ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಲ್ಲಿ ಈ ಬದಲಾವಣೆ ಮಾಡಿ; ರೋಹಿತ್‌ಗೆ ಸೂಪರ್ ಐಡಿಯಾ ಕೊಟ್ಟ ಅಶ್ವಿನ್

Published : Feb 04, 2025, 01:45 PM IST
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಲ್ಲಿ ಈ ಬದಲಾವಣೆ ಮಾಡಿ; ರೋಹಿತ್‌ಗೆ ಸೂಪರ್ ಐಡಿಯಾ ಕೊಟ್ಟ ಅಶ್ವಿನ್

ಸಾರಾಂಶ

ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟವಾಗಿದ್ದು, ಫೆಬ್ರವರಿ ೧೯ರಿಂದ ಆರಂಭವಾಗಲಿದೆ. ಮಾಜಿ ಕ್ರಿಕೆಟಿಗ ಅಶ್ವಿನ್, ಪ್ರಭಾವಿ ಸ್ಪಿನ್ನರ್ ವರುಣ್ ಚಕ್ರವರ್ತಿಯನ್ನು ತಂಡಕ್ಕೆ ಸೇರಿಸಲು ಸಲಹೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ೨೦ ಸರಣಿಯಲ್ಲಿ ಚಕ್ರವರ್ತಿ ಅದ್ಭುತ ಪ್ರದರ್ಶನ ನೀಡಿದ್ದರು. ತಂಡದಲ್ಲಿ ಬದಲಾವಣೆಗೆ ಫೆಬ್ರವರಿ ೧೧ರವರೆಗೆ ಅವಕಾಶವಿದೆ.

ಚೆನ್ನೈ: ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ ಫೆಬ್ರವರಿ 19ರಿಂದ ಮಿನಿ ವಿಶ್ವಕಪ್ ಟೂರ್ನಿ ಎಂದೇ ಕರೆಸಿಕೊಳ್ಳುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಚಾಲನೆ ಸಿಗಲಿದೆ. ಈಗಾಗಲೇ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್, ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡದಲ್ಲಿ ಕೊಂಚ ಬದಲಾವಣೆ ಮಾಡಿ ಕಣಕ್ಕಿಳಿಯಿರಿ ಎನ್ನುವ ಕಿವಿಮಾತು ಹೇಳಿದ್ದಾರೆ.

ಇತ್ತೀಚೆಗಷ್ಟೇ ನಡೆದ ಇಂಗ್ಲೆಂಡ್ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಆಟಗಾರರ ಪ್ರದರ್ಶನವನ್ನು ಗಮನಿಸಿದ ಅಶ್ವಿನ್, ರೋಹಿತ್ ಶರ್ಮಾ ಪಡೆಗೆ ಮಹತ್ವದ ಕಿವಿಮಾತು ಹೇಳಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡವು ನಾಲ್ವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಇದೀಗ ಅಶ್ವಿನ್ ಇದರ ಜತೆಗೆ ಮತ್ತೋರ್ವ ಪ್ರತಿಭಾನ್ವಿತ ಸ್ಪಿನ್ನರ್ ಆಗಿರುವ ವರುಣ್ ಚಕ್ರವರ್ತಿಗೆ ಭಾರತ ತಂಡದಲ್ಲಿ ಸ್ಥಾನ ನೀಡಿ ಎನ್ನುವ ಸಲಹೆ ನೀಡಿದ್ದಾರೆ.

ಬೆಂಗಳೂರಿನ NCA ಗೆ ಬಂದ ಬುಮ್ರಾ; ಚಾಂಪಿಯನ್ಸ್ ಟ್ರೋಫಿ ಆಡ್ತಾರಾ ಮಾರಕ ವೇಗಿ?

ಇಂಗ್ಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವರುಣ್ ಚಕ್ರವರ್ತಿ 5 ಪಂದ್ಯಗಳನ್ನಾಡಿ 14 ವಿಕೆಟ್ ಕಬಳಿಸಿದ್ದರು. ವರುಣ್ ಚಕ್ರವರ್ತಿಯವರ ಈ ಅದ್ಭುತ ಪ್ರದರ್ಶನಕ್ಕಾಗಿ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿಯು ಒಲಿದು ಬಂದಿತ್ತು. ವರುಣ್ ಚಕ್ರವರ್ತಿ ಇದುವರೆಗೂ ಭಾರತ ಪರ ಏಕದಿನ ಕ್ರಿಕೆಟ್ ಪಂದ್ಯವನ್ನಾಡಿಲ್ಲ. ಆದರೆ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯ ವೇಳೆಯಲ್ಲಿ ಏಕದಿನ ತಂಡಕ್ಕೆ ಚೆನ್ನೈ ಮೂಲದ ಮಿಸ್ಟ್ರಿ ಸ್ಪಿನ್ನರ್ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಒಂದು ವೇಳೆ ಇಂಗ್ಲೆಂಡ್ ಎದುರಿನ ಏಕದಿನ ಸರಣಿಯಲ್ಲಿ ವರುಣ್ ಚಕ್ರವರ್ತಿ ತಮ್ಮ ಜಾದೂ ಮುಂದುವರೆಸಿದರೇ, ಅಜಿತ್ ಅಗರ್‌ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಮುಂಬರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡದಲ್ಲಿ ಬದಲಾವಣೆ ಮಾಡಬೇಕಾಗಿ ಬರಬಹುದು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

'ನಾವೆಲ್ಲರೂ ಆತ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿರಬೇಕಿತ್ತು ಎಂದು ಮಾತನಾಡುತ್ತಿದ್ದೆವು. ನನಗನಿಸುತ್ತೆ ಈಗಲೂ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡ ಕೂಡಿಕೊಳ್ಳಬಹುದು. ಆತ ತಮ್ಮ ಕನಸು ನನಸಾಗಿಸಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಈಗಾಗಲೇ ಎಲ್ಲಾ ತಂಡಗಳು ತಮ್ಮ ಪ್ರಾಥಮಿಕ ಹಂತದ ತಂಡವನ್ನಷ್ಟೇ ಪ್ರಕಟಿಸಿವೆ. ಹೀಗಾಗಿ ವರುಣ್ ಚಕ್ರವರ್ತಿ ಭಾರತ ತಂಡ ಕೂಡಿಕೊಳ್ಳಲು ಇನ್ನೂ ಅವಕಾಶವಿದೆ' ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಭಿಷೇಕ್ ಶರ್ಮಾ ಬ್ಯಾಟಿಂಗ್ ನೋಡಿ ಎದ್ದು ನಿಂತು ಚಪ್ಪಾಳೆ ತಟ್ಟಿದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ!

ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡ ಈಗಾಗಲೇ ಪ್ರಕಟವಾಗಿದ್ದು, ತಂಡದಲ್ಲಿ ಬದಲಾವಣೆ ಮಾಡಲು ಫೆಬ್ರವರಿ 11ರ ವರೆಗೂ ಅವಕಾಶವಿದೆ. ಒಂದು ವೇಳೆ ವರುಣ್ ಚಕ್ರವರ್ತಿ ಭಾರತ ತಂಡವನ್ನು ಕೂಡಿಕೊಂಡರೆ ಯಾವ ಆಟಗಾರನನ್ನು ತಂಡದಿಂದ ಕೈಬಿಡುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದು ಅಶ್ವಿನ್ ಹೇಳಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ:

ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಆರ್ಶದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