
ಬೆಂಗಳೂರು: ಐಸಿಸಿ ನೂತನ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್ ಪ್ರಕಟವಾಗಿದ್ದು, ಟೀಂ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ನಂ.1 ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ರನ್ ಮಷೀನ್ ವಿರಾಟ್ ಕೊಹ್ಲಿ, ಇದೀಗ ಗಿಲ್ ನಂ.1 ಪಟ್ಟದ ಮೇಲೆ ಕಣ್ಣಿಟ್ಟಿದ್ದು, ಮತ್ತೆ ರನ್ ಬೇಟೆ ಶುರು ಮಾಡಿದ್ದಾರೆ. ತಿರುವನಂತಪುರಂನಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ ಶತಕ ಸಿಡಿಸುವ ಮೂಲಕ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾದರು. ಇದರ ಜತೆಗೆ ಐಸಿಸಿ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವಲ್ಲಿಯೂ ಯಶಸ್ವಿಯಾಗಿದ್ದಾರೆ.
ವೆಸ್ಟ್ ಇಂಡೀಸ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಕೂಡಾ ಆಕರ್ಷಕ ಶತಕ ಸಿಡಿಸುವ ಮೂಲಕ 15 ರೇಟಿಂಗ್ ಅಂಕಗಳನ್ನು ಸಂಪಾದಿಸಿ 816 ಅಂಕಗಳೊಂದಿಗೆ ನಂ.1 ಸ್ಥಾನವನ್ನು ಭದ್ರಪಡಿಸಿಕೊಂಡರು. ಇನ್ನು ಮೊದಲ ಏಕದಿನ ಪಂದ್ಯಕ್ಕೂ ಮುನ್ನ 767 ರೇಟಿಂಗ್ ಅಂಕಗಳನ್ನು ಹೊಂದಿದ್ದ ಕೊಹ್ಲಿ ಈ ಶತಕದೊಂದಿಗೆ 29 ರೇಟಿಂಗ್ ಅಂಕ ಸಂಪಾದಿಸಿ ನ್ಯೂಜಿಲೆಂಡ್‌ನ ಡೇರಲ್ ಮಿಚೆಲ್ ಹಿಂದಿಕ್ಕಿ ವಿರಾಟ್ ಕೊಹ್ಲಿ ಇದೀಗ ಎರಡನೇ ಸ್ಥಾನಕ್ಕೇರಿದ್ದಾರೆ. ಕೊಹ್ಲಿ ಸದ್ಯ 796 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
ಇನ್ನುಳಿದಂತೆ ಇಂಗ್ಲೆಂಡ್ ಸ್ಪೋಟಕ ಆರಂಭಿಕ ಬ್ಯಾಟರ್ ಟಾಮ್ ಬಾಂಟನ್, ಶ್ರೀಲಂಕಾ ಎದುರಿನ ಮೂರನೇ ಏಕದಿನ ಪಂದ್ಯದಲ್ಲಿ 105 ಎಸೆತಗಳನ್ನು ಎದುರಿಸಿ 126 ರನ್ ಸಿಡಿಸಿದ್ದರು. ಈ ಮೂಲಕ 333 ಸ್ಥಾನಗಳನ್ನು ಜಿಗಿತ ಕಂಡು 83ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಶ್ರೀಲಂಕಾದ ಕುಸಾಲ್ ಮೆಂಡಿಸ್ ಇಂಗ್ಲೆಂಡ್ ಎದುರಿನ ಸರಣಿಯಲ್ಲಿ 198 ರನ್ ಸಿಡಿಸಿ ಗಮನ ಸೆಳೆದಿದ್ದರು. ಇದೀಗ ವೃತ್ತಿಜೀವನದ ಶ್ರೇಷ್ಠ ಸಾಧನೆಯಾಗಿ ಏಳನೇ ಸ್ಥಾನಕ್ಕೆ ಮೆಂಡಿಸ್ ಲಗ್ಗೆಯಿಟ್ಟಿದ್ದಾರೆ. ಇನ್ನು ಇಂಗ್ಲೆಂಡ್‌ನ ಬೆನ್ ಡಕೆಟ್ ನಾಲ್ಕು ಸ್ಥಾನ ಜಿಗಿತ ಕಂಡು 15ನೇ ಸ್ಥಾನ ತಲುಪಿದ್ದಾರೆ.
ಇನ್ನು ಐಸಿಸಿ ಏಕದಿನ ಬೌಲರ್‌ಗಳ ಶ್ರೇಯಾಂಕದಲ್ಲಿ ಆಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ 714 ರೇಟಿಂಗ್ ಅಂಕಗಳೊಂದಿಗೆ ನಂ.1 ಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನು ಪಾಕಿಸ್ತಾನದ ಅಬ್ರಾರ್ ಅಹಮದ್ 675 ರೇಟಿಂಗ್ ಅಂಕಗಳೊಂದಿಗೆ ಎರಡನೇ ಸ್ಥಾನ ಉಳಿಸಿಕೊಂಡಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಕೇಶವ್ ಮಹರಾಜ್ 3 ಸ್ಥಾನ ಏರಿಕೆ ಕಂಡು ಮೂರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಕಿವೀಸ್‌ನ ಮಿಚೆಲ್ ಸ್ಯಾಂಟ್ನರ್ ಒಂದು ಸ್ಥಾನ ಜಾರಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಭಾರತದ ಕುಲ್ದೀಪ್ ಯಾದವ್ 4 ಸ್ಥಾನ ಏರಿಕೆ ಕಂಡು ಟಾಪ್-5 ಪಟ್ಟಿಯೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.