T20 World Cup: ದಕ್ಷಿಣ ಆಫ್ರಿಕಾ ಎದುರು ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ, ಒಂದು ಮಹತ್ವದ ಬದಲಾವಣೆ

By Naveen KodaseFirst Published Oct 30, 2022, 4:07 PM IST
Highlights

ಹರಿಣಗಳೆದುರು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿ ರೋಹಿತ್ ಶರ್ಮಾ ಪಡೆ
ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ

ಪರ್ತ್‌(ಅ.30): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 30ನೇ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಭಾರತ ತಂಡವು ಹ್ಯಾಟ್ರಿಕ್ ಗೆಲುವಿನ ಲೆಕ್ಕಾಚಾರದಲ್ಲಿದೆ. ಇನ್ನೊಂದೆಡೆ ತೆಂಬ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು, ಈ ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಲೆಕ್ಕಾಚಾರದಲ್ಲಿದೆ.

ಭಾರತ ಹಾಗೂ ದಕ್ಷಿಣ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಪರ್ತ್ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಭಾರತ ತಂಡದಲ್ಲಿ ಒಂದು ಮಹತ್ವದ ಬದಲಾವಣೆ ಮಾಡಲಾಗಿದ್ದು, ಅಕ್ಷರ್ ಪಟೇಲ್ ಬದಲಿಗೆ ದೀಪಕ್ ಹೂಡಾ ತಂಡ ಕೂಡಿಕೊಂಡಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ತಬ್ರೀಜ್ ಶಮ್ಸಿ ಬದಲಿಗೆ ಲುಂಗಿ ಎಂಗಿಡಿ ತಂಡ ಕೂಡಿಕೊಂಡಿದ್ದಾರೆ.

ಭಾರತ ತಂಡದ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಉತ್ತಮ ಫಾರ್ಮ್‌ನಲ್ಲಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಆದರೆ ಮತ್ತೋರ್ವ ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್ ಮೊದಲೆರಡು ಟಿ20 ಪಂದ್ಯಗಳಲ್ಲಿ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದು, ಎರಡೂ ಪಂದ್ಯದಲ್ಲೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಇದೀಗ ಬಲಿಷ್ಠ ದಕ್ಷಿಣ ಆಫ್ರಿಕಾ ಎದುರು ದೊಡ್ಡ ಮೊತ್ತ ಕಲೆಹಾಕಲು ಎದುರು ನೋಡುತ್ತಿದ್ದಾರೆ.   

T20 World Cup ಅಗ್ರಸ್ಥಾನಕ್ಕಾಗಿ ಭಾರತ-ದಕ್ಷಿಣ ಆಫ್ರಿಕಾ ಫೈಟ್, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಟೀಂ ಇಂಡಿಯಾ

T20 WC 2022. India won the toss and elected to bat. https://t.co/KBtNIk6J16

— BCCI (@BCCI)

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಲಯವನ್ನು ಹೊಂದಿರುವ ವಿರಾಟ್ ಕೊಹ್ಲಿ ಈಗಾಗಲೇ ಚುಟುಕು ವಿಶ್ವಕಪ್ ಟೂರ್ನಿಯಲ್ಲಿ 989 ರನ್ ಬಾರಿಸಿದ್ದು, ಇನ್ನು ಕೇವಲ 28 ರನ್‌ ಬಾರಿಸಿದರೆ, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ ಎನ್ನುವ ವಿಶ್ವದಾಖಲೆಯನ್ನು ನಿರ್ಮಿಸಲಿದ್ದಾರೆ. ಸದ್ಯ ಶ್ರೀಲಂಕಾದ ಮಾಜಿ ನಾಯಕ ಮಹೆಲಾ ಜಯವರ್ಧನೆ 1016 ರನ್‌ ಬಾರಿಸಿ, ನಂ.1 ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ದ ಇನ್ನು ಕೇವಲ 11 ರನ್ ಬಾರಿಸಿದರೆ, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಒಂದು ಸಾವಿರ ರನ್ ಬಾರಿಸಿದ ಎರಡನೇ ಬ್ಯಾಟರ್ ಎನ್ನುವ ಹಿರಿಮೆಗೂ ಪಾತ್ರರಾಗಲಿದ್ದಾರೆ. 

ತಂಡಗಳು ಹೀಗಿವೆ ನೋಡಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಕೆ ಎಲ್ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್, ಹಾರ್ದಿಕ್‌ ಪಾಂಡ್ಯ, ದಿನೇಶ್ ಕಾರ್ತಿಕ್‌, ದೀಪಕ್ ಹೂಡಾ, ರವಿಚಂದ್ರನ್ ಅಶ್ವಿನ್‌, ಭುವನೇಶ್ವರ್‌ ಕುಮಾರ್, ಮೊಹಮ್ಮದ್ ಶಮಿ, ಅಶ್‌ರ್‍ದೀಪ್‌ ಸಿಂಗ್.

ದ.ಆಫ್ರಿಕಾ: ಕ್ವಿಂಟನ್ ಡಿ ಕಾಕ್‌, ತೆಂಬಾ ಬವುಮಾ(ನಾಯಕ), ರಿಲೇ ರುಸೌ, ಏಯ್ಡನ್ ಮಾರ್ಕ್ರಮ್‌, ಡೇವಿಡ್ ಮಿಲ್ಲರ್‌, ಟ್ರಿಸ್ಟನ್ ಸ್ಟಬ್ಸ್‌, ವೇಯ್ನ್ ಪಾರ್ನೆಲ್‌, ಕೇಶವ್ ಮಹಾರಾಜ್‌, ಕಗಿಸೋ ರಬಾಡ, ಏನ್ರಿಚ್ ನೋಕಿಯ, ಲುಂಗಿ ಎನ್‌ಗಿಡಿ.

ಪಂದ್ಯ: ಸಂಜೆ 4.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

click me!