
ಗಾಲೆ(ಜು.28): ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವು 246 ರನ್‌ಗಳ ಭಾರೀ ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯು 1-1ರಲ್ಲಿ ಸಮಬಲದೊಂದಿಗೆ ಅಂತ್ಯವಾಗಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ 300ಕ್ಕೂ ಅಧಿಕ ಗುರಿಯನ್ನು ಬೆನ್ನತ್ತಿ ಯಶಸ್ವಿಯಾಗಿದ್ದ ಪಾಕಿಸ್ತಾನ ತಂಡಕ್ಕೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಲಂಕಾ ಸವಾಲು ಮೆಟ್ಟಿ ನಿಲ್ಲಲು ಸಾಧ್ಯವಾಗಲಿಲ್ಲ. ಎರಡನೇ ಇನಿಂಗ್ಸ್‌ನಲ್ಲಿ ಶ್ರೀಲಂಕಾ ಬೌಲರ್‌ಗಳಾದ ಪ್ರಭಾತ್ ಜಯಸೂರ್ಯ ಹಾಗೂ ರಮೇಶ್ ಮೆಂಡೀಸ್ ಮಾರಕ ದಾಳಿಗೆ ತತ್ತರಿಸಿ ಹೀನಾಯ ಸೋಲು ಅನುಭವಿಸಿದೆ. ಪಾಕಿಸ್ತಾನ ತಂಡವು ಎರಡನೇ ಟೆಸ್ಟ್‌ನಲ್ಲಿ ಸೋಲು ಕಂಡಿರುವುದು ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯ ದೃಷ್ಟಿಯಿಂದ ಭಾರತ ಕ್ರಿಕೆಟ್ ತಂಡಕ್ಕೆ ಲಾಭವಾಗಿದೆ.
ಮೊದಲ ಟೆಸ್ಟ್ ಪಂದ್ಯದಲ್ಲೂ ಶ್ರೀಲಂಕಾ ತಂಡವು ಅಮೋಘ ಹೋರಾಟ ನೀಡಿತ್ತಾದರೂ, ನಾಲ್ಕನೇ ಇನಿಂಗ್ಸ್‌ನಲ್ಲಿ ಪಾಕಿಸ್ತಾನ ತಂಡವು ಬೃಹತ್ ಮೊತ್ತ ಬೆನ್ನತ್ತಿ ಗೆಲುವು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಆದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರಿದ ಆತಿಥೇಯ ಶ್ರೀಲಂಕಾ ತಂಡವು ಭರ್ಜರಿ ಗೆಲುವು ಸಾಧಿಸುವ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸುವಂತೆ ಮಾಡುವಲ್ಲಿ ಯಶಸ್ವಿಯಾಯಿತು. ಈ ಗೆಲುವಿನೊಂದಿಗೆ ದ್ವೀಪರಾಷ್ಟ್ರ ಶ್ರೀಲಂಕಾ ಕ್ರಿಕೆಟ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡವುವ 53.33% ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟರೆ, ಭಾರತ ಕ್ರಿಕೆಟ್ ತಂಡವು 52.08 ಅಂಕಗಳೊಂದಿಗೆ ಪಾಕಿಸ್ತಾನವನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೆ ಜಿಗಿದಿದೆ. ಇನ್ನು ಲಂಕಾ ಎದುರು ಭಾರೀ ಅಂತರದ ಸೋಲು ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್ ತಂಡವು 51.85 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ.
Ind vs WI 'ನಮ್ಮ ಹುಡುಗರು ಯುವಕರು, ಆದರೆ..' ಸರಣಿ ಗೆಲುವಿನ ಬಳಿಕ ನಾಯಕ ಧವನ್ ಹೇಳಿದ್ದಿದು..!
ಮುಂದಿನ ವರ್ಷ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಕಾದಾಡಲು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆಯುವ ತಂಡಗಳು ಅರ್ಹತೆಗಿಟ್ಟಿಸಿಕೊಳ್ಳಲಿವೆ. ಸದ್ಯ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಪಡೆದಿವೆ.
ಶ್ರೀಲಂಕಾ ಕ್ರಿಕೆಟ್ ತಂಡವು ಈ ಮೊದಲು ಬಲಿಷ್ಠ ಆಸ್ಟ್ರೇಲಿಯಾ ಎದುರು ಕೂಡ ಟೆಸ್ಟ್ ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸಿತ್ತು. ಇದೀಗ ಪಾಕಿಸ್ತಾನ ವಿರುದ್ದ ಕೂಡಾ ಅಂತಹದ್ದೇ ಅದ್ಭುತ ಪ್ರದರ್ಶನ ತೋರುವ ಮೂಲಕ ತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ.
ಹೇಗಿತ್ತು ಎರಡನೇ ಟೆಸ್ಟ್..?
ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡವು ಒಶಾಡೊ ಫರ್ನಾಂಡೋ, ದಿನೇಶ್ ಚಾಂಡಿಮಲ್ ಹಾಗೂ ನಿರ್ಶೋನ್ ಡಿಕ್‌ವೆಲ್ಲಾ ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 378 ರನ್ ಬಾರಿಸಿತ್ತು. ಇನ್ನು ಮೊದಲ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ ತಂಡವು ರಮೇಶ್ ಮೆಂಡೀಸ್ ಮಾರಕ ದಾಳಿಗೆ ತತ್ತರಿಸಿ 261 ರನ್‌ಗಳಿಗೆ ಸರ್ವಪತನ ಕಂಡಿತ್ತು. ಒಟ್ಟಾರೆ 117 ರನ್‌ಗಳ ಇನಿಂಗ್ಸ್ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡವು ಧನಂಜಯ ಡಿ ಸಿಲ್ವಾ ಬಾರಿಸಿದ ಆಕರ್ಷಕ ಶತಕದ ನೆರವಿನಿಂದ 360 ರನ್ ಬಾರಿಸಿ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಈ ಮೂಲಕ ಶ್ರೀಲಂಕಾ ತಂಡಕ್ಕೆ ಗೆಲ್ಲಲು 508 ರನ್‌ಗಳ ಗುರಿ ನೀಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.