ODI World Cup 2023: ಇಂಡೋ-ಪಾಕ್ ಕದನಕ್ಕೆ ಮೋದಿ ಸ್ಟೇಡಿಯಂ ಆತಿಥ್ಯ..! ಬೆಂಗ್ಳೂರರಿಗೂ ಗುಡ್‌ ನ್ಯೂಸ್

Published : May 05, 2023, 04:19 PM IST
ODI World Cup 2023: ಇಂಡೋ-ಪಾಕ್ ಕದನಕ್ಕೆ ಮೋದಿ ಸ್ಟೇಡಿಯಂ ಆತಿಥ್ಯ..! ಬೆಂಗ್ಳೂರರಿಗೂ ಗುಡ್‌ ನ್ಯೂಸ್

ಸಾರಾಂಶ

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭ ಭಾರತ-ಪಾಕಿಸ್ತಾನ ಫೈಟ್‌ಗೆ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ಬೆಂಗಳೂರು-ಚೆನ್ನೈ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್

ನವದೆಹಲಿ(ಮೇ.05): ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭರದ ಸಿದ್ದತೆಗಳು ಆರಂಭವಾಗಿವೆ. ಇನ್ನು ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳೆಂದು ಬಿಂಬಿಸಲ್ಪಟ್ಟಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಕಾದಾಟಕ್ಕೆ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯ ವಹಿಸುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ. ಒಂದು ವೇಳೆ ಹೀಗಾದಲ್ಲಿ 2016ರ ಬಳಿಕ ಪಾಕಿಸ್ತಾನ ತಂಡವು ಭಾರತದ ನೆಲದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾದಂತೆ ಆಗುತ್ತದೆ.

ಒಂದು ಲಕ್ಷಕ್ಕೂ ಅಧಿಕ ಮಂದಿ ಏಕಕಾಲದಲ್ಲಿ ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸುವ ಸಾಮರ್ಥ್ಯ ಹೊಂದಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ತೀರ್ಮಾನ ಮಾಡುತ್ತಿದೆ ಎಂದು ದ ಇಂಡಿಯನ್‌ ಎಕ್ಸ್‌ಪ್ರೆಸ್‌ ವೆಬ್‌ಸೈಟ್ ವರದಿ ಮಾಡಿದೆ. ಇಂಡೋ-ಪಾಕಿಸ್ತಾನ ನಡುವಿನ ಪಂದ್ಯವನ್ನು ಮೈದಾನದಲ್ಲೇ ಕಣ್ತುಂಬಿಕೊಳ್ಳಲು ಕ್ರಿಕೆಟ್ ಜಗತ್ತಿನ ಮೂಲೆಮೂಲೆಗಳಿಂದ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬರುವುದರಿಂದಾಗಿ ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ.

ಇನ್ನು ಇದೇವೇಳೆ, 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮುಕ್ತಾಯವಾದ ಬಳಿಕವಷ್ಟೇ ಬಿಸಿಸಿಐ, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಲಿದೆ ಎನ್ನಲಾಗುತ್ತಿದೆ. 2023ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮೇ 28ರಂದು ಮುಕ್ತಾಯವಾಗಲಿದೆ. 

ಈ ತಂಡವೇ ಈ ಬಾರಿ IPL ಕಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ರವಿಶಾಸ್ತ್ರಿ

ಎಲ್ಲವೂ ಅಂದುಕೊಂಡಂತೆ ಆದರೆ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಲಿದ್ದು, ನಾಗ್ಪುರ, ಬೆಂಗಳೂರು, ತಿರುವನಂತಪುರಂ, ಮುಂಬೈ, ಡೆಲ್ಲಿ, ಲಖನೌ, ಗುವಾಹಟಿ, ಹೈದರಾಬಾದ್, ಕೋಲ್ಕತಾ, ರಾಜ್‌ಕೋಟ್, ಇಂದೋರ್ ಹಾಗೂ ಧರ್ಮಶಾಲಾದಲ್ಲಿ ವಿಶ್ವಕಪ್‌ ಚಾಂಪಿಯನ್ ಪಟ್ಟಕ್ಕಾಗಿ ತಂಡಗಳು ಕಾದಾಡಲಿವೆ.

