ಚಾಂಪಿಯನ್ಸ್ ಟ್ರೋಫಿಯಲ್ಲಿ ಈ 3 ತಂಡಗಳು ಸೆಮೀಸ್ ಪ್ರವೇಶಿಸಲಿವೆ: ಅಚ್ಚರಿ ಭವಿಷ್ಯ ನುಡಿದ ಶೋಯೆಬ್ ಅಖ್ತರ್

Published : Feb 08, 2025, 04:54 PM IST
ಚಾಂಪಿಯನ್ಸ್ ಟ್ರೋಫಿಯಲ್ಲಿ ಈ 3 ತಂಡಗಳು ಸೆಮೀಸ್ ಪ್ರವೇಶಿಸಲಿವೆ: ಅಚ್ಚರಿ ಭವಿಷ್ಯ ನುಡಿದ ಶೋಯೆಬ್ ಅಖ್ತರ್

ಸಾರಾಂಶ

ಫೆಬ್ರವರಿ 19ರಿಂದ ಪಾಕಿಸ್ತಾನದಲ್ಲಿ ಆರಂಭವಾಗುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಂಟು ತಂಡಗಳು ಸೆಣಸಲಿವೆ. ಭಾರತ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಶೋಯೆಬ್ ಅಖ್ತರ್ ಪ್ರಕಾರ ಭಾರತ, ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಸೆಮಿಫೈನಲ್ ತಲುಪಲಿವೆ. ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಪಾಕಿಸ್ತಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಏಕದಿನ ಕ್ರಿಕೆಟ್‌ನ 'ಮಿನಿ ವಿಶ್ವಕಪ್' ಎಂದೇ ಕರೆಸಿಕೊಳ್ಳುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯು ಇದೇ ಫೆಬ್ರವರಿ 19ರಿಂದ ಪಾಕಿಸ್ತಾನದಲ್ಲಿ ಆರಂಭವಾಗಲಿದೆ. ಈ ಬಾರಿಯ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಭಾರತ ತಂಡವು ಟೂರ್ನಿಯಲ್ಲಿ ತನ್ನ ಪಾಲಿನ ಪಂದ್ಯವನ್ನು ಯುಎಇನ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆಡಲಿದೆ. ಇನ್ನು ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಜಗತ್ತಿನ ಎಂಟು ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಕಾದಾಡಲಿವೆ. 

ಬರೋಬ್ಬರಿ 7 ವರ್ಷಗಳ ಬಳಿಕ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಯಾವ ತಂಡಗಳು ಗೆಲ್ಲಲಿವೆ. ಯಾವ ತಂಡಗಳು ಫೈನಲ್ ಪ್ರವೇಶಿಸಲಿವೆ ಎನ್ನುವ ಕುರಿತಂತೆ ಹಲವು ಕ್ರಿಕೆಟ್ ಪಂಡಿತರು ಭವಿಷ್ಯ ನುಡಿಯುತ್ತಿದ್ದಾರೆ. ಇದೀಗ ರಾವಲ್ಪಿಂಡಿ ಎಕ್ಸ್‌ಪ್ರೆಸ್ ಖ್ಯಾತಿಯ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್, ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಲಿರುವ ನಾಲ್ಕು ತಂಡಗಳು ಯಾವುವು ಎನ್ನುವುದರ ಬಗ್ಗೆ ಭವಿಷ್ಯ ನುಡಿದಿದ್ದಾರೆ.

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಿದ್ದ ತಂಡಗಳ ಪೈಕಿ ಟಾಪ್ 8 ಸ್ಥಾನ ಪಡೆದ ತಂಡಗಳು ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಪ್ರಶಸ್ತಿಗಾಗಿ ಸೆಣಸಾಡಲಿವೆ. ಇನ್ನು ಪಾಕಿಸ್ತಾನ ಬರೋಬ್ಬರಿ 3 ದಶಕಗಳ ಬಳಿಕ ಇದೇ ಮೊದಲ ಬಾರಿಗೆ ತನ್ನ ನೆಲದಲ್ಲಿ ಐಸಿಸಿ ಟೂರ್ನಿಯನ್ನು ಆಯೋಜಿಸುತ್ತಿದೆ. 

ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದ ಆಸೀಸ್‌ ನಾಯಕ ಪ್ಯಾಟ್‌ ಕಮಿನ್ಸ್‌ಗೆ ಗುಡ್‌ ನ್ಯೂಸ್!

