
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ರಚಿಸಲಾಗಿದ್ದ ನ್ಯಾ.ಮೈಕಲ್ ಡಿ.ಕುನ್ಹಾ ಆಯೋಗವು ನೀಡಿರುವ ವರದಿಯ ಶಿಫಾರಸುಗಳನ್ನು ಅಳವಡಿಸಿಕೊಂಡರೆ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್ ಪಂದ್ಯಗಳನ್ನು ನಡೆಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಮೈಕಲ್ ಡಿ.ಕುನ್ಹಾ ಅವರ ಆಯೋಗ ರಚಿಸಲಾಗಿತ್ತು. ಆ ಆಯೋಗ ಕೆಲ ಶಿಫಾರಸುಗಳನ್ನು ಮಾಡಿದ್ದು, ಅದನ್ನು ಕೆಎಸ್‌ಸಿಎ ಅಳವಡಿಸಿಕೊಳ್ಳಬೇಕು. ಆಗ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆಗೆ ಅವಕಾಶ ನೀಡಲಾಗುವುದು. ಉಳಿದಂತೆ ಹೆಚ್ಚಿನ ವಿಚಾರಗಳನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ನೋಡಿಕೊಳ್ಳಲಿದ್ದಾರೆ. ಉಳಿದಂತೆ ಬೇರೆ ಯಾವುದೇ ಕಠಿಣ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಹೇಳಿದರು.
ಕ್ರೀಡಾಂಗಣದಲ್ಲಿ ಪಂದ್ಯಕ್ಕೆ ಅನುಮತಿ ನಿರಾಕರಣೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅನುಮತಿ ನಿರಾಕರಿಸಿರುವ ನಿರ್ಧಾರದ ಬಗ್ಗೆ ತಮಗೆ ತಿಳಿದಿಲ್ಲ ಎಂದು ಹೇಳಿದರು. ಈ ವಿಷಯದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರೊಂದಿಗೆ ಚರ್ಚಿಸುವುದಾಗಿಯೂ ಹೇಳಿದರು. ‘ಅನುಮತಿ ನಿರಾಕರಣೆ ಬಗ್ಗೆ ನನಗೆ ಗೊತ್ತಿಲ್ಲ. ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯ ನಡೆಸಿ, ಕ್ರೀಡಾಂಗಣದ ಗೌರವ ಉಳಿಸಿಕೊಳ್ಳುವುದರ ಪರ ನಾನಿದ್ದೇನೆ. ಕ್ರೀಡಾಂಗಣದಲ್ಲಿ ಭವಿಷ್ಯದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸುವ ಸಾಧ್ಯತೆಯಿಲ್ಲ. ಹೀಗಾಗಿ ಅಗತ್ಯ ಷರತ್ತುಗಳನ್ನು ವಿಧಿಸುವ ಮೂಲಕ ಪಂದ್ಯಗಳಿಗೆ ಅವಕಾಶ ನೀಡಬೇಕು. ಈ ಬಗ್ಗೆ ನಾನು ಚರ್ಚಿಸುತ್ತೇನೆ. ಕ್ರೀಡಾಂಗಣಕ್ಕೆ ಸಂಬಂಧಿಸಿದಂತೆ ನಾವು ಗೃಹ ಸಚಿವರಿಗೆ ಜವಾಬ್ದಾರಿ ನೀಡಿದ್ದೇವೆ’ ಎಂದಿದ್ದಾರೆ.
ಸದ್ಯ ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ಸರ್ಕಾರ ಅನುಮತಿ ನಿರಾಕರಿಸಿದ್ದರೂ, ಶೀಘ್ರದಲ್ಲೇ ಪಂದ್ಯ ಆಯೋಜನೆಗೆ ಬೇಕಾಗಿರುವ ಅನುಮತಿ ಪಡೆದುಕೊಳ್ಳುವ ವಿಶ್ವಾಸವನ್ನು ರಾಜ್ಯ ಕ್ರಿಕೆಟ್ ಸಂಸ್ಥೆ ಹೊಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೆಎಸ್‌ಸಿಎ ವಕ್ತಾಯ ವಿನಯ್ ಮೃತ್ಯುಂಜಯ, ‘ಸಾಧ್ಯವಾದಷ್ಟು ಬೇಗ ಎಲ್ಲಾ ಪ್ರಾಯೋಗಿಕ ಸುರಕ್ಷತೆ, ಭದ್ರತೆ ಮತ್ತು ಮೂಲಸೌಕರ್ಯ ಸಂಬಂಧಿತ ಕ್ರಮಗಳನ್ನು ಕಾರ್ಯಗತಗೊಳಿಸಲು ಕೆಎಸ್‌ಸಿಎ ಬದ್ಧವಾಗಿದೆ. ಶಿಫಾರಸು ಮಾಡಲಾದ ಕ್ರಮಗಳ ಸಂಪೂರ್ಣ ಅನುಸರಣೆಯೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಗಳನ್ನು ನಡೆಸಲು ಅಗತ್ಯವಾದ ಅನುಮತಿಯನ್ನು ಶೀಘ್ರದಲ್ಲೇ ಪಡೆಯುವ ವಿಶ್ವಾಸವಿದೆ’ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.