
ರಾಜ್‌ಕೋಟ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ನೂತನ ಏಕದಿನ ರ್‍ಯಾಂಕಿಂಗ್ ಪ್ರಕಟಗೊಂಡಿದ್ದು, ಈ ಮಾದರಿಯ ಕ್ರಿಕೆಟ್‌ನಲ್ಲಿ ಅತ್ಯದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ವಿರಾಟ್ ಕೊಹ್ಲಿ ಬರೋಬ್ಬರಿ 4 ವರ್ಷಗಳ ಬಳಿಕ ಮತ್ತೊಮ್ಮೆ ನಂ.1 ಸ್ಥಾನಕ್ಕೆ ಲಗ್ಗೆಯಿಡುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದೊಂದು ವರ್ಷದಿಂದ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ, ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾರನ್ನು ಹಿಂದೆ ತಳ್ಳಿ, ಕೊಹ್ಲಿ ನಂ.1 ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.
ಕಿಂಗ್ ಕೊಹ್ಲಿ ಸದ್ಯ ರೆಡ್ ಹಾಟ್ ಫಾರ್ಮ್‌ನಲ್ಲಿದ್ದು, ಕಳೆದ ಐದು ಏಕದಿನ ಇನ್ನಿಂಗ್ಸ್‌ಗಳಲ್ಲಿ ಎರಡು ಶತಕ ಹಾಗೂ ಮೂರು ಅರ್ಧಶತಕ ಸಹಿತ ಸತತ 5 ಇನ್ನಿಂಗ್ಸ್‌ಗಳಲ್ಲಿ 50+ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ 93 ರನ್ ಸಿಡಿಸುವ ಮೂಲಕ ಕೇವಲ 7 ರನ್ ಅಂತರದಲ್ಲಿ ಶತಕ ವಂಚಿತರಾಗಿದ್ದರು. ಇನ್ನು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಇದೀಗ ಎರಡು ಸ್ಥಾನ ಕುಸಿತ ಕಂಡು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.
37 ವರ್ಷದ ಅನುಭವಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ರೆಡ್ ಹಾಟ್ ಫಾರ್ಮ್‌ನಲ್ಲಿದ್ದಾರೆ. ಇದೀಗ ಮತ್ತೊಮ್ಮೆ ಏಕದಿನ ಕ್ರಿಕೆಟ್ ಐಸಿಸಿ ರ್‍ಯಾಂಕಿಂಗ್‌ನಲ್ಲಿ ವಿರಾಟ್ ನಂ.1 ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ಒಟ್ಟು 785 ರೇಟಿಂಗ್ ಅಂಕಗಳನ್ನು ಹೊಂದುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ. ಕಿವೀಸ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ 91 ಎಸೆತಗಳನ್ನು ಎದುರಿಸಿ 93 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ನ್ಯೂಜಿಲೆಂಡ್‌ನ ಡೇರಲ್ ಮಿಚೆಲ್ ಎರಡನೇ ಸ್ಥಾನಕ್ಕೇರಿದ್ದಾರೆ. ಡೇರಲ್ ಮಿಚೆಲ್ ಭಾರತ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ 71 ಎಸೆತಗಳಲ್ಲಿ 84 ರನ್ ಸಿಡಿಸಿದ್ದರು. ಸದ್ಯ ಡೇರಲ್ ಮಿಚೆಲ್ ಸದ್ಯ 784 ರೇಟಿಂಗ್ ಅಂಕ ಹೊಂದಿದ್ದಾರೆ.
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ 2021ರ ಜುಲೈನಲ್ಲಿ ಕೊನೆಯ ಬಾರಿಗೆ ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದರು. ಇದಾಗಿ ನಾಲ್ಕು ವರ್ಷಗಳ ಬಳಿಕ ಮತ್ತೊಮ್ಮೆ ವಿರಾಟ್ ಕೊಹ್ಲಿ ನಂ.1 ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ 2013ರಲ್ಲಿ ಮೊದಲ ಬಾರಿಗೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದ್ದರು. ಇದಾದ ಬಳಿಕ ಬರೋಬ್ಬರಿ 11 ಬಾರಿ ಅಗ್ರಸ್ಥಾನಕ್ಕೇರಿದ್ದಾರೆ.
ಕಳೆದ ಅಕ್ಟೋಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಶೂನ್ಯ ಸುತ್ತಿದ್ದ ಕೊಹ್ಲಿ, ಆ ಬಳಿಕ ಆಸೀಸ್ ಎದುರಿನ ಸಿಡ್ನಿ ಏಕದಿನ ಪಂದ್ಯದಲ್ಲಿ ಅಜೇಯ 74 ರನ್ ಸಿಡಿಸಿದ್ದರು. ಇದಾದ ಬಳಿಕ ದಕ್ಷಿಣ ಆಫ್ರಿಕಾ ಎದುರಿನ ಮೊದಲೆರಡು ಏಕದಿನ ಪಂದ್ಯಗಳಲ್ಲಿ 135, 102 ಶತಕ ಸಿಡಿಸಿದ್ದ ಅವರು, ಕೊನೆಯ ಏಕದಿನ ಪಂದ್ಯದಲ್ಲಿ ಅಜೇಯ 65 ರನ್ ಬಾರಿಸಿದ್ದರು. ಇನ್ನು ಅದೇ ಲಯವನ್ನು ಕಿವೀಸ್ ಎದುರಿನ ಸರಣಿಯಲ್ಲಿ ಮುಂದುವರೆಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.