ಇನ್ನು ಈ ಬಾರಿಯ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್‌ಗೆ ಪ್ರವೇಶಿಸುವುದಿಲ್ಲ ಎಂದು ಅಖ್ತರ್ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ಒಂದು ವೇಳೆ ಆಫ್ಘಾನಿಸ್ತಾನ ಕ್ರಿಕೆಟ್ ತಂಡವು ತನ್ನ ಸಾಮರ್ಥ್ಯಕ್ಕೆ ತಕ್ಕಂತೆ ಪ್ರದರ್ಶನ ತೋರಿದರೆ ಸೆಮಿಫೈನಲ್ ಪ್ರವೇಶಿಸಬಹುದು ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ.

ಆಫ್ಘಾನಿಸ್ತಾನ ಕ್ರಿಕೆಟ್ ತಂಡವು ಐಸಿಸಿ ಟೂರ್ನಿಗಳಲ್ಲಿ ಪ್ರತಿ ಬಾರಿಯ ಅಚ್ಚರಿಯ ಪ್ರದರ್ಶನ ತೋರುತ್ತಾ ಬಂದಿದೆ. ಕಳೆದ ಕೆಲ ವರ್ಷಗಳಿಂದ ಆಫ್ಘಾನಿಸ್ತಾನ ಕ್ರಿಕೆಟ್ ತಂಡವು ಬಲಿಷ್ಠ ತಂಡಗಳಿಗೆ ಶಾಕ್ ನೀಡುವ ಮೂಲಕ ಐಸಿಸಿ ಟೂರ್ನಿಗಳಲ್ಲಿ ದೈತ್ಯ ಸಂಹಾರ ಖ್ಯಾತಿ ಗಳಿಸಿದೆ. ಕಳೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಫ್ಘಾನಿಸ್ತಾನ ತಂಡವು 6ನೇ ಸ್ಥಾನ ಪಡೆದುಕೊಂಡಿತ್ತು.

ಬ್ಯಾನ್‌ ಆಗಿದ್ದ ಶ್ರೀಶಾಂತ್ ಕೇರಳದ ಕ್ರಿಕೆಟಿಗರ ರಕ್ಷಣೆ ಮಾಡಬೇಕಾಗಿಲ್ಲ: ಕಿಡಿಕಾರಿದ ಕೇರಳ ಕ್ರಿಕೆಟ್ ಸಂಸ್ಥೆ

'ನನ್ನ ಪ್ರಕಾರ ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ ಹಾಗೂ ಆಫ್ರ್ಘಾನಿಸ್ತಾನ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ' ಎಂದು ಅಖ್ತರ್ ಭವಿಷ್ಯ ನುಡಿದಿದ್ದಾರೆ.

ಇನ್ನು ಭಾರತ ಹಾಗೂ ಪಾಕಿಸ್ತಾನ ತಂಡಗಳು ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗ್ರೂಪ್‌ ಹಂತದಲ್ಲಿ ಮುಖಾಮುಖಿಯಾಗಲಿದ್ದು, ಎಲ್ಲರ ಚಿತ್ತ ಈ ಪಂದ್ಯದತ್ತ ನೆಟ್ಟಿದೆ. ಫೆಬ್ರವರಿ 23ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಲಿದೆ. ಇನ್ನು ಈ ಪಂದ್ಯದಲ್ಲಿ ಭಾರತ ಎದುರು ಪಾಕಿಸ್ತಾನ ತಂಡವು ಗೆಲುವು ಸಾಧಿಸಲಿದೆ ಎಂದು ಅಖ್ತರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2017ರಲ್ಲಿ ಕೊನೆಯ ಬಾರಿಗೆ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್‌ನಲ್ಲಿ ಸರ್ಫರಾಜ್ ಖಾನ್ ನೇತೃತ್ವದ ಪಾಕಿಸ್ತಾನ ತಂಡವು 180 ರನ್ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಚೊಚ್ಚಲ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಕ್ಕಿತ್ತು. ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಯಾವ ತಂಡ ಚಾಂಪಿಯನ್ ಆಗಿ ಹೊರಹೊಮ್ಮಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

IPL Mini Auction 2026: 1355 ಆಟಗಾರರಲ್ಲಿ 350 ಪ್ಲೇಯರ್ಸ್ ಶಾರ್ಟ್‌ಲಿಸ್ಟ್! ಇಲ್ಲಿದೆ ಹರಾಜಿನ ಕಂಪ್ಲೀಟ್ ಡೀಟೈಲ್ಸ್
ಸಡನ್ನಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌, ಇದಕ್ಕಿದೆ ಐಪಿಎಲ್ ಲಿಂಕ್‌!