
ಹಾಂಗ್ಝೂ(ಅ.03): ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಹಾಗೂ ಆವೇಶ್ ಖಾನ್ ಮತ್ತು ರವಿ ಬಿಷ್ಣೋಯಿ ಮಿಂಚಿನ ಬೌಲಿಂಗ್ ನೆರವಿನಿಂದ ಋತುರಾಜ್ ಗಾಯಕ್ವಾಡ್ ನೇತೃತ್ವದ ಭಾರತ ತಂಡವು ನೇಪಾಳ ಎದುರು 23 ರನ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದೆ.
ಐಸಿಸಿ ಶ್ರೇಯಾಂಕದ ಆಧಾರದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ಗಾಯಕ್ವಾಡ್ ನೇತೃತ್ವದ ಟೀಂ ಇಂಡಿಯಾ, ನೇಪಾಳ ಎದುರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತ್ತು. ಭಾರತ ತಂಡಕ್ಕೆ ನಾಯಕ ಋತುರಾಜ್ ಗಾಯಕ್ವಾಡ್ ಹಾಗ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ ಕೇವಲ 9.5 ಓವರ್‌ಗಳಲ್ಲಿ 103 ರನ್‌ಗಳ ಜತೆಯಾಟವಾಡಿತು.
ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹ್ವಾಗ್..! ಈ ಇಬ್ಬರು ಸ್ಟಾರ್ ಆಟಗಾರರಿಗಿಲ್ಲ ಸ್ಥಾನ
ಎಡಗೈ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ನೇಪಾಳ ಬೌಲರ್‌ಗಳೆದುರು ಸವಾರಿ ಮಾಡಿದರೆ, ನಾಯಕ ಗಾಯಕ್ವಾಡ್, ಉತ್ತಮ ಸಾಥ್ ನೀಡಿದರು. ಗಾಯಕ್ವಾಡ್ 23 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 25 ರನ್ ಬಾರಿಸಿ ದಿಪೇಂದ್ರ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ತಿಲಕ್ ವರ್ಮಾ(2) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ(5) ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು.
ಯಶಸ್ವಿ ಶತಕ, ರಿಂಕು ಶೈನಿಂಗ್: ಆರಂಭದಲ್ಲೇ ಬಿರುಸಾಗಿ ಬ್ಯಾಟ್ ಬೀಸಿದ ಯಶಸ್ವಿ ಜೈಸ್ವಾಲ್ ಕೇವಲ 49 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 7 ಮುಗಿಲೆತ್ತರದ ಸಿಕ್ಸರ್ ಸಹಿತ 100 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಏಷ್ಯನ್ ಗೇಮ್ಸ್‌ನಲ್ಲಿ ಶತಕ ಸಿಡಿಸಿದ ಭಾರತದ ಮೊದಲ ಬ್ಯಾಟರ್ ಎನ್ನುವ ದಾಖಲೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾದರು.
ಇನ್ನು ಕೊನೆಯಲ್ಲಿ ಮ್ಯಾಚ್ ಫಿನಿಶರ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ರಿಂಕು ಸಿಂಗ್ ಕೇವಲ 15 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 37 ರನ್ ಸಿಡಿಸಿದರು. ಇನ್ನು ಇವರಿಗೆ ಶಿವಂ ದುಬೆ 19 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 25 ರನ್ ಬಾರಿಸಿ ತಂಡ 200ರ ಗಡಿದಾಟುವಂತೆ ಮಾಡಿದರು. ಅಂತಿಮವಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 202 ರನ್ ಕಲೆಹಾಕಿತು.
ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾದ ಆಫರ್ ತಿರಸ್ಕರಿಸಿದ 'ಡೂಪ್ಲಿಕೇಟ್ ಅಶ್ವಿನ್'..!
ಇನ್ನು ಸವಾಲಿನ ಗುರಿ ಬೆನ್ನತ್ತಿದ ನೇಪಾಳ ತಂಡವು ಆರ್ಶದೀಪ್ ಸಿಂಗ್, ಆವೇಶ್ ಖಾನ್ ಹಾಗೂ ರವಿ ಬಿಷ್ಣೋಯಿ ಮಿಂಚಿನ ದಾಳಿಗೆ ಕಂಗಾಲಾಗಿ ಹೋಯಿತು. ಇದರ ಹೊರತಾಗಿಯೂ ಆರಂಭಿಕ ಬ್ಯಾಟರ್ ಕುಸಾಲ್ ಭರ್ತೇಲ್(28), ಕುಸಾಲ್ ಮಲ್ಲ(29), ದಿಪೇಂದ್ರ ಸಿಂಗ್ ಐರೆ(32) ಹಾಗೂ ಸುಂದೀಪ್ ಜೋರಾ(29) ಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ನೇಪಾಳ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದರು. ಆದರೆ ಕೊನೆಯಲ್ಲಿ ಶಿವಂ ದುಬೆ ಶಿಸ್ತುಬದ್ದ ದಾಳಿ ನಡೆಸುವ ಮೂಲಕ ಯಾವುದೇ ಅಪಾಯವಿಲ್ಲದೇ ತಂಡ ಗೆಲುವಿನ ದಡ ಸೇರುವಂತೆ ಮಾಡಿದರು. ಅಂತಿಮವಾಗಿ ನೇಪಾಳ ತಂಡವು ನಿಗದಿತ 20 ಓವರ್‌ಗಳಲ್ಲಿ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 179 ರನ್ ಗಳಿಸಲಷ್ಟೇ ಶಕ್ತವಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.