ಈ ಎಲ್ಲಾ ನಗರಗಳ ಪೈಕಿ ಕೇವಲ 7 ನಗರಗಳ ಸ್ಟೇಡಿಯಂಗಳಲ್ಲಿ ಮಾತ್ರ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳನ್ನು ಆಡಲಿದೆ. ಅಹಮದಾಬಾದ್‌ನಲ್ಲಿ ಭಾರತ ತಂಡವು ಎರಡು ಪಂದ್ಯಗಳನ್ನಾಡುವ ಸಾಧ್ಯತೆಯಿದೆ.  

ಪಾಕ್‌ ಬಹುತೇಕ ಪಂದ್ಯಗಳಿಗೆ ಬೆಂಗಳೂರು-ಚೆನ್ನೈ ಆತಿಥ್ಯ?:

ಹೌದು, ವರದಿಯಲ್ಲಿ ಉಲ್ಲೇಖಿಸಿರುವಂತೆ ಭದ್ರತೆಯ ಕಾರಣದಿಂದಾಗಿ ಪಾಕಿಸ್ತಾನ ತಂಡವು ಆಡಲಿರುವ ಬಹುತೇಕ ಪಂದ್ಯಗಳಿಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಹಾಗೂ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವನ್ನು ವಹಿಸುವ ಸಾಧ್ಯತೆಯಿದೆ. ಇನ್ನು ಮತ್ತೊಂದು ನೆರೆಯ ರಾಷ್ಟ್ರವಾದ ಬಾಂಗ್ಲಾದೇಶ ತಂಡವು ತನ್ನ ಪಾಲಿನ ಬಹುತೇಕ ಪಂದ್ಯಗಳನ್ನು ಕೋಲ್ಕತಾದ ಈಡನ್‌ ಗಾರ್ಡನ್ಸ್ ಹಾಗೂ ಅಸ್ಸಾಂನ ಗುವಾಹಟಿಯಲ್ಲಿ ಆಡುವ ಸಾಧ್ಯತೆಯಿದೆ. ಬಾಂಗ್ಲಾದೇಶದ ಅಭಿಮಾನಿಗಳಿಗೆ ಈ ಎರಡು ಸ್ಟೇಡಿಯಂ ಹತ್ತಿರದಲ್ಲಿರುವುದರಿಂದ ಈ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 

ಅಕ್ಟೋಬರ್ ಹಾಗೂ ನವೆಂಬರ್ ತಿಂಗಳು ಮಾನ್ಸೂನ್ ಸೀಸನ್ ಆಗಿರುವುದರಿಂದ ದಕ್ಷಿಣ ಭಾರತದಲ್ಲಿನ ಪಂದ್ಯಗಳನ್ನು ನವೆಂಬರ್ ಮೊದಲ ವಾರದೊಳಗಾಗಿ ಮುಗಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. 

ಇನ್ನು ಭಾರತೀಯ ಕ್ರಿಕೆಟ್ ತಂಡದ ಮೂಲಗಳ ಪ್ರಕಾರ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ದದ ಪಂದ್ಯಗಳನ್ನು ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಆಯೋಜಿಸಲು ಬಿಸಿಸಿಐಗೆ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್ ತಿಳಿಸಿದೆ ಎನ್ನಲಾಗುತ್ತಿದೆ. ಇದರಿಂದ ಟೂರ್ನಿ ಆಯೋಜಿಸುವ ತವರಿನ ತಂಡಕ್ಕೆ ಹೆಚ್ಚು ಲಾಭವಾಗುವ ಸಾಧ್ಯತೆಯಿದೆ.

ಇನ್ನು ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಸ್ಟೇಡಿಯಂ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ದೇಶಾದ್ಯಂತ ಇರುವ ಸ್ಟೇಡಿಯಂಗಳಿಗೆ ಒಟ್ಟಾರೆ 500 ಕೋಟಿ ರುಪಾಯಿಗಳನ್ನು ಮೀಸಲಿಟ್ಟಿದೆ. ಇತ್ತೀಚೆಗಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ದೇಶದಲ್ಲಿರುವ ಸ್ಟೇಡಿಯಂನಲ್ಲಿನ ಮೌಲ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವ ಮಾತುಗಳನ್ನಾಡಿದ್ದರು. ಭಾರತೀಯ ಕ್ರೀಡಾಂಗಣಗಳಲ್ಲಿನ ಸ್ವಚ್ಚತೆ ಹಾಗೂ ಮೌಲ ಸೌಕರ್ಯಗಳ ಕುರಿತಂತೆ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಚ್ಛ ಶೌಚಾಲಯ, ಸ್ವಚ್ಛ ಆಸನ ವ್ಯವಸ್ಥೆ ಮಾಡಲು ನಿರ್ಧರಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