* 200 ಮಿಲಿಯನ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ ವಿರಾಟ್ ಕೊಹ್ಲಿ
* 20 ಕೋಟಿ ಫಾಲೋವರ್ಸ್ ಹೊಂದಿದ ಭಾರತದ ಮೊದಲ ಕ್ರಿಕೆಟಿಗ ವಿರಾಟ್ ಕೊಹ್ಲಿ
* ರಾಟ್ ಕೊಹ್ಲಿ ತಮ್ಮ ಅಭಿಮಾನಿಗಳ ಜತೆ ನಿರಂತರವಾದ ಸಂಪರ್ಕ ಸಾಧಿಸಿದ್ದಾರೆ
ನವದೆಹಲಿ(ಜೂ.08): ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದ್ದು, ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ (Instagram Followers) 200 ಮಿಲಿಯನ್ (20 ಕೋಟಿ) ಫಾಲೋವರ್ಸ್ ಹೊಂದಿದ ಭಾರತದ ಮೊದಲ ಹಾಗೂ ಜಗತ್ತಿನ ಒಟ್ಟಾರೆ 3ನೇ ಅಥ್ಲೀಟ್ ಎನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಆಧುನಿಕ ಕ್ರಿಕೆಟ್‌ನ ಸೂಪರ್ ಸ್ಟಾರ್ ಬ್ಯಾಟರ್ ಎನಿಸಿಕೊಂಡಿರುವ ಕಿಂಗ್ ಕೊಹ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ತಮ್ಮ ದಿನನಿತ್ಯದ ಚಟುವಟಿಕೆಗಳ ಬಗ್ಗೆ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.
ಜೀವನದ ಕೆಲವು ಗುರಿಗಳು, ಪತ್ನಿ ಅನುಷ್ಕಾ ಶರ್ಮಾ ಜತೆಗಿನ ಸುಂದರ ಕ್ಷಣಗಳ ಫೋಟೋಗಳು, ತಮ್ಮ ವರ್ಕೌಟ್ ವಿಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳ ಜತೆ ನಿರಂತರವಾದ ಸಂಪರ್ಕ ಸಾಧಿಸಿದ್ದರು. ಇದರ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ವಿರಾಟ್ ಕೊಹ್ಲಿ ಫಾಲೋವರ್ಸ್ ಪ್ರಮಾಣವೂ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಲೇ ಸಾಗಿತು. ಇದೀಗ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ 200 ಮಿಲಿಯನ್ ಫಾಲೋವರ್ಸ್ ಹೊಂದಿದ ಭಾರತದ ಮೊದಲ ಕ್ರಿಕೆಟಿಗ ಎನ್ನುವ ಹಿರಿಮೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದರ ಬೆನ್ನಲ್ಲೇ ಮಾಜಿ ನಾಯಕ ವಿರಾಟ್ ಕೊಹ್ಲಿ, ಬಲಿಷ್ಠ 200 ಮಿಲಿಯನ್. ಇನ್‌ಸ್ಟಾಗ್ರಾಂ ಕುಟುಂಬಕ್ಕೆ ಅನಂತ ಧನ್ಯವಾದಗಳು ಎಂದು ತಮ್ಮ ಜೀವನದ ಅಮೂಲ್ಯ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ಪೋಸ್ಟ್ ಮಾಡಿದ್ದಾರೆ.
ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ ಜಗತ್ತಿನ ಮೂರನೇ ಅಥ್ಲೀಟ್ ಕೊಹ್ಲಿ..!
ಟೀಂ ಇಂಡಿಯಾದ (Team India) ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದಾರೆ. ಇನ್ನು ಫುಟ್ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೋ ರೊನಾಲ್ಡೋ ಹಾಗೂ ಲಿಯೋನೆಲ್ ಮೆಸ್ಸಿ ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಮೊದಲೆರಡು ಸ್ಥಾನ ಹಂಚಿಕೊಂಡಿದ್ದಾರೆ. ಪೋರ್ಚುಗಲ್‌ನ ಕ್ರಿಸ್ಟಿಯಾನೋ ರೊನಾಲ್ಡೋ 450 ಮಿಲಿಯನ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, 333 ಮಿಲಿಯನ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಹೊಂದಿರುವ ಲಿಯೋನೆಲ್ ಮೆಸ್ಸಿ ಅತಿಹೆಚ್ಚು ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಇಂಗ್ಲೆಂಡ್ ಮಾಜಿ ನಾಯಕ ಜೋ ರೂಟ್ ಬಳಿ ಮ್ಯಾಜಿಕ್ ಬ್ಯಾಟ್..! ವಿಡಿಯೋ ವೈರಲ್
33 ವರ್ಷದ ವಿರಾಟ್ ಕೊಹ್ಲಿ, ಇತ್ತೀಚೆಗಷ್ಟೇ ಮುಕ್ತಾಯವಾದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು. ಆದರೆ ವಿರಾಟ್ ಕೊಹ್ಲಿಯವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬಂದಿರಲಿಲ್ಲ. ಇದೆಲ್ಲದರ ಹೊರತಾಗಿಯೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇ ಅಫ್ ಪ್ರವೇಶಿಸಿ ಪ್ರಶಸ್ತಿಯ ಆಸೆ ಮೂಡಿಸಿತ್ತಾದರೂ, ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆಘಾತಕಾರಿ ಸೋಲು ಕಾಣುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತು.
2022ನೇ ಸಾಲಿನ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 16 ಪಂದ್ಯಗಳನ್ನಾಡಿ ಕೇವಲ 341 ರನ್‌ಗಳನ್ನಷ್ಟೇ ಬಾರಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ಇಂಗ್ಲೆಂಡ್ ಪ್ರವಾಸದ ವೇಳೆಗೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.