ಬ್ಯಾಟರ್‌ಗಳ ವೈಪಲ್ಯ: ಕಿವೀಸ್‌ಗೆ ಸಾಧಾರಣ ಗುರಿ ನೀಡಿದ ಲಂಕಾ..!

By Naveen KodaseFirst Published Nov 9, 2023, 6:02 PM IST
Highlights

ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಸೆಮೀಸ್ ಪ್ರವೇಶಿಸುವ ದೃಷ್ಟಿಯಿಂದ ಕಿವೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದ್ದ ಪಂದ್ಯದಲ್ಲಿ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ನ್ಯೂಜಿಲೆಂಡ್ ಬೌಲರ್‌ಗಳು ಯಶಸ್ವಿಯಾದರು. 

ಬೆಂಗಳೂರು(ನ.09): ಕುಸಾಲ್ ಪೆರೆರಾ ಸ್ಪೋಟಕ ಅರ್ಧಶತಕ ಹಾಗೂ ಮಹೀಶ್ ತೀಕ್ಷಣ ಅವರ ಕೆಚ್ಚೆದೆಯ ಬ್ಯಾಟಿಂಗ್ ಹೊರತಾಗಿಯೂ ಅಗ್ರಕ್ರಮಾಂಕದ ಬ್ಯಾಟರ್‌ಗಳ ವೈಪಲ್ಯದಿಂದ ಶ್ರೀಲಂಕಾ ತಂಡವು 171 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ಸಾಧಾರಣ ಗುರಿ ನೀಡಿದೆ.

ಇಲ್ಲಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಸೆಮೀಸ್ ಪ್ರವೇಶಿಸುವ ದೃಷ್ಟಿಯಿಂದ ಕಿವೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದ್ದ ಪಂದ್ಯದಲ್ಲಿ ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡುವಲ್ಲಿ ನ್ಯೂಜಿಲೆಂಡ್ ಬೌಲರ್‌ಗಳು ಯಶಸ್ವಿಯಾದರು. 

ಶ್ರೀಲಂಕಾ ತಂಡವು 32 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂರು ವಿಕೆಟ್ ಕಳೆದುಕೊಂಡಿತು. ಇನ್ನು ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ, ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಕುಸಾಲ್ ಪೆರೆರಾ ಆಕರ್ಷಕ ಅರ್ಧಶತಕ ಸಿಡಿಸಿದರು. ಕುಸಾಲ್ ಪೆರೆರಾ ಕೇವಲ 28 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 51 ರನ್ ಸಿಡಿಸಿದರು. ಅಪಾಯಕಾರಿಯಾಗುತ್ತಿದ್ದ ಪೆರೆರಾ ಬಲಿ ಪಡೆಯುವಲ್ಲಿ ಲಾಕಿ ಫರ್ಗ್ಯೂಸನ್ ಯಶಸ್ವಿಯಾದರು. 

ಇನ್ನು ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಏಂಜಲೋ ಮ್ಯಾಥ್ಯೂಸ್(16) ಹಾಗೂ ಧನಂಜಯ ಡಿ ಸಿಲ್ವಾ(19) ಕೊಂಚ ಪ್ರತಿರೋಧ ತೋರಿದರಾದರೂ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಒಂದು ಹಂತದಲ್ಲಿ 128 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ಆದರೆ ಹತ್ತನೇ ವಿಕೆಟ್‌ಗೆ ಮಹೀಶ್ ತೀಕ್ಷಣ ಹಾಗೂ ದಿಲ್ಷ್ಶಾನ್ ಮದುಶಂಕ ಸಮಯೋಚಿತ 43 ರನ್‌ಗಳ ಜತೆಯಾಟವಾಡುವ ಮೂಲಕ ತಂಡ ಗೌರವಾನ್ವಿತ ಮೊತ್ತ ಕಲೆಹಾಕಲು ನೆರವಾದರು. ಮದುಶಂಕ 48 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 19 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮಹೀಶ್ ತೀಕ್ಷಣ 91 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 38 ರನ್ ಬಾರಿಸಿ ಅಜೇಯರಾಗುಳಿದರು.

ನ್ಯೂಜಿಲೆಂಡ್ ಪರ ಶಿಸ್ತುಬದ್ದ ದಾಳಿ ನಡೆಸಿದ ಟ್ರೆಂಟ್ ಬೌಲ್ಟ್ 3 ವಿಕೆಟ್ ಪಡೆದರೆ, ಲಾಕಿ ಫರ್ಗ್ಯೂಸನ್, ಮಿಚೆಲ್ ಸ್ಯಾಂಟ್ನರ್ ಹಾಗೂ ರಚಿನ್ ರವೀಂದ್ರ ತಲಾ ಒಂದೊಂದು ವಿಕೆಟ್ ಪಡೆದರು. ಇನ್ನು ಟಿಮ್ ಸೌಥಿ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.

click me!