ಚಾಂಪಿಯನ್ಸ್ ಟ್ರೋಫಿ ಸೋತ ಇಂಗ್ಲೆಂಡ್‌ ತಂಡದಲ್ಲಿ ಮೇಜರ್ ಸರ್ಜರಿ: ಐಪಿಎಲ್‌ನಿಂದ ಬ್ಯಾನ್ ಆದ ಆಟಗಾರ ಈಗ ಕ್ಯಾಪ್ಟನ್!

Published : Apr 07, 2025, 05:52 PM ISTUpdated : Apr 07, 2025, 05:53 PM IST
ಚಾಂಪಿಯನ್ಸ್ ಟ್ರೋಫಿ ಸೋತ ಇಂಗ್ಲೆಂಡ್‌ ತಂಡದಲ್ಲಿ ಮೇಜರ್ ಸರ್ಜರಿ: ಐಪಿಎಲ್‌ನಿಂದ ಬ್ಯಾನ್ ಆದ ಆಟಗಾರ ಈಗ ಕ್ಯಾಪ್ಟನ್!

ಸಾರಾಂಶ

ಇತ್ತೀಚಿನ ಚಾಂಪಿಯನ್ಸ್ ಟ್ರೋಫಿಯಲ್ಲಿ ಇಂಗ್ಲೆಂಡ್‌ನ ಕಳಪೆ ಪ್ರದರ್ಶನದ ನಂತರ ಜೋಸ್ ಬಟ್ಲರ್ ನಾಯಕತ್ವಕ್ಕೆ ರಾಜೀನಾಮೆ ನೀಡಿದರು. ಇದೀಗ ಹ್ಯಾರಿ ಬ್ರೂಕ್ ಅವರನ್ನು ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. 2022 ರಿಂದ ತಂಡದಲ್ಲಿರುವ ಬ್ರೂಕ್, 26 ಪಂದ್ಯಗಳಲ್ಲಿ 816 ರನ್ ಗಳಿಸಿದ್ದಾರೆ ಮತ್ತು 2022ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು. ಇದು ತನಗೆ ಸಿಕ್ಕ ದೊಡ್ಡ ಗೌರವವೆಂದು ಬ್ರೂಕ್ ಹೇಳಿದ್ದಾರೆ.

ಲಂಡನ್: ಇತ್ತೀಚೆಗಷ್ಟೇ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ನೀರಸ ಪ್ರದರ್ಶನ ತೋರುವ ಮೂಲಕ ಮುಖಭಂಗ ಅನುಭವಿಸಿತ್ತು. ಆಸ್ಟ್ರೇಲಿಯಾ ಹಾಗೂ ಆಫ್ಘಾನಿಸ್ತಾನ ಎದುರು ಸತತ ಸೋಲು ಕಂಡ ಇಂಗ್ಲೆಂಡ್ ತಂಡವು ಗ್ರೂಪ್ ಹಂತದಲ್ಲೇ ಹೊರಬಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. 8 ತಂಡಗಳು ಪಾಲ್ಗೊಂಡಿದ್ದ ಮಿನಿ ವಿಶ್ವಕಪ್ ಎಂದೇ ಕರೆಯಲಾಗುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡವು ಸೆಮೀಸ್‌ಗೇರಲು ವಿಫಲವಾಗಿತ್ತು. ಇದರ ಬೆನ್ನಲ್ಲೇ ಸೋಲಿನ ಹೊಣೆಹೊತ್ತ ಜೋಸ್ ಬಟ್ಲರ್ ಇಂಗ್ಲೆಂಡ್ ಸೀಮಿತ ಓವರ್‌ಗಳ ನಾಯಕತ್ವಕ್ಕೆ ವಿದಾಯ ಘೋಷಿಸಿದ್ದರು.

ಇದೀಗ ಇಂಗ್ಲೆಂಡ್ ಕ್ರಿಕೆಟ್ ತಂಡದಲ್ಲಿ ಮೇಜರ್ ಸರ್ಜರಿಯಾಗಿದ್ದು, ಇಂಗ್ಲೆಂಡ್ & ವೇಲ್ಸ್ ಕ್ರಿಕೆಟ್ ಮಂಡಳಿಯು ಹ್ಯಾರಿ ಬ್ರೂಕ್ ಅವರನ್ನು ಇಂಗ್ಲೆಂಡ್ ಸೀಮಿತ ಓವರ್‌ಗಳ ತಂಡದ ನಾಯಕರನ್ನಾಗಿ ಘೋಷಿಸಿದೆ. ಕೆಲಸದ ಒತ್ತಡದ ನೆಪ ಹೇಳಿ ಬಲಗೈ ಬ್ಯಾಟರ್ ಹ್ಯಾರಿ ಬ್ರೂಕ್ 2025ರ ಐಪಿಎಲ್‌ನಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿದಿದ್ದರು. ಈ ಕಾರಣಕ್ಕಾಗಿ ಹ್ಯಾರಿ ಬ್ರೂಕ್ ಐಪಿಎಲ್‌ನಿಂದ ಎರಡು ವರ್ಷಗಳ ಕಾಲ ನಿಷೇಧಕ್ಕೆ ಗುರಿಯಾಗಿದ್ದಾರೆ.

