
ಮೌಂಟ್ ಮ್ಯಾಂಗ್ಯುಯಿನಿ(ಮಾ.04): 12ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (ICC Women's World Cup 2022) ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ಎದುರು ವೆಸ್ಟ್ ಇಂಡೀಸ್ ಮಹಿಳಾ ಕ್ರಿಕೆಟ್ ತಂಡವು 3 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಸ್ಟೆಫಾನೆ ಟೇಲರ್ ನೇತೃತ್ವದ ವೆಸ್ಟ್ ಇಂಡೀಸ್ ಮಹಿಳಾ ಕ್ರಿಕೆಟ್ ತಂಡವು 2022ನೇ ಸಾಲಿನ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ.
ಇಲ್ಲಿನ ಬೇ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ್ದ 260 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ಮಹಿಳಾ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಪಂದ್ಯದ 4ನೇ ಓವರ್‌ನಲ್ಲೇ ಆರಂಭಿಕ ಬ್ಯಾಟರ್ ಸುಜಿ ಬೇಟ್ಸ್ ಕೇವಲ 3 ರನ್ ಬಾರಿಸಿ ರನೌಟ್ ಆದರು. ಇನ್ನು ಅಮೆಲಿಯಾ ಕೆರ್ರ್ ಬ್ಯಾಟಿಂಗ್ ಕೇವಲ 13 ರನ್‌ಗಳಿಗೆ ಸೀಮಿತವಾಯಿತು. ಇದಾದ ಬಳಿಕ ಮೂರನೇ ವಿಕೆಟ್‌ಗೆ ನಾಯಕಿ ಸೋಫಿಯಾ ಡಿವೈನ್ ಹಾಗೂ ಆಮಿ ಸೆಟ್ಟರ್ವೈಟ್ 76 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಜೋಡಿ ಬೇರ್ಪಡುತ್ತಿದ್ದಂತೆಯೇ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡಿತು.
ಕೈಕೊಟ್ಟ ಮಧ್ಯಮ ಕ್ರಮಾಂಕ: ಒಂದು ಹಂತದಲ್ಲಿ 122 ರನ್‌ಗಳವರೆಗೆ ಕೇವಲ 2 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡ್ ತಂಡವು ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ನಾಟಕೀಯ ಕುಸಿತ ಕಂಡಿತು. ತನ್ನ ಖಾತೆಗೆ 40 ರನ್ ಸೇರಿಸುವಷ್ಟರಲ್ಲಿ ಕಿವೀಸ್ ಪಡೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಹೀನಾಯ ಸೋಲಿನತ್ತ ಮುಖ ಮಾಡಿತು. ಆದರೆ ನಾಯಕಿ ಸೋಫಿಯಾ ಡಿವೈನ್ ಮನಮೋಹಕ ಶತಕ ಬಾರಿಸು ಮೂಲಕ ತಂಡಕ್ಕೆ ಆಸರೆಯಾದರು. ಆರಂಭಿಕ ಬ್ಯಾಟರ್ ಸೋಫಿಯಾ 127 ಎಸೆತಗಳನ್ನು ಎದುರಿಸಿ 10 ಬೌಂಡರಿ ಸಹಿತ 108 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೆಟೈ ಮಾರ್ಟಿನ್(44) ಹಾಗೂ ಜೆಸ್ ಕೆರ್ರ್(25) 8ನೇ ವಿಕೆಟ್‌ಗೆ 40 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ಸಮೀಪ ಕೊಂಡೊಯ್ದರು.
ICC Women's World Cup 2022: ಮಹಿಳಾ ಏಕದಿನ ವಿಶ್ವಕಪ್‌ಗೆ ಕ್ಷಣಗಣನೆ
ರೋಚಕತೆ ಹೆಚ್ಚಿಸಿದ ಕೊನೆಯ ಓವರ್: ಕೊನೆಯ ಓವರ್‌ನಲ್ಲಿ ನ್ಯೂಜಿಲೆಂಡ್ ತಂಡವು ಗೆಲ್ಲಲು 6 ಎಸೆತಗಳಲ್ಲಿ ಕೇವಲ 6 ರನ್‌ಗಳ ಅಗತ್ಯವಿತ್ತು. ಈ ವೇಳೆ ದಾಳಿಗಿಳಿದ ದೀಂದ್ರಾ ದೋಟ್ಟಿನ್ ಕೇವಲ 2 ರನ್ ನೀಡಿ ಒಂದು ರನೌಟ್ ಸಹಿತ 3 ವಿಕೆಟ್ ಪಡೆಯುವ ಮೂಲಕ ತಂಡ ಗೆಲುವಿನ ಕೇಕೆ ಹಾಕುವಂತೆ ಮಾಡಿದರು.
ಇದಕ್ಕೂ ಮೊದಲು ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ವೆಸ್ಟ್ ಇಂಡೀಸ್ ತಂಡದ ಆರಂಭ ಕೂಡಾ ಅಷ್ಟೇನೂ ಉತ್ತಮವಾಗಿರಲಿಲ್ಲ. ವಿಂಡೀಸ್ 39 ರನ್‌ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡಿತ್ತು. ಆದರೆ ಆರಂಭಿಕ ಬ್ಯಾಟರ್ ಹೇಲಿ ಮ್ಯಾಥ್ಯೂಸ್ ಆಕರ್ಷಕ ಶತಕ ಬಾರಿಸುವ ಮೂಲಕ ತಂಡಕ್ಕೆ ಆಸರೆಯಾದರು. ಮ್ಯಾಥ್ಯೂಸ್ 128 ಎಸೆತಗಳನ್ನು ಎದುರಿಸಿ 16 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಮನಮೋಹಕ 119 ರನ್ ಚಚ್ಚದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕಿ ಟೇಲರ್(30) ಚೇದನ್ ನೇಷನ್(36) ಉಪಯುಕ್ತ ರನ್ ಕಾಣಿಕೆ ನೀಡುವ ಮೂಲಕ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು.
ಬ್ಯಾಟಿಂಗ್‌ನಲ್ಲಿ ಶತಕ ಚಚ್ಚಿ ಆಸರೆಯಾಗಿದ್ದ ಹೇಲಿ ಮ್ಯಾಥ್ಯೂಸ್, ಬೌಲಿಂಗ್‌ನಲ್ಲೂ ಸಹಾ 2 ವಿಕೆಟ್ ಕಬಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಹೀಗಾಗಿ ಹೇಲಿ ಮ್ಯಾಥ್ಯೂಸ್ ಉದ್ಘಾಟನಾ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.