
ಢಾಕಾ(ಡಿ.20): ಭಾರತ ವಿರುದ್ದ ಇದೇ ಡಿಸೆಂಬರ್ 22ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ 15 ಆಟಗಾರರನ್ನೊಳಗೊಂಡ ಬಾಂಗ್ಲಾದೇಶ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ಎಡಗೈ ಸ್ಪಿನ್ನರ್ ನಸುಮ್ ಅಹಮದ್, ಬಾಂಗ್ಲಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್, ಬೌಲಿಂಗ್ ಮಾಡಲು ಸಂಪೂರ್ಣ ಫಿಟ್ ಇಲ್ಲದ ಹಿನ್ನೆಲೆಯಲ್ಲಿ, ಮತ್ತೋರ್ವ ಸ್ಪಿನ್ನರ್ ಆಯ್ಕೆಯ ರೂಪದಲ್ಲಿ ನಸುಮ್ ಅಹಮದ್‌ಗೆ ತಂಡದಲ್ಲಿ ಮಣೆಹಾಕಲಾಗಿದ್ದು, ಬಹುತೇಕ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತವೆನಿಸಿದೆ.
ಛಟ್ಟೋಗ್ರಾಮ್ ಸ್ಟೇಡಿಯಂನಲ್ಲಿ ನಡೆದ ಭಾರತ ಎದುರಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಶಕೀಬ್ ಅಲ್ ಹಸನ್ ಕೇವಲ 12 ಓವರ್ ಬೌಲಿಂಗ್ ಮಾಡಲಷ್ಟೇ ಶಕ್ತರಾಗಿದ್ದರು. ಇನ್ನು ಶಕೀಬ್ ಎರಡನೇ ಇನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಟೀಂ ಇಂಡಿಯಾ 188 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
15 ಆಟಗಾರರನ್ನೊಳಗೊಂಡ ತಂಡದಲ್ಲಿ ಸ್ಥಾನ ಪಡೆದಿರುವ ನಸುಮ್ ಇದೀಗ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ಎದುರು ನೋಡುತ್ತಿದ್ದಾರೆ. ಬಾಂಗ್ಲಾದೇಶ ಪರ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅದರಲ್ಲೂ ಟಿ20 ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ನಲ್ಲೂ ಮಿಂಚಿರುವ ನಸುಮ್, ಇದೀಗ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ವಿಶ್ವಾಸದಲ್ಲಿದ್ದಾರೆ.
Ind vs Ban: ಬಾಂಗ್ಲಾದೇಶ ಎದುರಿನ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ರೋಹಿತ್ ಶರ್ಮಾ..!
ಇನ್ನು ಬಾಂಗ್ಲಾದೇಶ ವೇಗಿ ಎಬೊದತ್ ಹೊಸೈನ್ ಕೂಡಾ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಫಿಟ್ನೆಸ್ ಸಮಸ್ಯೆಯಿಂದಾಗಿ ಎಬೊದತ್ ಹೊಸೈನ್ ಇದೀಗ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಇನ್ನು ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಶೌರಿಫುಲ್ಲಾ ಇಸ್ಲಾಂ, ಇದೀಗ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದಿದ್ದಾರೆ.
ಎರಡನೇ ಟೆಸ್ಟ್ ಪಂದ್ಯಕ್ಕೆ ಬಾಂಗ್ಲಾದೇಶ ತಂಡ ಹೀಗಿದೆ ನೋಡಿ:
ಮೆಹಮದುಲ್ ಹಸನ್ ಜೊಯ್, ನಜ್ಮುಲ್ ಹೊಸೈನ್ ಶಾಂಟೋ, ಮೊಮಿನುಲ್ ಹಕ್, ಯಾಸಿರ್ ಅಲಿ, ಮುಷ್ಫಿಕುರ್ ರಹೀಂ, ಶಕೀಬ್ ಅಲ್ ಹಸನ್(ನಾಯಕ), ಲಿಟನ್ ದಾಸ್, ನುರುಲ್ ಹಸನ್, ಮೆಹದಿ ಹಸನ್ ಮಿರಜ್, ತೈಜುಲ್ ಇಸ್ಲಾಂ, ಟಸ್ಕಿನ್ ಅಹಮದ್, ಖಾಲೀದ್ ಅಹಮದ್, ಝಾಕಿರ್ ಹಸನ್, ರೆಜರ್ ರೆಹಮಾನ್ ರಾಜಾ ಮತ್ತು ನಸುಮ್ ಅಹಮದ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.