ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಕ್ಯಾಲೆಂಡರ್ ವರ್ಷವೊಂದರಲ್ಲಿ ಸಾವಿರ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. ಲಂಕಾ ಎದುರಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ 34 ರನ್ ಬಾರಿಸುತ್ತಿದ್ದಂತೆಯೇ ಈ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಒಂದು ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ 8ನೇ ಬಾರಿ ಕ್ಯಾಲೆಂಡರ್ ವರ್ಷವೊಂದರಲ್ಲಿ ಸಾವಿರ ರನ್ ಪೂರೈಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ.
ಮುಂಬೈ(ನ.02): ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ಈಗಾಗಲೇ ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಹಲವು ದಾಖಲೆಗಳನ್ನು ತಮ್ಮ ಹೆಸರಿಗೆ ಸೇರ್ಪಡೆ ಮಾಡಿಕೊಂಡಿರುವ ವಿರಾಟ್ ಕೊಹ್ಲಿ, ಇದೀಗ ದಶಕಗಳ ಕಾಲ ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ಮುರಿದು ಹಾಕುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ.
ಹೌದು, ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ ಕ್ಯಾಲೆಂಡರ್ ವರ್ಷವೊಂದರಲ್ಲಿ ಸಾವಿರ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ. ಲಂಕಾ ಎದುರಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ 34 ರನ್ ಬಾರಿಸುತ್ತಿದ್ದಂತೆಯೇ ಈ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಒಂದು ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ 8ನೇ ಬಾರಿ ಕ್ಯಾಲೆಂಡರ್ ವರ್ಷವೊಂದರಲ್ಲಿ ಸಾವಿರ ರನ್ ಪೂರೈಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದ್ದಾರೆ. ವಿರಾಟ್ ಕೊಹ್ಲಿ, 2011, 2012, 2013, 2014, 2017, 2018, 2019 ಹಾಗೂ 2023ರ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ.
ICC World Cup: ಭಾರತ ಎದುರು ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ
ಈ ಮೊದಲು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್, ಏಕದಿನ ಕ್ರಿಕೆಟ್ ಮಾದರಿಯಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಒಟ್ಟು 7 ಬಾರಿ ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದರು. ತೆಂಡುಲ್ಕರ್ 1994, 1996, 1997, 1998, 2000, 2003 ಹಾಗೂ 2007ರಲ್ಲಿ ಸಾವಿರ ರನ್ ಬಾರಿಸಿದ ಸಾಧನೆ ಮಾಡಿದ್ದರು. ಈ ದಾಖಲೆಯನ್ನು ಅಳಿಸಿ ಹಾಕುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ವಿರಾಟ್ ಕೊಹ್ಲಿ 2023ರ ಕ್ಯಾಲೆಂಡರ್ ವರ್ಷದಲ್ಲಿ ಸಾವಿರ ರನ್ ಪೂರೈಸಿದ ಭಾರತದ ಮೂರನೇ ಹಾಗೂ ಒಟ್ಟಾರೆ 4ನೇ ಬ್ಯಾಟರ್ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಈ ಮೊದಲು ಭಾರತದ ಶುಭ್‌ಮನ್ ಗಿಲ್, ನಾಯಕ ರೋಹಿತ್ ಶರ್ಮಾ ಹಾಗೂ ಶ್ರೀಲಂಕಾದ ಪಥುಮ್ ನಿಸ್ಸಾಂಕ ಈ ಕ್ಯಾಲೆಂಡರ್ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಸಾವಿರ ರನ್ ಬಾರಿಸಿದ ಸಾಣೆ ಮಾಡಿದ್ದಾರೆ. 34 ವರ್ಷದ ವಿರಾಟ್ ಕೊಹ್ಲಿ, 2023ರ ಕ್ಯಾಲೆಂಡರ್ ವರ್ಷದಲ್ಲಿ ಕೇವಲ 23 ಪಂದ್ಯಗಳನ್ನಾಡಿ ಸಾವಿರ ರನ್ ಪೂರೈಸುವಲ್ಲಿ ಯಶಸ್ವಿಯಾಗಿದ್ದಾರೆ.
ವೀರೇಂದ್ರ ಸೆಹ್ವಾಗ್ ಅವರ ಅಪರೂಪದ ದಾಖಲೆ ಮುರಿದ ಅಸ್ಸಾಂನ ರಿಯಾನ್ ಪರಾಗ್!
ಇನ್ನು ಭಾರತ-ಲಂಕಾ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಮುರಿಯದ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. 28 ಓವರ್ ಅಂತ್ಯದ ವೇಳೆಗೆ ಭಾರತ ಕೇವಲ 1 ವಿಕೆಟ್ ಕಳೆದುಕೊಂಡು 172 ರನ್ ಬಾರಿಸಿದೆ. ಈ ಜೋಡಿ ಎರಡನೇ ವಿಕೆಟ್‌ಗೆ 168 ರನ್ ಜತೆಯಾಟವಾಡುತ್ತಿದ್ದು, ವಿರಾಟ್ ಕೊಹ್ಲಿ 84 ಹಾಗೂ ಶುಭ್‌ಮನ್ ಗಿಲ್ 75 ರನ್ ಗಳಿಸಿ ಕ್ರೀಸ್‌ನಲ್ಲಿದ್ದಾರೆ.