
ದುಬೈ: ಟೀಂ ಇಂಡಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನದ ಹೊರತಾಗಿಯೂ ಮತ್ತೊಮ್ಮೆ ಸ್ಟೀವ್ ಸ್ಮಿತ್ ಹಾಗೂ ಅಲೆಕ್ಸ್ ಕ್ಯಾರಿ ಭಾರತ ತಂಡವನ್ನು ಮತ್ತೊಮ್ಮೆ ಕಾಡಿದರು. ಈ ಇಬ್ಬರು ಬ್ಯಾಟರ್‌ಗಳು ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಆಸ್ಟ್ರೇಲಿಯಾ ತಂಡವು 264 ರನ್ ಬಾರಿಸಿ ಸರ್ವಪತನ ಕಂಡಿದೆ. ಈ ಮೂಲಕ ಭಾರತಕ್ಕೆ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೇರಲು ಸವಾಲಿನ ಗುರಿ ನೀಡಿದೆ. ಶಮಿ 3 ವಿಕೆಟ್ ಕಬಳಿಸಿ ಮಿಂಚಿದರು.
ಇಲ್ಲಿನ ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಆದರೆ ಉತ್ತಮ ಆರಂಭ ಪಡೆಯಲು ಕಾಂಗರೂ ಪಡೆ ವಿಫಲವಾಯಿತು. ಮ್ಯಾಥ್ಯೂ ಶಾರ್ಟ್ ಅನುಪಸ್ಥಿತಿಯಲ್ಲಿ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕೂಪರ್ ಕಾನ್ನೊಲ್ಲೆ 9 ಎಸೆತಗಳನ್ನು ಎದುರಿಸಿ ಶೂನ್ಯ ಸುತ್ತಿ ಮೊಹಮ್ಮದ್ ಶಮಿಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಟ್ರ್ಯಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ 50 ರನ್‌ಗಳ ಜತೆಯಾಟವಾಡಿದರು.
ಕೇವಲ 33 ಎಸೆತಗಳಲ್ಲಿ 39 ರನ್ ಬಾರಿಸಿ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದ್ದ ಟ್ರ್ಯಾವಿಸ್ ಹೆಡ್ ಅವರನ್ನು ಬಲಿಪಡೆಯುವಲ್ಲಿ ವರುಣ್ ಚಕ್ರವರ್ತಿ ಯಶಸ್ವಿಯಾದರು. ಇನ್ನು ಇದಾದ ಬಳಿಕ 4ನೇ ವಿಕೆಟ್‌ಗೆ ಮಾರ್ನಸ್ ಲಬುಶೇನ್ ಹಾಗೂ ಸ್ಟೀವ್ ಸ್ಮಿತ್ 56 ರನ್‌ಗಳ ಜತೆಯಾಟವಾಡಿದರು. ಲಬುಶೇನ್ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಮತ್ತೆ ಕಾಡಿದ ಸ್ಮಿತ್: ಟೀಂ ಇಂಡಿಯಾ ಎದುರು ಐಸಿಸಿ ಟೂರ್ನಿಯಲ್ಲಿ ಯಾವಾಗಲೂ ಕಾಡುವ ಸ್ಟೀವ್ ಸ್ಮಿತ್ ಮತ್ತೊಮ್ಮೆ ಅರ್ಧಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ಬೌಲರ್‌ಗಳನ್ನು ಕಾಡಿದರು. ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಸ್ಟೀವ್ ಸ್ಮಿತ್ ನಾಯಕನ ಆಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಮಿತ್ 96 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 73 ರನ್ ಗಳಿಸಿ ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು.
ಇನ್ನು ಕೆಳ ಕ್ರಮಾಂಕದಲ್ಲಿ ಅಲೆಕ್ಸ್ ಕ್ಯಾರಿ ಸ್ಪೋಟಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು 240ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಚುರುಕಿನ ಬ್ಯಾಟಿಂಗ್ ನಡೆಸಿದ ಕ್ಯಾರಿ 57 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 61 ರನ್ ಗಳಿಸಿ ರನೌಟ್ ಆಗಿ ಪೆವಿಲಿಯನ್ ಸೇರಿದರು.
ಭಾರತ ಪರ ಶಿಸ್ತುಬದ್ದ ದಾಳಿ ನಡೆಸಿದ ಅನುಭವಿ ವೇಗಿ ಮೊಹಮ್ಮದ್ ಶಮಿ 10 ಓವರ್‌ನಲ್ಲಿ 48 ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆದರು. ಇನ್ನು ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜಾ ತಲಾ 2 ಹಾಗೂ ಹಾರ್ದಿಕ್ ಪಾಂಡ್ಯ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.