2022ರಲ್ಲಿ ಇಂಗ್ಲೆಂಡ್ ತಂಡಕ್ಕೆ ಪಾದಾರ್ಪಣೆ ಮಾಡಿದಾಗಿನಿಂದ ಹ್ಯಾರಿ ಬ್ರೂಕ್, ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇನ್ನು ಸದ್ಯ ಐಸಿಸಿ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಹ್ಯಾರಿ ಬ್ರೂಕ್ ಎರಡನೇ ಸ್ಥಾನದಲ್ಲಿದ್ದಾರೆ. ಕಳೆದೊಂದು ವರ್ಷದಿಂದ ಹ್ಯಾರಿ ಬ್ರೂಕ್, ಇಂಗ್ಲೆಂಡ್ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ಉಪನಾಯಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಹ್ಯಾರಿ ಬ್ರೂಕ್ ಇಂಗ್ಲೆಂಡ್ ಪರ 26 ಪಂದ್ಯಗಳನ್ನಾಡಿದ್ದು, 34ರ ಬ್ಯಾಟಿಂಗ್ ಸರಾಸರಿಯಲ್ಲಿ816 ರನ್ ಬಾರಿಸಿದ್ದಾರೆ. ಇನ್ನು ಇದಷ್ಟೇ ಅಲ್ಲದೇ 44 ಟಿ20 ಪಂದ್ಯಗಳಲ್ಲೂ ಬ್ರೂಕ್ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದಾರೆ. ಹ್ಯಾರಿ ಬ್ರೂಕ್ 2022ರ ಐಸಿಸಿ ಟಿ20 ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದ ಭಾಗವಾಗಿದ್ದರು.

ಇನ್ನು ಇಂಗ್ಲೆಂಡ್ ಸೀಮಿತ ಓವರ್‌ಗಳ ಕ್ರಿಕೆಟ್ ತಂಡದ ನಾಯಕರಾಗಿ ನೇಮಕವಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬ್ರೂಕ್, ಇದು ನನಗೆ ಸಿಕ್ಕ ಅತಿದೊಡ್ಡ ಗೌರವಾಗಿದೆ ಎಂದು ಹೇಳಿದ್ದಾರೆ. 

ಇಂಗ್ಲೆಂಡ್ ಕ್ರಿಕೆಟ್ ತಂಡವು ಇತ್ತೀಚಿಗಿನ ವರ್ಷಗಳಲ್ಲಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗುತ್ತಾ ಬಂದಿದೆ. 2023 ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗ್ರೂಪ್ ಹಂತದಲ್ಲೇ ಹೊರಬೀಳುವ ಮೂಲಕ ಮುಖಭಂಗ ಅನುಭವಿಸಿತ್ತು. ಇನ್ನು 2024ರ ಟಿ20 ವಿಶ್ವಕಪ್‌ನಲ್ಲಿ ಸೆಮೀಸ್‌ನಲ್ಲಿ ಮುಗ್ಗರಿಸಿದ್ದ ಇಂಗ್ಲೆಂಡ್ ತಂಡವು, ಚಾಂಪಿಯನ್ಸ್ ಟ್ರೋಫಿಯಲ್ಲಿ ಮತ್ತೆ ಗ್ರೂಪ್ ಹಂತದಲ್ಲೇ ಹೊರಬೀಳುವ ಮೂಲಕ ನಿರಾಸೆ ಅನುಭವಿಸಿತ್ತು. ಹ್ಯಾರಿ ಬ್ರೂಕ್ ನೇಮಕವಾದ ಬಳಿಕವಾದರೂ ಇಂಗ್ಲೆಂಡ್ ಅದೃಷ್ಟ ಬದಲಾಗುತ್ತಾ ಕಾದು ನೋಡಬೇಕಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?