೆಕ್ಟರ್ ಆಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಜೂನ್‌ನಲ್ಲಿ ಮುಗಿದಿದ್ದ ಅವರ ಒಪ್ಪಂದವನ್ನು ಬಿಸಿಸಿಐ ಅಕ್ಟೋಬರ್ 4ರವರೆಗೆ ವಿಸ್ತರಿಸಿತ್ತು. ಮುಂದಿನ ವರ್ಷ ಅಕ್ಟೋಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ವರೆಗೆ ತಮ್ಮ ಒಪ್ಪಂದವನ್ನು ವಿಸ್ತರಿಸಬೇಕು ಎಂದು ಅಗರ್ಕರ್ ಬಯಸಿದ್ದರು. ಆದರೆ ಬಿಸಿಸಿಐ ಉನ್ನತ ಅಧಿಕಾರಿಗಳ ಜೊತೆ ಈ ಬಗ್ಗೆ ಒಮ್ಮತ ಮೂಡಿಲ್ಲ. ರೋಹಿತ್ ಶರ್ಮಾ ಅವರ ಏಕದಿನ ವೃತ್ತಿಜೀವನವನ್ನು ಅಂತ್ಯಗೊಳಿಸಲು ಅಗರ್ಕರ್ ಪ್ರಯತ್ನಿಸಿದ್ದರು ಎಂಬ ಆರೋಪವೇ ಅವರಿಗೆ ಮುಳುವಾಗಿದೆ ಎನ್ನಲಾಗುತ್ತಿದೆ.
2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ನಮ್ಮ ಪ್ಲಾನ್‌ನಲ್ಲಿ ಇಲ್ಲ ಎಂದು ಅಗರ್ಕರ್ ಮತ್ತು ಅವರ ತಂಡ ಖಡಕ್ ಆಗಿ ಹೇಳಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ರೋಹಿತ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ್ದರು. ಇದೇ ವಿಚಾರ ಆಯ್ಕೆ ಸಮಿತಿ ಮತ್ತು ಬಿಸಿಸಿಐ ನಾಯಕರ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಯಿತು ಎನ್ನಲಾಗಿದೆ. ಅಗರ್ಕರ್ ಜಾಗಕ್ಕೆ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮುಖ್ಯಸ್ಥ, ಟೀಂ ಇಂಡಿಯಾದ ಮಾಜಿ ಆಟಗಾರ ವಿ.ವಿ.ಎಸ್. ಲಕ್ಷ್ಮಣ್ ಹೊಸ ಚೀಫ್ ಸೆಲೆಕ್ಟರ್ ಆಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಅಗರ್ಕರ್ ನೇತೃತ್ವದಲ್ಲಿ ಭಾರತೀಯ ಕ್ರಿಕೆಟ್ ತಂಡ ಅದ್ಭುತ ಸಾಧನೆಗಳನ್ನು ಮಾಡಿದೆ. ಅವರು ಚೀಫ್ ಸೆಲೆಕ್ಟರ್ ಆಗಿದ್ದಾಗಲೇ ಭಾರತ 2024 ಮತ್ತು 2026ರ ಟಿ20 ವಿಶ್ವಕಪ್ ಗೆದ್ದುಕೊಂಡಿತು. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಜೊತೆಗೆ ದುಬೈನಲ್ಲಿ ನಡೆದ ಏಷ್ಯಾಕಪ್‌ನಲ್ಲೂ ಭಾರತ ಸೋಲಿಲ್ಲದೆ ಚಾಂಪಿಯನ್ ಆಗಿತ್ತು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬಳಿಕ, ತಂಡವನ್ನು ಅತ್ಯಂತ ಸಮರ್ಥವಾಗಿ ಮುನ್ನಡೆಸುವಲ್ಲಿ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಯಶಸ್ವಿಯಾಗಿತ್ತು.
ಕೆಲ ಮಾಧ್ಯಮಗಳ ವರದಿಗಳ ಪ್ರಕಾರ, ಇದೇ ಸೆಪ್ಟೆಂಬರ್ 27ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿದ ಬಳಿಕ ಅಜಿತ್ ಅಗರ್ಕರ್ ತಮ್ಮ ಚೀಫ್ ಸೆಲೆಕ್ಟರ್ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ವರದಿಯಾಗಿದೆ. ವೆಸ್ಟ್ ಇಂಡೀಸ್ ಎದುರಿನ ಏಕದಿನ ಸರಣಿಗೆ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಾಗೂ ಸಾಕಷ್ಟು ಸಮಯದಿಂದ ಭಾರತ ತಂಡದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಶಮಿ ಅವರನ್ನು ಬಿಸಿಸಿಐ ಆಯ್ಕೆ ಸಮಿತಿಯು ಆಯ್ಕೆ ಮಾಡಲಿದೆಯೇ ಅಥವಾ ಇಲ್ಲವೇ ಎನ್ನುವ ಕುತೂಹಲ ಜೋರಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.