
ದುಬೈ(ನ.11): ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಪ್ರಗತಿಯಿದ್ದಾಗಲೇ ಐಸಿಸಿ ಟಿ20 ರ‍್ಯಾಂಕಿಂಗ್ (ICC T20 Rankings) ಪ್ರಕಟಗೊಂಡಿದ್ದು, ಟೀಂ ಇಂಡಿಯಾ ಟಿ20 ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಎಂಟನೇ ಸ್ಥಾನಕ್ಕೆ ಜಾರಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಬ್ಯಾಟರ್ ಏಯ್ಡನ್ ಮಾರ್ಕ್‌ರಮ್ ಟಿ20 ಶ್ರೇಯಾಂಕದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.
ಬುಧವಾರ(ನ.10)ದಂದು ಬಿಡುಗಡೆಯಾದ ಐಸಿಸಿ ನೂತನ ಟಿ20 ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ 4 ಸ್ಥಾನ ಕುಸಿತ ಕಂಡು 8ನೇ ಸ್ಥಾನಕ್ಕೆ ಜಾರಿದ್ದಾರೆ. ಇನ್ನೊಂದೆಡೆ ಕನ್ನಡಿಗ ಕೆ.ಎಲ್. ರಾಹುಲ್ (KL Rahul) 3 ಸ್ಥಾನ ಏರಿಕೆ ಕಂಡು 5 ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಸೂಪರ್ 12 ಹಂತದ ಕೊನೆಯ ಮೂರು ಪಂದ್ಯಗಳಲ್ಲಿ 3 ಅರ್ಧಶತಕ ಸಿಡಿಸುವ ಮೂಲಕ ರಾಹುಲ್ ಉತ್ತಮ ಪ್ರದರ್ಶನ ತೋರಿದ್ದರು. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ದ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದ ರಾಹುಲ್, ಆಫ್ಘಾನಿಸ್ತಾನ, ಸ್ಕಾಟ್ಲೆಂಡ್ ಹಾಗೂ ನಮೀಬಿಯಾ ಎದುರು ಸ್ಫೋಟಕ ಅರ್ಧಶತಕ ಚಚ್ಚಿದ್ದರು.
T20 World Cup: Aus vs Pak ಪಾಕ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಆಸೀಸ್..?
ಇನ್ನೊಂದೆಡೆ ದಕ್ಷಿಣ ಆಫ್ರಿಕಾ ಬ್ಯಾಟರ್ ಏಯ್ಡನ್ ಮಾರ್ಕ್‌ರಮ್ (Aiden Markram) 3ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಮಾರ್ಕ್‌ರಮ್ 25 ಎಸೆತಗಳಲ್ಲಿ ಅಜೇಯ 52 ರನ್ ಚಚ್ಚುವ ಮೂಲಕ ಆಫ್ರಿಕಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇನ್ನು ದಕ್ಷಿಣ ಆಫ್ರಿಕಾದ ಮತ್ತೋರ್ವ ಬ್ಯಾಟರ್ ರಾಸ್ಸಿ ವ್ಯಾನ್ ಡರ್ ಡುಸೇನ್ ಸ್ಥಿರ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದರು. ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಡುಸೇನ್ ಅಜೇಯ 94 ರನ್ ಸಿಡಿಸಿದ್ದರು. ಇದೀಗ 6 ಸ್ಥಾನ ಜಿಗಿತ ಕಂಡು ಶ್ರೇಯಾಂಕಪಟ್ಟಿಯಲ್ಲಿ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನುಳಿದಂತೆ ಪಾಕಿಸ್ತಾನದ ನಾಯಕ ಬಾಬರ್ ಆಜಂ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಡೇವಿಡ್ ಮಲಾನ್ ಎರಡನೇ ಸ್ಥಾನದಲ್ಲಿ ಮುಂದುವರೆಸಿದ್ದಾರೆ. ಇನ್ನುಳಿದಂತೆ ಮಾರ್ಕ್‌ರಮ್, ಆರೋನ್ ಫಿಂಚ್ (Rassie van der Dussen) ಹಾಗೂ ಕೆ.ಎಲ್. ರಾಹುಲ್ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.
Team India ಮುಖ್ಯ ಕೋಚ್ ರವಿಶಾಸ್ತ್ರಿಗೆ ವಿರಾಟ್ ಕೊಹ್ಲಿ ಭಾವನಾತ್ಮಕ ಅಪ್ಪುಗೆಯ ವಿದಾಯ..!
ಬೌಲಿಂಗ್ ವಿಭಾಗದಲ್ಲಿ ಟಾಪ್ 4 ಪಟ್ಟಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ವನಿಂದು ಹಸರಂಗ, ತಬ್ರೀಜ್ ಸಂಶಿ, ಆದಿಲ್ ರಶೀದ್ ಹಾಗೂ ರಶೀದ್ ಖಾನ್ ಟಾಪ್ 4 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಆಡಂ ಜಂಪಾ ಒಂದು ಸ್ಥಾನ ಮೇಲೇರಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಜಂಪಾ 5 ವಿಕೆಟ್ ಕಬಳಿಸುವ ಮೂಲಕ ಶ್ರೇಯಾಂಕದಲ್ಲಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್ 11 ಸ್ಥಾನ ಏರಿಕೆ ಕಂಡು 8ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಇನ್ನು ಕಿವೀಸ್ ವೇಗಿ 3 ಸ್ಥಾನ ಏರಿಕೆ ಕಂಡು 9ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಟಾಪ್ 10 ಪಟ್ಟಿಯೊಳಗೆ ಭಾರತದ ಯಾವೊಬ್ಬ ಬೌಲರ್‌ಗಳು ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.
ಇನ್ನು ಆಲ್ರೌಂಡ್ ವಿಭಾಗದಲ್ಲಿ ಆಫ್ಘಾನಿಸ್ತಾನ ನಾಯಕ ಮೊಹಮ್ಮದ್ ನಬಿ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ. ಶಕೀಬ್ ಅಲ್ ಹಸನ್, ವನಿಂದು ಹಸರಂಗ, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಜೀಸನ್ ಮಕ್ಸೂದ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.