ICC World Cup 2023: ಕಿಲ್ಲರ್ ಮಿಲ್ಲರ್ ಶತಕ, ಆಸೀಸ್ ಎದುರು ಗೌರವಾನ್ವಿತ ಮೊತ್ತ ಕಲೆಹಾಕಿದ ದಕ್ಷಿಣ ಆಫ್ರಿಕಾ

By Naveen Kodase  |  First Published Nov 16, 2023, 6:23 PM IST

ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು.


ಕೋಲ್ಕತಾ(ನ.16): ಅಗ್ರಕ್ರಮಾಂಕದ ಬ್ಯಾಟಿಂಗ್ ವೈಫಲ್ಯದ ಹೊರತಾಗಿಯೂ ಡೇವಿಡ್ ಮಿಲ್ಲರ್ ಬಾರಿಸಿದ ಕೆಚ್ಚೆದೆಯ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಗೌರವಾನ್ವಿತ ಮೊತ್ತ ಕಲೆಹಾಕಿದೆ. ಆಸೀಸ್ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ ತಂಡವು 212 ರನ್‌ಗಳಿಗೆ ಸರ್ವಪತನ ಕಂಡಿದೆ. ಚೊಚ್ಚಲ ಬಾರಿಗೆ ವಿಶ್ವಕಪ್ ಫೈನಲ್ ಪ್ರವೇಶಿಸಬೇಕಿದ್ದರೇ ಹರಿಣಗಳ ಶಕ್ತಿಮೀರಿ ಹೋರಾಟ ಮಾಡಬೇಕಾದ ಸವಾಲು ಎದುರಾಗಿದೆ.

ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು. ತೆಂಬಾ ಬವುಮಾ ಖಾತೆ ತೆರೆಯುವ ಮುನ್ನವೇ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ಇನ್‌ಫಾರ್ಮ್ ಬ್ಯಾಟರ್ ಕ್ವಿಂಟನ್ ಡಿ ಕಾಕ್(03) ಹಾಗೂ ರಾಸ್ಸಿ ವ್ಯಾನ್ ಡರ್ ಡುಸೇನ್(6) ಕೂಡಾ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಇನ್ನು ಏಯ್ಡನ್ ಮಾರ್ಕ್‌ರಮ್ ಕೇವಲ 10 ರನ್ ಬಾರಿಸಿ ಸ್ಟಾರ್ಕ್‌ಗೆ ಎರಡನೇ ಬಲಿಯಾದರು. ದಕ್ಷಿಣ ಆಫ್ರಿಕಾ ತಂಡವು 24 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ನಾಲ್ವರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದರು.

Latest Videos

undefined

ಕ್ಲಾಸೇನ್-ಮಿಲ್ಲರ್ ಆಸರೆ: ಕೇವಲ 24 ರನ್‌ಗೆ 4 ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ 5ನೇ ವಿಕೆಟ್‌ಗೆ ಹೆನ್ರಿಚ್ ಕ್ಲಾಸೇನ್ ಹಾಗೂ ಡೇವಿಡ್ ಮಿಲ್ಲರ್ ಜೋಡಿ 95 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಜೋಡಿ ಅಪಾಯಕಾರಿಯಾಗುವುದನ್ನ ಮನಗಂಡ ಆಸೀಸ್ ನಾಯಕ ಕಮಿನ್ಸ್‌ ಬೌಲಿಂಗ್‌ ಬದಲಾವಣೆ ಮಾಡಿ ಟ್ರಾವಿಸ್ ಹೆಡ್‌ ಕೈಗೆ ಚೆಂಡನ್ನು ಇಟ್ಟರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ಹೆಡ್‌, ತಾವೆಸೆದ ಮೊದಲ ಓವರ್‌ನಲ್ಲೇ ಕ್ಲಾಸೇನ್ ಹಾಗೂ ಮಾರ್ಕೊ ಯಾನ್ಸೆನ್ ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಕ್ಲಾಸೇನ್‌ 48 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 47 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಕಿಲ್ಲರ್ ಮಿಲ್ಲರ್ ಶತಕ: ಒಂದು ಕಡೆ ಆರಂಭದಲ್ಲೇ ಅಗ್ರಕ್ರಮಾಂಕದ ಬ್ಯಾಟರ್‌ಗಳು ವಿಕೆಟ್ ಕೈಚೆಲ್ಲಿದ್ದರಿಂದ ತಂಡ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತು. ಹೀಗಿದ್ದೂ ಕ್ಲಾಸೇನ್ ಜತೆಗೆ ಮಿಲ್ಲರ್ 95 ರನ್ ಜತೆಯಾಟ ನಿಭಾಯಿಸಿದರು. ಇದಾದ ಬಳಿಕ 7ನೇ ವಿಕೆಟ್‌ಗೆ ಕೋಟ್ಜೀ ಜತೆಗೆ ಅಮೂಲ್ಯ 53 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಜವಾಬ್ದಾರಿಯುತ ಹೋರಾಟ ನಡೆಸಿದ ಡೇವಿಡ್ ಮಿಲ್ಲರ್ 115 ಎಸೆತಗಳನ್ನು ಎದುರಿಸಿ ಆಕರ್ಷಕ ಶತಕ ಸಿಡಿಸಿದರು. ಅಂತಿಮವಾಗಿ ಮಿಲ್ಲರ್ 116 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 101 ರನ್ ಗಳಿಸಿ ಪ್ಯಾಟ್ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು.
 

click me!