
ಅಹಮದಾಬಾದ್(ಮಾ.25): ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕರಾದ ಮೇಲೆ ತಂಡದಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಾ ಬಂದಿವೆ. 17ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್‌ಗೆ 5 ಬಾರಿ ಐಪಿಎಲ್ ಟ್ರೋಫಿ ಗೆದ್ದುಕೊಟ್ಟ ನಾಯಕ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ನಾಯಕ ಪಟ್ಟ ಕಟ್ಟಲಾಗಿದೆ.
ಇದೀಗ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ಎದುರು ರೋಚಕ ಸೋಲು ಅನುಭವಿಸಿದೆ. ಇದೀಗ ಈ ಪಂದ್ಯದಲ್ಲಿ ಕ್ಷೇತ್ರ ರಕ್ಷಣೆ ಮಾಡುವ ವಿಚಾರದಲ್ಲಿ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಹಾರ್ದಿಕ್ ಪಾಂಡ್ಯ ಬೌಂಡರಿ ಗೆರೆ ಬಳಿಗೆ ಕಳಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಇದರ ಬೆನ್ನಲ್ಲೇ ನೆಟ್ಟಿಗರು ಗರಂ ಆಗಿದ್ದಾರೆ.
ಗುಜರಾತ್ ಟೈಟಾನ್ಸ್ ಎದುರಿನ ಪಂದ್ಯದ ವೇಳೆ ರೋಹಿತ್ ಶರ್ಮಾ ರಿಂಗ್‌ನೊಳಗೆ ಫೀಲ್ಡಿಂಗ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಮುಂಬೈ ಇಂಡಿಯನ್ಸ್ ನೂತನ ನಾಯಕ ಹಾರ್ದಿಕ್ ಪಾಂಡ್ಯ, ರೋಹಿತ್‌ಗೆ 30 ಯಾರ್ಡ್ಸ್ ಸರ್ಕಲ್‌ನಿಂದ ಬೌಂಡರಿ ಗೆರೆ ಬಳಿ ಹೋಗಿ ಕ್ಷೇತ್ರರಕ್ಷಣೆ ಮಾಡಲು ಹೇಳುತ್ತಾರೆ. ಹಾರ್ದಿಕ್ ಪಾಂಡ್ಯ ಸೂಚನೆಯನ್ನು ಪಾಲಿಸಿ ರೋಹಿತ್ ಶರ್ಮಾ ಓಡುತ್ತಲೇ ಬೌಂಡರಿ ಗೆರೆ ಬಳಿ ಹೋಗುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಹಾರ್ದಿಕ್ ಪಾಂಡ್ಯ ಅವರ ಈ ವರ್ತನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿದೆ. 5 ಬಾರಿ ಮುಂಬೈ ಇಂಡಿಯನ್ಸ್ ತಂಡವನ್ನು ನಾಯಕ ಪಟ್ಟಕ್ಕೇರಿಸಿದ ಕ್ಯಾಪ್ಟನ್ ರೋಹಿತ್ ಶರ್ಮಾ ಅವರನ್ನು ನಡೆಸಿಕೊಳ್ಳುತ್ತಿರುವ ರೀತಿ ಇದಲ್ಲ ಎಂದು ನೆಟ್ಟಿಗರು ಪಾಂಡ್ಯ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.
ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಬಾರಿಸಿತ್ತು. ಸಾಯಿ ಸುದರ್ಶನ್ 45 ರನ್ ಬಾರಿಸಿ ಗುಜರಾತ್ ಪಡೆಗೆ ಆಸರೆಯಾದರು. ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡವು 6 ರನ್ ರೋಚಕ ಸೋಲು ಅನುಭವಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.