ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೋಲಿನ ಬೆನ್ನಲ್ಲೇ ಹೆಡ್ ಕೋಚ್ ರಾಹುಲ್ ದ್ರಾವಿಡ್‌ಗೆ ವಿಶ್ರಾಂತಿ
ನವೆಂಬರ್ 18ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ಪ್ರವಾಸಕ್ಕೆ ವಿವಿಎಸ್ ಲಕ್ಷ್ಮಣ್ ಹೆಡ್ ಕೋಚ್
ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ, ಏಕದಿನ ಸರಣಿಗೆ ಶಿಖರ್ ಧವನ್ ನಾಯಕ
ಅಡಿಲೇಡ್(ನ.11): ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್, ಮುಂಬರುವ ನ್ಯೂಜಿಲೆಂಡ್ ಪ್ರವಾಸದ ವೇಳೆ ಭಾರತ ಕ್ರಿಕೆಟ್ ತಂಡದ ಹಂಗಾಮಿ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಕಾಂಗರೂ ನಾಡಿನಲ್ಲಿ ಸೆಮಿಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿದೆ. ಇದರ ಬೆನ್ನಲ್ಲೇ ರಾಹುಲ್ ದ್ರಾವಿಡ್ ನೇತೃತ್ವದ ಕೋಚಿಂಗ್ ಸಿಬ್ಬಂದಿಗಳಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ವಿವಿಎಸ್ ಲಕ್ಷ್ಮಣ್, ಕಿವೀಸ್ ಪ್ರವಾಸದ ವೇಳೆ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ಭಾರತ ಕ್ರಿಕೆಟ್ ತಂಡವು ನ್ಯೂಜಿಲೆಂಡ್ ಪ್ರವಾಸದ ವೇಳೆ 6 ಸೀಮಿತ ಓವರ್‌ಗಳ ಕ್ರಿಕೆಟ್ ಪಂದ್ಯಗಳನ್ನು ಆಡಲಿದ್ದು, ಇದರಲ್ಲಿ ಮೂರು ಟಿ20 ಹಾಗೂ 3 ಏಕದಿನ ಪಂದ್ಯಗಳು ಒಳಗೊಂಡಿವೆ. ಈ ಸರಣಿಯು ನವೆಂಬರ್ 18ರಿಂದ ವೆಲ್ಲಿಂಗ್ಟನ್‌ನಲ್ಲಿ ಆರಂಭವಾಗಲಿದೆ. ನ್ಯೂಜಿಲೆಂಡ್ ಪ್ರವಾಸಕ್ಕೆ ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಹಾಗೂ ರವಿಚಂದ್ರನ್ ಅಶ್ವಿನ್‌ಗೆ ವಿಶ್ರಾಂತಿ ನೀಡಲಾಗಿದೆ. ಇದೀಗ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಸಂಪೂರ್ಣ ಕೋಚ್ ಸಿಬ್ಬಂದಿಗೂ ವಿಶ್ರಾಂತಿ ನೀಡಲಾಗಿದೆ.
undefined
ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್, ಬ್ಯಾಟಿಂಗ್ ಕೋಚ್ ಹೃಶಿಕೇಶ್ ಕಾನಿಟ್ಕರ್, ಬೌಲಿಂಗ್ ಕೋಚ್ ಸಾಯಿರಾಜ್ ಬಹುತುಲೆ, ಕಿವೀಸ್ ಪ್ರವಾಸಕ್ಕೆ ಭಾರತ ತಂಡದ ಜತೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ ಎಂದು ವರದಿಯಾಗಿದೆ.
ವಿವಿಎಸ್ ಲಕ್ಷ್ಮಣ್ ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಭಾರತ ಕ್ರಿಕೆಟ್ ತಂಡವು, ಜಿಂಬಾಬ್ವೆ ಹಾಗೂ ಐರ್ಲೆಂಡ್ ಪ್ರವಾಸ ಕೈಗೊಂಡಾಗಲೂ ರಾಹುಲ್ ದ್ರಾವಿಡ್ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. ಇನ್ನು ಇತ್ತೀಚೆಗಷ್ಟೇ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಯ ವೇಳೆಯಲ್ಲೂ ಹೆಡ್ ಕೋಚ್ ಆಗಿ ಲಕ್ಷ್ಮಣ್ ಕಾರ್ಯನಿರ್ವಹಿಸಿದ್ದರು.
ನ್ಯೂಜಿಲೆಂಡ್ ಪ್ರವಾಸದ ವೇಳೆ ಭಾರತ ಟಿ20 ತಂಡವನ್ನು ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ನಾಯಕನಾಗಿ ನೇಮಕವಾಗಿದ್ದಾರೆ. ಇನ್ನು 3 ಪಂದ್ಯಗಳ ಏಕದಿನ ಸರಣಿಯನ್ನು ಅನುಭವಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನುಳಿದಂತೆ ರೋಹಿತ್ ಶರ್ಮಾ, ಬಾಂಗ್ಲಾದೇಶ ಪ್ರವಾಸದ ವೇಳೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಹಾಗೂ ರವಿಚಂದ್ರನ್ ಅಶ್ವಿನ್ ಕೂಡಾ ಡಿಸೆಂಬರ್ 04ರಿಂದ ಆರಂಭವಾಗಲಿರುವ ಬಾಂಗ್ಲಾದೇಶ ಪ್ರವಾಸದ ವೇಳೆಗೆ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ಪ್ರವಾಸದ ವೇಳೆ 3 ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
ನವೆಂಬರ್ 10ರಂದು ನಡೆದ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ 168 ರನ್ ಕಲೆಹಾಕಿತ್ತು. ಈ ಗುರಿ ಬೆನ್ನತ್ತಿದ ಅಲೆಕ್ಸ್ ಹೇಲ್ಸ್ ಹಾಗೂ ಜೋಸ್ ಬಟ್ಲರ್ ಜೋಡಿ ಮೊದಲ ವಿಕೆಟ್‌ಗೆ 170 ರನ್‌ಗಳ ಜತೆಯಾಟವಾಡುವ ಇನ್ನೂ 24 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ.