'ನಾಚಿಕೆಯಾಗ್ಬೇಕು': ಏಷ್ಯಾಕಪ್ ಇಂಡೋ-ಪಾಕ್ ಅಧಿಕೃತ ಪ್ರೋಮೋ ರಿಲೀಸ್ ಬೆನ್ನಲ್ಲೇ ಸಿಡಿದೆದ್ದ ಫ್ಯಾನ್ಸ್‌!

Published : Aug 28, 2025, 06:07 PM IST
ind vs pak

ಸಾರಾಂಶ

ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಯ ಭಾರತ-ಪಾಕಿಸ್ತಾನ ಪಂದ್ಯದ ಪ್ರೋಮೋವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಬಿಡುಗಡೆ ಮಾಡಿದೆ. ಪಾಕ್ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪಂದ್ಯ ಬಹಿಷ್ಕರಿಸುವಂತೆ ಆಗ್ರಹಿಸುತ್ತಿರುವ ಅಭಿಮಾನಿಗಳು ಸೋನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮುಂಬರುವ ಸೆಪ್ಟೆಂಬರ್ 09ರಿಂದ ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಈ ಬಾರಿಯ ಏಷ್ಯಾಕಪ್ ಟೂರ್ನಿಯ ಅಧಿಕೃತ ಪ್ರಸಾರದ ಹಕ್ಕನ್ನು ಸೋನಿ ಸ್ಪೋರ್ಟ್ಸ್‌ ನೆಟ್‌ವರ್ಕ್ ಪಡೆದುಕೊಂಡಿದೆ. ಇದೀಗ ಈ ಟೂರ್ನಿಯ ಹೈವೋಲ್ಟೇಜ್ ಪಂದ್ಯಗಳಲ್ಲಿ ಒಂದು ಎನಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ಕುರಿತಂತೆ ಸೋನಿ ಸ್ಪೋರ್ಟ್ಸ್‌ ನೆಟ್‌ವರ್ಕ್ ಅಧಿಕೃತ ಪ್ರೋಮೋ ರಿಲೀಸ್ ಮಾಡಿದ್ದು, ಚಾನೆಲ್‌ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿ ಪರಿಣಮಿಸಿದೆ.

ಹೌದು, ಈ ಪ್ರೋಮೋದಲ್ಲಿ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್, ಪಾಕಿಸ್ತಾನದ ವೇಗಿ ಶಾಹೀನ್ ಅಫ್ರಿದಿ, ಹಾಗೂ ದಿಗ್ಗಜ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಕಾಣಿಸಿಕೊಂಡಿದ್ದಾರೆ. ಏಷ್ಯಾಕಪ್ ಟೂರ್ನಿಯು ಸೆಪ್ಟೆಂಬರ್ 09ರಿಂದ ಆರಂಭವಾದರೂ, ಕ್ರಿಕೆಟ್ ಅಭಿಮಾನಿಗಳ ಚಿತ್ತ ಸೆಪ್ಟೆಂಬರ್ 14ರಂದು ನಡೆಯಲಿರುವ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾಳಗವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇದೆಲ್ಲದರ ನಡುವೆ ಸೋನಿ ನೆಟ್‌ವರ್ಕ್ ಬಿಡುಗಡೆ ಮಾಡಿದ ಭಾರತ-ಪಾಕ್ ನಡುವಿನ ಪಂದ್ಯದ ಪ್ರೋಮೋ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

 

ಕಳೆದ ಏಪ್ರಿಲ್ 23ರಂದು ಪಹಲ್ಗಾಮ್‌ನಲ್ಲಿ ನಡೆದ ಪಾಕ್ ಉಗ್ರರ ದಾಳಿಯಲ್ಲಿ ಭಾರತದ 26 ಮಂದಿ ನಾಗರೀಕರು ಕೊನೆಯುಸಿರೆಳೆದಿದ್ದರು. ಇದರ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಬಹುತೇಕ ಹಳಸಿಹೋಗಿದೆ. ಹೀಗಾಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳು, ಪಾಕ್ ಎದುರಿನ ಪಂದ್ಯವನ್ನು ಟೀಂ ಇಂಡಿಯಾ ಬಾಯ್ಕಾಟ್ ಮಾಡಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ಪ್ರೋಮೋ ರಿಲೀಸ್ ಮಾಡಿರುವುದರಿಂದ ಪಾಕ್ ಪಂದ್ಯವನ್ನು ಬಾಯ್ಕಾಟ್ ಮಾಡುವುದರ ಜತೆಗೆ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಅನ್ನೂ ಬಾಯ್ಕಾಟ್ ಮಾಡಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

 

 

ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮಾತ್ರವಲ್ಲದೇ ಪಾಕಿಸ್ತಾನ, ಶ್ರೀಲಂಕಾ, ಆಫ್ಘಾನಿಸ್ತಾನ, ಹಾಂಕಾಂಗ್, ಓಮನ್, ಬಾಂಗ್ಲಾದೇಶ ಹಾಗೂ ಯುಎಇ ತಂಡಗಳು ಪಾಲ್ಗೊಳ್ಳುತ್ತಿವೆ. ಭಾರತ 'ಎ' ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಯುಎಇ, ಓಮನ್ ಹಾಗೂ ಪಾಕಿಸ್ತಾನ ತಂಡಗಳು ಸ್ಥಾನ ಪಡೆದಿವೆ. ಇನ್ನು 'ಬಿ' ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಹಾಂಕಾಂಗ್ ತಂಡಗಳು ಸ್ಥಾನ ಪಡೆದಿವೆ. ಭಾರತ ತಂಡವು ಸೆಪ್ಟೆಂಬರ್ 10ರಂದು ಯುಎಇ ತಂಡದ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಬಾರಿಯ ಏಷ್ಯಾಕಪ್ ಟೂರ್ನಿಯ ಪಂದ್ಯಾವಳಿಗಳು ಯುಎಇನ ಅಬುದಾಬಿ ಹಾಗೂ ದುಬೈನಲ್ಲಿ ಪಂದ್ಯಾಟಗಳು ನಡೆಯಲಿವೆ.

ಈ ಬಾರಿಯ ಏಷ್ಯಾಕಪ್ ಟೂರ್ನಿಯು ಟಿ20 ಮಾದರಿಯಲ್ಲಿ ನಡೆಯಲಿದೆ. ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡ ಈ ಬಾರಿಯ ಏಷ್ಯಾಕಪ್ ಟೂರ್ನಿಯನ್ನು ಟಿ20 ಮಾದರಿಯಲ್ಲಿ ಆಯೋಜಿಸಲು ಆಯೋಜಕರು ನಿರ್ಧರಿಸಿದ್ದಾರೆ. ಭಾರತ ತಂಡವು ಇದುವರೆಗೂ ಏಷ್ಯಾಕಪ್ ಟೂರ್ನಿಯಲ್ಲಿ 8 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡವು ಮತ್ತೊಮ್ಮೆ ತನ್ನ ಚಾಂಪಿಯನ್ ಕಿರೀಟ ತನ್ನಲ್ಲೇ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ:

ಸೂರ್ಯಕುಮಾರ್ ಯಾದವ್(ನಾಯಕ), ಶುಭ್‌ಮನ್ ಗಿಲ್(ಉಪನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಶದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