
ದುಬೈ: ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಇಂದು ಮಧ್ಯಾಹ್ನ ಭಾರತೀಯ ಕಾಲಮಾನ 2.30ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬ್ಲಾಕ್ ಬಸ್ಟರ್ ಪಂದ್ಯ ಆರಂಭವಾಗಲಿದೆ. ಅಂದಹಾಗೆ ಇಂದಿನ ಪಂದ್ಯವು ಹಲವು ವಿಶೇಷಗಳಿಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.
ಒಂದು ಕಡೆ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಆಘಾತಕಾರಿ ಸೋಲು ಅನುಭವಿಸಿರುವ ಹಾಲಿ ಚಾಂಪಿಯನ್ ಪಾಕಿಸ್ತಾನ ತಂಡವು, ಇದೀಗ ಭಾರತ ಎದುರು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ. ಇನ್ನೊಂದೆಡೆ ಬಾಂಗ್ಲಾದೇಶ ಎದುರು ಭರ್ಜರಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದು ಸೆಮೀಸ್‌ಗೆ ಎಂಟ್ರಿ ಕೊಡುವ ವಿಶ್ವಾಸದಲ್ಲಿದೆ. ಇದಷ್ಟೇ ಅಲ್ಲದೇ 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಸೋಲ್ಡೌಟ್ ಆಗಿವೆ.
ಇದನ್ನೂ ಓದಿ: ದುಬೈನಲ್ಲಿಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ!
ಟೀಂ ಇಂಡಿಯಾ ತ್ರಿಮೂರ್ತಿಗಳಿಗೆ ಪಾಕಿಸ್ತಾನ ಎದುರು ಇದೇ ಕೊನೆಯ ಮ್ಯಾಚ್?
ಹೌದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಬದ್ದ ಎದುರಾಳಿಗಳ ನಡುವಿನ ಪಂದ್ಯ ಗೆಲ್ಲಲು ಉಭಯ ತಂಡದ ಆಟಗಾರರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಪಾಕಿಸ್ತಾನ ಎದುರು ಅದ್ಭುತ ಪ್ರದರ್ಶನ ತೋರುವ ಮೂಲಕ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿದ್ದಾರೆ. ಆದರೆ ಈ ಮೂವರು ಕ್ರಿಕೆಟಿಗರ ಪಾಲಿಗೆ ಇದೇ ಪಾಕಿಸ್ತಾನ ಎದುರು ಕೊನೆಯ ಪಂದ್ಯ ಆಗುವ ಸಾಧ್ಯತೆಯಿದೆ.
ಒಂದು ವೇಳೆ ಇಂದಿನ ಪಂದ್ಯದಲ್ಲಿ ಪಾಕ್ ಎದುರು ಟೀಂ ಇಂಡಿಯಾ ಗೆದ್ದರೇ, ಪಾಕಿಸ್ತಾನ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ. ಇನ್ನು ಏಕದಿನ ಮಾದರಿಯಲ್ಲಿ ಐಸಿಸಿ ಟೂರ್ನಿ ಇರುವುದು 2027ರಲ್ಲಿ. 2027ರಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಜರುಗಲಿದೆ. ಈ ಮೂವರು ಕ್ರಿಕೆಟಿಗರ ಸದ್ಯದ ಫಾರ್ಮ್ ಗಮನಿಸಿದರೆ, ಇನ್ನೂ ಎರಡು ಎರಡು ವರ್ಷ ಜಡೇಜಾ, ರೋಹಿತ್ ಹಾಗೂ ಕೊಹ್ಲಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಮುಂದುವರೆಯುವುದು ಅನುಮಾನ ಎನಿಸಿದೆ. ಹೀಗಾಗಿ ಇಂದಿನ ಪಂದ್ಯವೇ ಪಾಕ್ ಎದುರು ಈ ತ್ರಿಮೂರ್ತಿಗಳಿಗೆ ಕೊನೆಯ ಪಂದ್ಯವಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಭಾರತ ಎದುರು ಸೋತರೂ ಪಾಕಿಸ್ತಾನಕ್ಕಿದೆ ಸೆಮೀಸ್‌ಗೇರುವ ಚಾನ್ಸ್! ಇಲ್ಲಿದೆ ನಾಕೌಟ್ ಲೆಕ್ಕಾಚಾರ
ಈಗಾಗಲೇ ಅಂತಾರಾಷ್ಟ್ರೀಯ ಟಿ20 ಮಾದರಿಗೆ ವಿದಾಯ ಹೇಳಿರುವ ತ್ರಿಮೂರ್ತಿಗಳು:
ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಮಣಿಸಿ ಟೀಂ ಇಂಡಿಯಾ ಚಾಂಪಿಯನ್ ಆಗುತ್ತಿದ್ದಂತೆಯೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು. ಇದೀಗ ಈ ತ್ರಿಮೂರ್ತಿಗಳು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನ ಸಂಧ್ಯಾಕಾಲದಲ್ಲಿದ್ದು, ಚಾಂಪಿಯನ್ಸ್ ಟ್ರೋಫಿ ಗೆದ್ದು ಸ್ಮರಣೀಯವಾಗಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ.
ಸಂಭವನೀಯ ಆಟಗಾರರ ಪಟ್ಟಿ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ.
ಪಾಕಿಸ್ತಾನ: ಇಮಾಮ್, ಬಾಬರ್, ಶಕೀಲ್, ರಿಜ್ವಾನ್ (ನಾಯಕ), ಸಲ್ಮಾನ್, ತಯ್ಯಬ್, ಖುಷ್‌ದಿಲ್, ಶಾಹೀನ್, ನಸೀಂ, ರೌಫ್, ಅಬ್ರಾರ್.
ಪಂದ್ಯ ಆರಂಭ: 2.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.