
ಬೆಂಗಳೂರು(ಏ.27): 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತ 6 ಸೋಲು ಕಂಡು ಕಂಗಾಲಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ. ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ಎದುರು ಆರ್‌ಸಿಬಿ ತಂಡವು 35 ರನ್ ಅಂತರದ ಗೆಲುವು ಸಾಧಿಸಿದೆ. ಆರ್‌ಸಿಬಿ ತಂಡವು ಸಂಘಟಿತ ಪ್ರದರ್ಶನ ತೋರುವ ಮೂಲಕ ಗೆಲುವಿನ ನಿಟ್ಟುಸಿರುಬಿಟ್ಟಿದೆ.
2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದೆ. ಆದರೆ ಬೌಲರ್‌ಗಳು ಸಾಕಷ್ಟು ದುಬಾರಿಯಾಗುತ್ತಿರುವುದರಿಂದ ಪಂದ್ಯವನ್ನು ಕೈಚೆಲ್ಲುತ್ತಿದ್ದಾರೆ. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಾಕೆ ಐಪಿಎಲ್ ಟ್ರೋಫಿ ಗೆಲ್ಲುತ್ತಿಲ್ಲ ಎನ್ನುವುದರ ಕುರಿತಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಪವರ್‌ಪ್ಲೇ ಬಳಿಕ ನಿಧಾನಗತಿ ಬ್ಯಾಟಿಂಗ್ ಮಾಡೋದೇಕೆ..? ಇಂಟ್ರೆಸ್ಟಿಂಗ್ ಮಾಹಿತಿ ರಿವೀಲ್
ಕೇವಲ ಬ್ಯಾಟರ್‌ಗಳನ್ನೇ ನೆಚ್ಚಿಕೊಂಡು ಕಣಕ್ಕಿಳಿದರೇ, ಐಪಿಎಲ್ ಟ್ರೋಫಿ ಗೆಲ್ಲಲು ಆಗಲ್ಲ. ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸ್ವಲ್ಪ ಕಾಮನ್‌ಸೆನ್ಸ್ ಬಳಸಿಕೊಂಡು ಮುಂಬರುವ ಐಪಿಎಲ್ ಆಟಗಾರರ ಹರಾಜಿನಲ್ಲಾದರೂ ಕೆಲವು ಗುಣಮಟ್ಟದ ಬೌಲರ್‌ಗಳನ್ನು ಖರೀದಿಸಲಿ ಎಂದು ಸಲಹೆ ನೀಡಿದ್ದಾರೆ.
"ಹರಾಜಿನಲ್ಲಿ ಬರುವ ಅವರು ಯಾವ ರೀತಿ ಆಲೋಚಿಸುತ್ತಾರೋ ನನಗಂತೂ ಅರ್ಥವಾಗುತ್ತಿಲ್ಲ. ಯಾವಾಗಲೂ ಒಂದು ಸಮತೋಲಿತ ತಂಡವನ್ನು ಕಟ್ಟಬೇಕು. ಕೇವಲ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿಕೊಂಡು ಪಂದ್ಯ ಗೆಲ್ಲಲು ಸಾಧ್ಯವಿಲ್ಲ. ನೀವು ಎಲ್ಲಿಯವರೆಗೂ ಉತ್ತಮ ಬೌಲರ್‌ಗಳನ್ನು ಖರೀದಿಸುವುದಿಲ್ಲವೋ ಅಲ್ಲಿಯವರೆಗೆ ನೀವು ಗೆಲ್ಲೊಲ್ಲ ಎಂದು ಭಜ್ಜಿ ಹೇಳಿದ್ದಾರೆ.
17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ಪಂದ್ಯಗಳನ್ನಾಡಿ 2 ಗೆಲುವು ಹಾಗೂ 7 ಸೋಲುಗಳೊಂದಿಗೆ 4 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಉಳಿದಿದೆ. ಇದೀಗ ಫಾಫ್ ಪಡೆ ಭಾನುವಾರ(ಏ.28) ನಡೆಯಲಿರುವ ವರ್ಚುವಲ್ ನಾಕೌಟ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.