
ದುಬೈ: 17ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಘಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಪಹಲ್ಗಾಂ ಬಳಿಕ ಮೊದಲ ಸಲ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮೈದಾನದಲ್ಲಿ ಮುಖಾಮುಖಿಯಾಗುತ್ತಿವೆ.
ಉಭಯ ತಂಡಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಯುಎಇ ಎದುರು ಕಣಕ್ಕಿಳಿದ ಭಾರತ ತಂಡವೇ ಇದೀಗ ಪಾಕಿಸ್ತಾನ ಎದುರೂ ಕಣಕ್ಕಿಳಿದಿದೆ. ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇನ್ನು ಪಾಕಿಸ್ತಾನ ತಂಡದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ.
ಏಷ್ಯಾಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ತಾನಾಡಿದ ಮೊದಲ ಪಂದ್ಯದಲ್ಲಿ ಯುಎಇ ಎದುರು 9 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಯುಎಇ ನೀಡಿದ್ದ 58 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ಕೇವಲ 4.3 ಓವರ್‌ಗಳಲ್ಲಿ ಗೆಲುವಿನ ನಗೆ ಬೀರಿತ್ತು. ಇನ್ನೊಂದೆಡೆ ಇದೇ ಮೊದಲ ಬಾರಿಗೆ ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಓಮಾನ್ ಎದುರು ಪಾಕಿಸ್ತಾನ ತಂಡವು ಸುಲಭ ಗೆಲುವು ದಾಖಲಿಸಿತ್ತು. ಹೀಗಾಗಿ ಇಂದು ನಡೆಯುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಅರ್ಶದೀಪ್‌ಗೆ ಇಲ್ಲ ಸ್ಥಾನ
ಕಳೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದ ಎಡಗೈ ವೇಗಿ ಅರ್ಶದೀಪ್ ಸಿಂಗ್ ಇದೀಗ ಮತ್ತೊಮ್ಮೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಇದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಪಾಕಿಸ್ತಾನ: ಸೈಮ್, ಫರ್ಹಾನ್, ಹಾರಿಸ್, ಫಖರ್, ಸಲ್ಮಾನ್ ಆಘಾ(ನಾಯಕ), ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್, ಶಾಹೀನ್, ಸುಫಿಯಾನ್, ಅಬ್ರಾರ್ ಅಹ್ಮದ್.
ಆರಂಭ: ರಾತ್ರಿ 8.00 ಗಂಟೆಗೆ
ನೇರ ಪ್ರಸಾರ: ಸೋನಿ ಸ್ಪೋರ್ಟ್ಸ್, ಸೋನಿ ಲೈವ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.