
ಹೋಬರ್ಟ್(ಜ.15): ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ (Australia vs England) ತಂಡಗಳ ನಡುವಿನ ಆ್ಯಷಸ್ ಟೆಸ್ಟ್ ಸರಣಿಯ (Ashes Test Series) ಕೊನೆಯ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ಆತಿಥೇಯ ಆಸೀಸ್ ತಂಡವು ಮೇಲುಗೈ ಸಾಧಿಸಿದೆ. ಹೋಬರ್ಟ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯದ ವೇಳೆಗೆ ಆಸ್ಟ್ರೇಲಿಯಾ ಎರಡನೇ ಇನಿಂಗ್ಸ್‌ನಲ್ಲಿ 3 ವಿಕೆಟ್ ಕಳೆದುಕೊಂಡು 37 ರನ್ ಬಾರಿಸಿದ್ದು, ಒಟ್ಟಾರೆ 152 ರನ್ ಗಳಿಸಿದೆ. ಮೂರನೇ ದಿನದಾಟ ಸಾಕಷ್ಟು ಕುತೂಹಲ ಕೆರಳಿಸಿದೆ.
ಈಗಾಗಲೇ ಮೊದಲ 3 ಟೆಸ್ಟ್ ಪಂದ್ಯಗಳನ್ನು ಜಯಿಸುವ ಮೂಲಕ ಆ್ಯಷಸ್ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡವು, ಕೊನೆಯ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 241 ರನ್ ಗಳಿಸಿದ್ದ ಆಸ್ಟ್ರೇಲಿಯಾ ತಂಡಕ್ಕೆ ಕೊನೆಯಲ್ಲಿ ನೇಥನ್ ಲಯನ್ ಚುರುಕಾಗಿ 31 ರನ್‌ಗಳಿಸುವ ಮೂಲಕ ತಂಡದ ಮೊತ್ತವನ್ನು ಮುನ್ನೂರರ ಗಡಿ ದಾಟಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್‌ನಲ್ಲಿ 303 ರನ್‌ಗಳಿಗೆ ಆಲೌಟ್ ಆಯಿತು.
ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡದ ಆರಂಭ ಕೂಡಾ ಅಷ್ಟೇನು ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್ ರೋರಿ ಬರ್ನ್ಸ್ ಖಾತೆ ತೆರೆಯುವ ಮುನ್ನವೇ ರನೌಟ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಮತ್ತೋರ್ವ ಆರಂಭಿಕ ಬ್ಯಾಟರ್ ಜಾಕ್ ಕ್ರಾವ್ಲೆ ಬ್ಯಾಟಿಂಗ್ ಕೇವಲ 18 ರನ್‌ಗಳಿಗೆ ಸೀಮಿತವಾಯಿತು. ಇನ್ನು ಮೂರನೇ ವಿಕೆಟ್‌ಗೆ ಡೇವಿಡ್ ಮಲಾನ್ (Dawid Malan) ಹಾಗೂ ಜೋ ರೂಟ್ (Joe Root) ಜೋಡಿ 49 ರನ್‌ಗಳ ಜತೆಯಾಟವಾಡುವ ಮೂಲಕ ಕೆಲಕಾಲ ತಂಡಕ್ಕೆ ಆಸರೆಯಾದರು. ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ಡೇವಿಡ್ ಮಲಾನ್ 25 ರನ್‌ಗಳಿಸಿ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ನಾಯಕ ಜೋ ರೂಟ್ ಕೆಲಕಾಲ ಇಂಗ್ಲೆಂಡ್ ಬೌಲರ್‌ಗಳೆದುರು ಪ್ರತಿರೋಧ ತೋರಿದರು. ಅಂತಿಮವಾಗಿ ರೂಟ್ 34 ರನ್‌ಗಳಿಸಿ ಪ್ಯಾಟ್ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ಬೆನ್ ಸ್ಟೋಕ್ಸ್ ಕೇವಲ 4 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು.
ಒಂದು ಹಂತದಲ್ಲಿ ಕೇವಲ 110 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಇಂಗ್ಲೆಂಡ್ ತಂಡಕ್ಕೆ 7ನೇ ವಿಕೆಟ್‌ಗೆ ಸ್ಯಾಮ್ ಬಿಲ್ಲಿಂಗ್ಸ್ ಹಾಗೂ ಕ್ರಿಸ್ ವೋಕ್ಸ್ ಜೋಡಿ 42 ರನ್‌ಗಳ ಜತೆಯಾಟವಾಡುವ ಮೂಲಕ ಫಾಲೋ ಆನ್ ಭೀತಿಯಿಂದ ತಂಡವನ್ನು ಪಾರು ಮಾಡಿದರು. ಬಿಲ್ಲಿಂಗ್ಸ್ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಆಲ್ರೌಂಡರ್ ಕ್ರಿಸ್ ವೋಕ್ಸ್ 36 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಅಂತಿಮವಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್‌ನಲ್ಲಿ 188 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು 115 ರನ್‌ಗಳ ಮೊದಲ ಇನಿಂಗ್ಸ್ ಮುನ್ನಡೆ ಪಡೆಯಿತು.
Ashes Test: ಸಂಕಷ್ಟದಲ್ಲಿದ್ದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಶತಕದಾಸರೆ..!
ಇನ್ನು ಎರಡನೇ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಮತ್ತೊಮ್ಮೆ ಆರಂಭಿಕ ಆಘಾತ ಅನುಭವಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ಶೂನ್ಯ ಸುತ್ತಿದ್ದ ಡೇವಿಡ್ ವಾರ್ನರ್, ಇದೀಗ ಎರಡನೇ ಇನಿಂಗ್ಸ್‌ನಲ್ಲೂ ಶೂನ್ಯ ಸುತ್ತಿದರು. ಇನ್ನು ಉಸ್ಮಾನ್ ಖವಾಜ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಮಾರ್ನಸ್ ಲಬುಶೇನ್ ಆಟ ಕೇವಲ 5 ರನ್‌ಗಳಿಗೆ ಸೀಮಿತವಾಯಿತು. ಎರಡನೇ ದಿನದಾಟದಂತ್ಯದ ವೇಳೆಗೆ ಸ್ಟೀವ್ ಸ್ಮಿತ್ 17 ಹಾಗೂ ನೈಟ್ ವಾಚ್‌ಮನ್ ಸ್ಕಾಟ್ ಬೊಲ್ಯಾಂಡ್ 3 ರನ್ ಗಳಿಸಿ ಮೂರನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.