
ಲಖನೌ(ಅ.29): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಟೀಂ ಇಂಡಿಯಾ ಹಾಗೂ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಏಕಾನ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಈ ಪಂದ್ಯಕ್ಕೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅಲಭ್ಯರಾಗಿದ್ದರಿಂದ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯಕ್ಕೂ ಕಣಕ್ಕಿಳಿದಿದೆ. ಇನ್ನೊಂದೆಡೆ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ, ಭಾರತ ಎದುರಿನ ಪಂದ್ಯಕ್ಕೂ ಕಣಕ್ಕಿಳಿದಿದ್ದಾರೆ.
ಒಂದು ಕಡೆ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಈ ಬಾರಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿದ್ದು, ಇನ್ನೊಂದು ಗೆಲುವು ತಂಡದ ಸೆಮೀಸ್ ಹಾದಿಯನ್ನು ಬಹುತೇಕ ಖಚಿತಪಡಿಸಲಿದೆ. ಹೀಗಾಗಿ ಈಗಾಗಲೇ ಸೋಲಿನಿಂದ ಕಂಗೆಟ್ಟಿರುವ ಇಂಗ್ಲೆಂಡ್ ಮೇಲೆ ಸವಾರಿ ಮಾಡಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಭಾರತ ಈ ಪಂದ್ಯ ಗೆದ್ದರೆ ಮತ್ತೆ ಅಗ್ರಸ್ಥಾನಕ್ಕೇರಲಿದ್ದು, ಸೆಮೀಸ್ ಹಾದಿ ನಿಚ್ಚಳವಾಗಲಿದೆ.
ಬಾಂಗ್ಲಾ ಎದುರು ನೆದರ್‌ಲೆಂಡ್ಸ್ ಗೆಲ್ಲಿಸಿದ ಉಬರ್ ಈಟ್ಸ್ ಡೆಲಿವರಿ ಬಾಯ್ ಮೀಕೆರೆನ್..!
ಇನ್ನೊಂದೆಡೆ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಸತತ ಸೋಲುಗಳಿಂದ ಕಂಗೆಟ್ಟಿದ್ದು, ಇನ್ನೊಂದು ಸೋಲು ತಂಡವನ್ನು ಅಧಿಕೃತವಾಗಿ ಸೆಮೀಸ್ ರೇಸ್‌ನಿಂದ ಹೊರದಬ್ಬುವಂತೆ ಮಾಡಲಿದೆ. ಹೀಗಾಗಿ ಶತಾಯಗತಾಯ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲ, ತಂಡ ನಿರ್ವಹಣೆಯಲ್ಲೂ ಎಡವುತ್ತಿದ್ದಾರೆ. ಅವರ ಕೆಲ ನಿರ್ಧಾರಗಳು ಭಾರಿ ಟೀಕೆಗೆ ಗುರಿಯಾಗಿವೆ. ವಿಶ್ವಕಪ್ ಬಳಿಕ ಜೋಸ್ ಬಟ್ಲರ್ ತಲೆದಂಡವಾದರೂ ಅಚ್ಚರಿಯಿಲ್ಲ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ ನೀಡಿ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್: ಜಾನಿ ಬೇರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆ್ಯಟ್ಕಿನ್ಸನ್, ರಶೀದ್ ಖಾನ್.
ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.