
ಬೆಂಗಳೂರು: 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪಂಜಾಬ್ ಕಿಂಗ್ಸ್ ಎದುರಿನ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡವು 6 ರನ್ ಅಂತರದ ರೋಚಕ ಜಯ ಸಾಧಿಸಿದೆ. ಈ ಮೂಲಕ ಐಪಿಎಲ್ ಟ್ರೋಫಿ ಬರ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇನ್ನು ಆರ್‌ಸಿಬಿ ತಂಡವು ಮೊದಲ ಸಲ ಐಪಿಎಲ್ ಟ್ರೋಫಿ ಗೆಲ್ಲುತ್ತಿದ್ದಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಟ್ವೀಟ್ ಮಾಡುವ ಮೂಲಕ ಆರ್‌ಸಿಬಿ ತಂಡವನ್ನು ಅಭಿನಂದಿಸಿದ್ದಾರೆ.
ಕೊನೆಗೂ 18 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2025ರ ಟೂರ್ನಮೆಂಟ್‌ನುದ್ದಕ್ಕೂ ಅತ್ಯದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ. ತುಂಬಾ ಸಮತೋಲಿತ ತಂಡ, ಅತ್ಯುತ್ತಮ ಕೋಚ್ ಹಾಗೂ ಸಹಾಯಕ ಸಿಬ್ಬಂದಿಗಳ ಕಾರಣದಿಂದ ದಿಟ್ಟವಾಗಿ ಆಡಿದೆ. ನಿಮ್ಮೆಲ್ಲರಿಗೂ ಅಭಿನಂದನೆಗಳು. ಈ ಸಲ ಕಪ್ ನಮ್ದೇ ಎಂದು ವಿಜಯ್ ಮಲ್ಯ ಆರ್‌ಸಿಬಿ ತಂಡಕ್ಕೆ ಶುಭ ಕೋರಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2008ರಿಂದಲೂ ಐಪಿಎಲ್ ಆಡುತ್ತಾ ಬಂದಿದೆ. 18ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ಮೂರು ಸಲ ಫೈನಲ್‌ಗೇರಿತ್ತು. ಆದರೆ ಮೂರು ಬಾರಿಯೂ ಸೋಲು ಅನುಭವಿಸಿತ್ತು. ಮೊದಲಿಗೆ 2008ರ ಐಪಿಎಲ್‌ನಲ್ಲಿ ಡೆಕ್ಕನ್ ಚಾರ್ಜಸ್ ಎದುರು ಸೋಲು ಕಂಡಿದ್ದ ಆರ್‌ಸಿಬಿ, 2011ರ ಐಪಿಎಲ್ ಫೈನಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಗ್ಗರಿಸಿತ್ತು. ಇನ್ನು 2016ರ ಐಪಿಎಲ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರುವುದರೊಂದಿಗೆ ಆರ್‌ಸಿಬಿ ಫೈನಲ್ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ಗೆ ಶರಣಾಗುವ ಮೂಲಕ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.
ನನಸಾದ ಈ ಸಲ ಕಪ್ ನಮ್ದೇ:
ಕಳೆದ ಕೆಲ ವರ್ಷಗಳಿಂದ ನಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹುರಿದುಂಬಿಸಲು ಫ್ಯಾನ್ಸ್ ಈ ಸಲ ಕಪ್ ನಮ್ದೇ ಎನ್ನುವ ಘೋಷಣೆ ಮಾಡುತ್ತಿದ್ದರು. ಆದರೆ ಆರ್‌ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಕಳೆದ ವರ್ಷ ಅಂದರೆ ಎರಡನೇ ಸೀಸನ್ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸ್ಮೃತಿ ಮಂಧನಾ ನೇತೃತ್ವದ ಮಹಿಳಾ ಆರ್‌ಸಿಬಿ ತಂಡವು ಐಪಿಎಲ್ ಜಯಿಸಿತ್ತು. ಇದೀಗ ರಜತ್ ಪಾಟೀದಾರ್ ನೇತೃತ್ವದ ಆರ್‌ಸಿಬಿ ತಂಡವು 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎಲ್ಲಾ ಅಡೆತಡೆಗಳನ್ನು ಮೆಟ್ಟಿನಿಂತು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.
ಇನ್ನು ಫೈನಲ್ ಪಂದ್ಯದ ವಿಚಾರಕ್ಕೆ ಬರುವುದಾದರೇ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 190 ರನ್ ಕಲೆಹಾಕಿತು. ವಿರಾಟ್ ಕೊಹ್ಲಿ 43 ರನ್ ಗಳಿಸಿದ್ದೇ ಅರ್‌ಸಿಬಿ ಪರ ದಾಖಲಾದ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿತು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆಯಿತಾದರೂ ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್ ಮಾರಕ ದಾಳಿಗೆ ತತ್ತರಿಸಿ 7 ವಿಕೆಟ್ ಕಳೆದುಕೊಂಡು ಪಂಜಾಬ್ ಕಿಂಗ್ಸ್ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಆರ್‌ಸಿಬಿ ತಂಡವು 6 ರನ್ ಅಂತರದ ರೋಚಕ ಜಯ ಸಾಧಿಸಿತು.
ಇನ್ನು ಆರ್‌ಸಿಬಿ ತಂಡದ ಈ ಭರ್ಜರಿ ಗೆಲುವಿಗೆ ಹಲವು ದಿಗ್ಗಜರು ಶುಭಕೋರಿದ್ದಾರೆ. ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿ ಶುಭಕೋರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.