
ಮುಂಬೈ(ಜೂ.18): ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ (ICC T20 World Cup) ಭಾರತ ತಂಡವು ಮೊದಲ ಆಯ್ಕೆಯ ವಿಕೆಟ್ ಕೀಪರ್ ರೂಪದಲ್ಲಿ ರಿಷಭ್ ಪಂತ್ (Rishabh Pant) ಬದಲಿಗೆ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಬೇಕು ಎಂದು ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೇನ್ ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ರಿಷಭ್ ಪದೇ ಪದೇ ತಪ್ಪುಗಳನ್ನು ಮಾಡಿಕೊಳ್ಳುತ್ತಿದ್ದು, ತಪ್ಪುಗಳನ್ನು ತಿದ್ದುಪಡಿ ಮಾಡಿಕೊಳ್ಳುವತ್ತ ಗಮನ ಹರಿಸುತ್ತಿಲ್ಲ, ಇದೇ ವೇಳೆ ದಿನೇಶ್ ಕಾರ್ತಿಕ್ ದಿನದಿಂದ ದಿನಕ್ಕೆ ಬಲಿಷ್ಟವಾಗುತ್ತಾ ಸಾಗುತ್ತಿದ್ದಾರೆ ಎಂದು ಸ್ಟೇನ್ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ಎದುರಿನ ನಾಲ್ಕನೇ ಟಿ20 ಪಂದ್ಯದಲ್ಲಿ ದಿನೇಶ್ ಕಾರ್ತಿಕ್ (Dinesh Karthik) ಕೇವಲ 27 ಎಸೆತಗಳಲ್ಲಿ 55 ರನ್ ಸಿಡಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾಗಿದ್ದರು. 2006ರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ದಿನೇಶ್ ಕಾರ್ತಿಕ್, ಚೊಚ್ಚಲ ಅಂತಾರಾಷ್ಟ್ರೀಯ ಟಿ20 ಅರ್ಧಶತಕ ಸಿಡಿಸುವಲ್ಲಿ ಯಶಸ್ವಿಯಾಗಿದ್ದರು. ರಾಜ್‌ಕೋಟ್‌ನಲ್ಲಿ ಟೀಂ ಇಂಡಿಯಾ 82 ರನ್‌ಗಳ ಅಂತರದ ಗೆಲುವು ದಾಖಲಿಸುವ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-2 ಅಂತರದ ಸಮಬಲ ಸಾಧಿಸಿದೆ. ಇದೀಗ ಜೂನ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ದಿನೇಶ್ ಕಾರ್ತಿಕ್ ವರ್ಸಸ್ ರಿಷಭ್ ಪಂತ್ ನಡುವಿನ ಚರ್ಚೆಯ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡೇಲ್ ಸ್ಟೇನ್, ಮುಂಬರುವ ವಿಶ್ವಕಪ್ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಫಾರ್ಮ್‌ನಲ್ಲಿರುವ ದಿನೇಶ್ ಕಾರ್ತಿಕ್‌ಗೆ ಮಣೆ ಹಾಕಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ನಡೆಯಲಿದೆ.
ದಕ್ಷಿಣ ಆಫ್ರಿಕಾ ಎದುರಿನ ಸರಣಿಯಲ್ಲಿ ರಿಷಭ್ ಪಂತ್‌ಗೆ 4 ಅವಕಾಶಗಳು ಸಿಕ್ಕಿದ್ದವು. ಆದರೆ ಪದೇ ಪದೇ ಒಂದೇ ರೀತಿಯ ತಪ್ಪುಗಳನ್ನು ಮಾಡುತ್ತಿದ್ದಾರೆ. ನೀವೇ ಯೋಚನೆ ಮಾಡಿ, ಒಳ್ಳೆಯ ಆಟಗಾರರು ತಾವು ಮಾಡಿದ ತಪ್ಪುಗಳನ್ನು ಆದಷ್ಟು ಬೇಗ ತಿದ್ದಿಕೊಳ್ಳುತ್ತಾರೆ. ಆದರೆ ಪಂತ್ ಹಾಗೆ ಮಾಡುತ್ತಿಲ್ಲ. ಆದರೆ ದಿನೇಶ್ ಕಾರ್ತಿಕ್ ಪ್ರತಿ ಪಂದ್ಯದಲ್ಲೂ ತಾವೆಂಥಹ ಕ್ಲಾಸ್ ಪ್ಲೇಯರ್ ಆಟಗಾರ ಎನ್ನುವುದನ್ನು ಸಾಬೀತುಪಡಿಸುತ್ತಿದ್ದಾರೆ. ನೀವು ವಿಶ್ವಕಪ್ ಗೆಲ್ಲಬೇಕೆಂದಿದ್ದರೇ, ಫಾರ್ಮ್‌ನಲ್ಲಿರುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂದು ಡೇಲ್ ಸ್ಟೇನ್ (Dale Steyn) ಹೇಳಿದ್ದಾರೆ.
ಅವಕಾಶ ಸಿಕ್ಕಿದರೇ ದಿನೇಶ್ ಕಾರ್ತಿಕ್ ಯಾವ ತಾರೆ ಜತೆ ಊಟ ಮಾಡಲು ಇಷ್ಟಪಡುತ್ತಾರಂತೆ ಗೊತ್ತಾ..?
ತಂಡಗಳು ಖ್ಯಾತ ಆಟಗಾರರನ್ನು ಆಯ್ಕೆ ಮಾಡಿಕೊಳ್ಳುತ್ತವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ದಿನೇಶ್ ಕಾರ್ತಿಕ್ ಅವರ ಫಾರ್ಮ್ ಗಮನಿಸಿದರೇ ಹಾಗೂ ಇದೇ ಫಾರ್ಮ್ ಮುಂದುವರೆಸಿದರೇ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಟಿಕೆಟ್ ಪಡೆಯಲಿರುವ ಮೊದಲ ಆಟಗಾರ ಅವರಾಗಲಿದ್ದಾರೆ ಎಂದು ಡೇಲ್ ಸ್ಟೇನ್ ಹೇಳಿದ್ದಾರೆ.
ರಾಜ್‌ಕೋಟ್‌ನಲ್ಲಿ ನಡೆದ ಪಂದ್ಯದಲ್ಲಿ ರಿಷಭ್ ಪಂತ್ 23 ಎಸೆತಗಳನ್ನು ಎದುರಿಸಿ ಕೇವಲ 17 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಕ್ರೀಸ್‌ಗಿಳಿದ ದಿನೇಶ್ ಕಾರ್ತಿಕ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಜತೆಗೂಡಿ ತಂಡವು ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. 15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದ ದಿನೇಶ್ ಕಾರ್ತಿಕ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಬರೋಬ್ಬರಿ 3 ವರ್ಷಗಳ ಬಳಿಕ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದರು. ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಳ್ಳುತ್ತಿರುವ ದಿನೇಶ್ ಕಾರ್ತಿಕ್ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಎದುರು ನೋಡುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.