ಸ್ಟಬ್ಸ್ ಏಕಾಂಗಿ ಹೋರಾಟ ವ್ಯರ್ಥ: ಕೊನೆಗೂ ಗೆಲುವಿನ ಖಾತೆ ತೆರೆದ ಮುಂಬೈ ಇಂಡಿಯನ್ಸ್

By Naveen Kodase  |  First Published Apr 7, 2024, 8:07 PM IST

ಇಲ್ಲಿನ ವಾಂಖೇಡೆ ಮೈದಾನದಲ್ಲಿ ಗೆಲ್ಲಲು 235 ರನ್ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲೇ ಡೇವಿಡ್ ವಾರ್ನರ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಪೃಥ್ವಿ ಶಾ ಹಾಗೂ ಅಭಿಷೇಕ್ ಪೋರೆಲ್ 88 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.


ಮುಂಬೈ(ಏ.07): ಟ್ರಿಸ್ಟನ್ ಸ್ಟಬ್ಸ್ ವಿಸ್ಪೋಟಕ ಬ್ಯಾಟಿಂಗ್ ಹೊರತಾಗಿಯೂ ಮುಂಬೈ ಇಂಡಿಯನ್ಸ್ ಎದುರು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ಎದುರು 29 ರನ್ ಅಂತರದ ಸೋಲು ಅನುಭವಿಸಿದೆ. ಇದೀಗ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲಿನ ಬಳಿಕ ಕೊನೆಗೂ ಮುಂಬೈ ಇಂಡಿಯನ್ಸ್ ಗೆಲುವಿನ ಖಾತೆ ತೆರೆದಿದೆ.

ಇಲ್ಲಿನ ವಾಂಖೇಡೆ ಮೈದಾನದಲ್ಲಿ ಗೆಲ್ಲಲು 235 ರನ್ ಕಠಿಣ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲೇ ಡೇವಿಡ್ ವಾರ್ನರ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಪೃಥ್ವಿ ಶಾ ಹಾಗೂ ಅಭಿಷೇಕ್ ಪೋರೆಲ್ 88 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಚುರುಕಿನ ಬ್ಯಾಟಿಂಗ್ ನಡೆಸಿದ ಪೃಥ್ವಿ ಶಾ 40 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 66 ರನ್ ಬಾರಿಸಿ ಬುಮ್ರಾ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇನ್ನು ಅಭಿಷೇಕ್ ಪೋರೆಲ್ 41 ರನ್ ಸಿಡಿಸಿ ಬುಮ್ರಾಗೆ ಎರಡನೇ ಬಲಿಯಾದರು.

Tap to resize

Latest Videos

ಅಬ್ಬರಿಸಿದ ಸ್ಟಬ್ಸ್: ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ಕೈಕೊಟ್ಟರು. ಹೀಗಿದ್ದೂ ಒಂದು ತುದಿಯಲ್ಲಿ ಸಿಡಿಲಬ್ಬದರ ಬ್ಯಾಟಿಂಗ್ ನಡೆಸಿದ ಟ್ರಿಸ್ಟನ್ ಸ್ಟಬ್ಸ್ ಕೇವಲ 19 ಎಸೆತಗಳಲ್ಲಿ ಸ್ಪೋಟಕ ಅರ್ಧಶತಕ ಸಿಡಿಸಿದರು. ಆ ಬಳಿಕವೂ ಅಮೋಘ ಬ್ಯಾಟಿಂಗ್ ನಡೆಸಿದ ಸ್ಟಬ್ಸ್, ಮುಂಬೈ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಅಂತಿಮವಾಗಿ ಸ್ಟಬ್ಸ್ 25 ಎಸೆತಗಳನ್ನು ಎದುರಿಸಿ 3 ಬೌಂಡರಿ 7 ಸಿಕ್ಸರ್ ಸಹಿತ ಅಜೇಯ 71 ರನ್ ಸಿಡಿಸದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. 

ರಿಷಭ್ ಪಂತ್, ಅಕ್ಷರ್ ಪಟೇಲ್, ಲಲಿತ್ ಯಾದವ್ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದು, ಡೆಲ್ಲಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತು.

click me!