
ಇಂದೋರ್(ಮಾ.03): ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಮಿಂಚಿನ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡವು, ಇಂದೋರ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎದುರು 9 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.
ಗೆಲ್ಲಲು 76 ರನ್‌ಗಳ ಸಾಧಾರಣ ಗುರಿ ಪಡೆದ ಪ್ರವಾಸಿ ಆಸ್ಟ್ರೇಲಿಯಾ ತಂಡವು ಮೂರನೇ ದಿನದಾಟದ ಮೊದಲ ಓವರ್‌ನ ಎರಡನೇ ಎಸೆತದಲ್ಲೇ ಖಾತೆ ತೆರೆಯುವ ಮುನ್ನವೇ ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜ ವಿಕೆಟ್ ಕಳೆದುಕೊಂಡಿತು. ರವಿಚಂದ್ರನ್ ಅಶ್ವಿನ್ ಬೌಲಿಂಗ್‌ನಲ್ಲಿ ರಕ್ಷಣಾತ್ಮಕ ಆಟವಾಡುವ ಯತ್ನದಲ್ಲಿ ಖವಾಜ ಬ್ಯಾಟ್ ಅಂಚನ್ನು ಸವರಿದ ಚೆಂಡನ್ನು ಕ್ಯಾಚ್ ಪಡೆಯುವಲ್ಲಿ ವಿಕೆಟ್ ಕೀಪರ್ ಕೆ ಎಸ್ ಭರತ್ ಯಶಸ್ವಿಯಾದರು.
ಸುರಕ್ಷಿತವಾಗಿ ಗೆಲುವಿನ ದಡ ಸೇರಿಸಿದ ಹೆಡ್-ಲಬುಶೇನ್: ಹೌದು, ಖಾತೆ ತೆರೆಯುವ ಮುನ್ನವೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಆಸ್ಟ್ರೇಲಿಯಾ ತಂಡಕ್ಕೆ ಎರಡನೇ ವಿಕೆಟ್‌ಗೆ ಟ್ರಾವಿಸ್ ಹೆಡ್ ಹಾಗೂ ನಂ.1 ಬ್ಯಾಟರ್ ಮಾರ್ನಸ್ ಲಬುಶೇನ್ ಆಕರ್ಷಕ ಅರ್ಧಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಲ್ಲಿ ಕೊಂಚ ರಕ್ಷಣಾತ್ಮಕ ಆಟವಾಡಿದ ಈ ಜೋಡಿ, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸಲಾರಂಭಿಸಿದರು. ಅಶ್ವಿನ್ ಹಾಗೂ ಜಡೇಜಾ ಎದುರು ಈ ಜೋಡಿ ಅನಾಯಾಸವಾಗಿ ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ಗೆಲುವನ್ನು ಖಚಿತಪಡಿಸಿದರು. ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 53 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ ಅಜೇಯ 49 ರನ್ ಬಾರಿಸಿದರೆ, ಮಾರ್ನಸ್ ಲಬುಶೇನ್ 28 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಮೂರೇ ದಿನಕ್ಕೆ ಮುಗಿಯಲಿದೆ 3ನೇ ಟೆಸ್ಟ್ ಪಂದ್ಯ, ಆಸೀಸ್‌ಗೆ ಸುಲಭ ಟಾರ್ಗೆಟ್ ನೀಡಿದ ಭಾರತಕ್ಕೆ ಸಂಕಷ್ಟ!
ಹೇಗಿತ್ತು ಮೂರನೇ ಟೆಸ್ಟ್..?
ಇಲ್ಲಿನ ಹೋಳ್ಕರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಮ್ಯಾಥ್ಯೂ ಕುಹ್ನೆಮನ್ ಮಾರಕ ದಾಳಿ(16/5)ಗೆ ತತ್ತರಿಸಿದ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಕೇವಲ 109 ರನ್‌ಗಳಿಗೆ ಸರ್ವಪತನ ಕಂಡಿತು. 22 ರನ್ ಬಾರಿಸಿದ ವಿರಾಟ್ ಕೊಹ್ಲಿ, ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಗರಿಷ್ಠ ವೈಯುಕ್ತಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ, ಉಸ್ಮಾನ್ ಖವಾಜ ಬಾರಿಸಿದ ಸಮಯೋಚಿತ ಅರ್ಧಶತಕ(60)ದ ನೆರವಿನಿಂದ 197 ರನ್ ಕಲೆಹಾಕಿತು. ಈ ಮೂಲಕ 88 ರನ್‌ಗಳ ಅಮೂಲ್ಯ ಮುನ್ನಡೆ ಪಡೆಯಿತು.
ಇನ್ನು ಭಾರೀ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, ಚೇತೇಶ್ವರ್ ಪೂಜಾರ(59) ಅರ್ಧಶತಕದ ಹೊರತಾಗಿಯೂ ನೇಥನ್ ಲಯನ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಲಯನ್ 64 ರನ್ ನೀಡಿ 8 ವಿಕೆಟ್ ಕಬಳಿಸುವ ಮೂಲಕ ಎರಡನೇ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾವನ್ನು 163 ರನ್‌ಗಳಿಗೆ ಕಟ್ಟಿಹಾಕಿತು. ಇದರೊಂದಿಗೆ 75 ರನ್‌ಗಳ ಮುನ್ನಡೆ ಗಳಿಸಿತು. ಈ ಗುರಿಯನ್ನು ಕಾಂಗರೂ ಪಡೆ ಕೇವಲ ಒಂದು ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.