
ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಬ್ಲಾಕ್‌ಬಸ್ಟರ್ ಮ್ಯಾಚ್ ಇದಾಗಿದ್ದು, ಈ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈ ಪಂದ್ಯ ಗೆದ್ದು ಸೆಮೀಸ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಉತ್ಸಾಹದಲ್ಲಿದೆ. ಇನ್ನೊಂದೆಡೆ ಈಗಾಗಲೇ ಉದ್ಘಾಟನಾ ಪಂದ್ಯದಲ್ಲಿ ಸೋತು ಮುಖಭಂಗ ಅನುಭವಿಸಿರುವ ಪಾಕಿಸ್ತಾನ ತಂಡವು ಇದೀಗ ಒಂದು ರೀತಿ ವರ್ಚುವಲ್ ನಾಕೌಟ್ ಕಾದಾಟಕ್ಕೆ ಸಜ್ಜಾಗಿದೆ. ಈ ಪಂದ್ಯ ಸೋತರೇ ಪಾಕ್ ತಂಡದ ಸೆಮೀಸ್ ಕನಸು ಬಹುತೇಕ ನುಚ್ಚುನೂರಾಗಲಿದೆ.
ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ಅಂತರದ ಅನಾಯಾಸದ ಗೆಲುವು ದಾಖಲಿಸಿತ್ತು. ಬೌಲಿಂಗ್‌ನಲ್ಲಿ ಮೊಹಮ್ಮದ್ ಶಮಿ 5 ವಿಕೆಟ್ ಗೊಂಚಲು ಪಡೆದರೆ, ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಅಜೇಯ ಶತಕ ಸಿಡಿಸುವ ಮೂಲಕ ಟೀಂ ಇಂಡಿಯಾದ ಗೆಲುವಿನ ರೂವಾರಿಗಳೆನಿಸಿದ್ದರು. ಬಾಂಗ್ಲಾದೇಶ ಎದುರು ಟೀಂ ಇಂಡಿಯಾ ಸಂಘಟಿತ ಪ್ರದರ್ಶನ ತೋರಿದ ಹೊರತಾಗಿಯೂ, ಪಾಕಿಸ್ತಾನ ಎದುರಿನ ಮಹತ್ವದ ಪಂದ್ಯಕ್ಕೆ ರೋಹಿತ್ ಶರ್ಮಾ ಪಡೆ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ: ಭಾರತ ಎದುರು ಸೋತರೂ ಪಾಕಿಸ್ತಾನಕ್ಕಿದೆ ಸೆಮೀಸ್‌ಗೇರುವ ಚಾನ್ಸ್! ಇಲ್ಲಿದೆ ನಾಕೌಟ್ ಲೆಕ್ಕಾಚಾರ
ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್‌ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಲಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಆಗುವುದಿಲ್ಲ. ಕಳೆದ ಪಂದ್ಯದಲ್ಲಿ ಈ ಜೋಡಿ 69 ರನ್‌ಗಳ ಜತೆಯಾಟವಾಡಿತ್ತು. ರೋಹಿತ್ ಹಾಗೂ ಗಿಲ್ ಮೊದಲ ಪಂದ್ಯದಲ್ಲೇ ಸ್ಪೋಟಕ ಆರಂಭ ಒದಗಿಸಿಕೊಟ್ಟಿದ್ದರು, ಹೀಗಾಗಿ ಅದೇ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.
ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ದೊಡ್ಡ ಇನ್ನಿಂಗ್ಸ್ ಆಡಲು ಸಜ್ಜಾಗಿದ್ದಾರೆ. ಪಾಕಿಸ್ತಾನ ಎದುರು ಕೊಹ್ಲಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ಇನ್ನು ಇದರ ಜತೆಗೆ ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್ ಕ್ರಮವಾಗಿ ನಾಲ್ಕು ಹಾಗೂ ಐದನೇ ಕ್ರಮಾಂಕದಲ್ಲಿ ಮತ್ತೊಮ್ಮೆ ಜವಾಬ್ದಾರಿಯುತ ಆಟ ಆಡಬೇಕಿದೆ.
ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾದಲ್ಲಿ ಆಲ್ರೌಂಡರ್‌ಗಳಿಗೆ ಆಡುವ ಹನ್ನೊಂದರ ಬಳಗದಲ್ಲಿ ಹೆಚ್ಚಿನ ಅವಕಾಶ ಸಿಗುತ್ತಿದೆ. ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಆಲ್ರೌಂಡರ್‌ಗಳ ರೂಪದಲ್ಲಿ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಇನ್ನು ಉಪಯುಕ್ತ ಬೌಲಿಂಗ್ ಆಲ್ರೌಂಡರ್ ಆಗಿ ರೂಪುಗೊಳ್ಳುತ್ತಿರುವ ಹರ್ಷಿತ್ ರಾಣಾ ಕೂಡಾ ಮತ್ತೊಮ್ಮೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿ: ಇಂಡಿಯಾ vs ಪಾಕ್ ಪಂದ್ಯಕ್ಕೆ ಯಾಕಿಷ್ಟು ಮಹತ್ವ ಗೊತ್ತಾ?
ಇನ್ನು ಸ್ಪಿನ್ ವಿಭಾಗದಲ್ಲಿ ಟೀಂ ಇಂಡಿಯಾದಲ್ಲಿಂದು ಒಂದು ಬದಲಾವಣೆಯಾಗುವ ಸಾಧ್ಯತೆ ದಟ್ಟವಾಗಿದೆ. ತಂಡದಲ್ಲಿ ಸ್ಪಿನ್ ಆಲ್ರೌಂಡರ್‌ಗಳ ರೂಪದಲ್ಲಿ ಜಡೇಜಾ ಹಾಗೂ ಅಕ್ಷರ್ ಪಟೇಲ್ ಇದ್ದು, ಕಳೆದ ಪಂದ್ಯದಲ್ಲಿ ತಜ್ಞ ಸ್ಪಿನ್ನರ್ ರೂಪದಲ್ಲಿ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದರು. ಆದರೆ ಇಂದಿನ ಪಂದ್ಯಕ್ಕೆ ಕುಲ್ದೀಪ್ ಯಾದವ್ ಬದಲಿಗೆ ಮಿಸ್ಟ್ರಿ ಸ್ಪಿನ್ನರ್ ಖ್ಯಾತಿಯ ವರುಣ್ ಚಕ್ರವರ್ತಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ. ವರುಣ್ ಚಕ್ರವರ್ತಿ, ಇತ್ತೀಚೆಗಷ್ಟೇ ಮುಕ್ತಾಯವಾದ ಇಂಗ್ಲೆಂಡ್ ಎದುರಿನ ಸೀಮಿತ ಓವರ್‌ಗಳ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು.
ವೇಗದ ಬೌಲಿಂಗ್ ರೂಪದಲ್ಲಿ ಅನುಭವಿ ವೇಗಿ ಮೊಹಮ್ಮದ್ ಶಮಿ ಹಾಗೂ ಹರ್ಷಿತ್ ರಾಣಾ ತಂಡದಲ್ಲೇ ಸ್ಥಾನ ಉಳಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಈ ಪಂದ್ಯಕ್ಕೂ ಅರ್ಶದೀಪ್ ಸಿಂಗ್ ಬೆಂಚ್ ಕಾಯಿಸುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ: 'ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಎದುರು ಪಾಕ್ ಗೆಲ್ಲಲಿ': ಟೀಂ ಇಂಡಿಯಾ ಮಾಜಿ ಕ್ರಿಕೆಟಿಗನ ಅಚ್ಚರಿ ಮಾತು!
ಭಾರತ ಸಂಭವನೀಯ ಆಟಗಾರರ ಪಟ್ಟಿ
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.