'ರೋಹಿತ್ ಪಡೆ 2 ಕೆಲಸ ಮಾಡಿದರೆ ಎಲ್ಲಾ ಟೀಕಾಕಾರರ ಬಾಯಿಗೆ ಬೀಗ ಬೀಳಲಿದೆ': ರವಿಶಾಸ್ತ್ರಿ ಹೀಗಂದಿದ್ದೇಕೆ?

By Naveen KodaseFirst Published Mar 25, 2023, 4:50 PM IST
Highlights

2013ರ ಬಳಿಕ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗುತ್ತಿರುವ ಭಾರತ
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪರ ಬ್ಯಾಟ್ ಬೀಸಿದ ರವಿಶಾಸ್ತ್ರಿ
ಟೀಂ ಇಂಡಿಯಾಗೆ ಟೆಸ್ಟ್ ಚಾಂಪಿಯನ್‌ಶಿಪ್, ಏಕದಿನ ವಿಶ್ವಕಪ್ ಗೆಲ್ಲುವ ಸಾಮರ್ಥ್ಯವಿದೆ ಎಂದ ಶಾಸ್ತ್ರಿ

ಬೆಂಗಳೂರು(ಮಾ.25): 2013ರಿಂದೀಚೆಗೆ ಭಾರತ ಕ್ರಿಕೆಟ್‌ ತಂಡವು ಐಸಿಸಿ ಟೂರ್ನಿಗಳಲ್ಲಿ ಕಪ್ ಗೆಲ್ಲಲು ಪದೇ ಪದೇ ವಿಫಲವಾಗುತ್ತಾ ಬಂದಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಮೇಲೆ ನಿರಂತರವಾಗಿ ಟೀಕೆ ವ್ಯಕ್ತವಾಗುತ್ತಾ ಬಂದಿದೆ. ಇದೀಗ ಈ ಕುರಿತಂತೆ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ, ಒಂದು ವೇಳೆ ಭಾರತ ತಂಡವು ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌, ಹಾಗೂ ಭಾರತದಲ್ಲೇ ನಡೆಯಲಿರುವ ಏಕದಿನ ವಿಶ್ವಕಪ್ ಜಯಿಸಿದರೆ, ಎಲ್ಲಾ ಟೀಕಾಕಾರರ ಬಾಯಿಗೆ ಬೀಗ ಬೀಳಲಿದೆ ಎಂದು ಹೇಳಿದ್ದಾರೆ.

ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ, 2013ರಲ್ಲಿ ಕೊನೆಯ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೊಫಿ ಜಯಿಸಿತ್ತು. ಇದಾದ ಬಳಿಕ ಟೀಂ ಇಂಡಿಯಾ, ಪದೇ ಪದೇ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗುತ್ತಿದೆ. 2014ರಲ್ಲಿ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ಪ್ರವೇಶಿಸಿತ್ತು. ಆದರೆ ಪ್ರಶಸ್ತಿ ಗೆಲ್ಲಲು ವಿಫಲವಾಗಿತ್ತು. ಇನ್ನು 2015ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಮುಗ್ಗರಿಸಿತ್ತು. ಇನ್ನು 2016ರಲ್ಲಿ ನಡೆದ ಟಿ20 ವಿಶ್ವಕಪ್ ಸೆಮೀಸ್‌ನಲ್ಲಿ ಟೀಂ ಇಂಡಿಯಾ, ವೆಸ್ಟ್ ಇಂಡೀಸ್‌ಗೆ ಶರಣಾಗಿತ್ತು. ಇದಾದ ಬಳಿಕ 2017ರಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಫೈನಲ್‌ನಲ್ಲಿ ಪಾಕಿಸ್ತಾನ ಎದುರು ಆಘಾತಕಾರಿ ಸೋಲು ಅನುಭವಿಸಿತ್ತು. ಇದಾದ ನಂತರ ಟೀಂ ಇಂಡಿಯಾ, 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಸೆಮೀಸ್‌ನಲ್ಲಿ ಕಿವೀಸ್ ಎದುರು ಸೋಲು ಅನುಭವಿಸಿತ್ತು. ಇನ್ನು 2021ರಲ್ಲಿ ನಡೆದ ಚೊಚ್ಚಲ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಫೈನಲ್‌ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು 8 ವಿಕೆಟ್‌ಗಳ ಸೋಲು ಅನುಭವಿಸುವ ಮೂಲಕ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಇನ್ನು, ಕಳೆದ ವರ್ಷ ಮುಕ್ತಾಯವಾದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಟೀಂ ಇಂಡಿಯಾ ಸೆಮೀಸ್‌ನಲ್ಲೇ ಆಘಾತಕಾರಿ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿತ್ತು. 

ಈಗಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಸಾಕಷ್ಟು ಬಲಿಷ್ಠವಾಗಿದ್ದು, ಮುಂಬರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹಾಗೂ ಐಸಿಸಿ ಏಕದಿನ ವಿಶ್ವಕಪ್ ಗೆಲ್ಲುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಇಂಗ್ಲೆಂಡ್‌ನಲ್ಲಿ ನಡೆಯಲಿದ್ದು, ಪ್ರಶಸ್ತಿಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಡಲಿವೆ. ಇನ್ನು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ.

IPL ದುಬಾರಿ ಆಟಗಾರ ಸ್ಯಾಮ್ ಕರ್ರನ್ Love Story ತುಂಬಾ ಇಂಟ್ರೆಸ್ಟಿಂಗ್, ಗರ್ಲ್‌ಫ್ರೆಂಡ್‌ ಯಾರು ಗೊತ್ತಾ?

"ಈ ಭಾರತ ಕ್ರಿಕೆಟ್‌ ತಂಡವು ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾಗೂ ಐಸಿಸಿ ಏಕದಿನ ವಿಶ್ವಕಪ್ ಟ್ರೋಫಿ ಗೆಲ್ಲಲಿದೆ. ಒಂದು ವೇಳೆ ಹೀಗಾಯ್ತು ಅಂದ್ರೆ, ಟೀಕಾಕಾರರ ಬಾಯಿಗೆ ಬೀಗ ಬೀಳಲಿದೆ ಎಂದು ಸ್ಪೋರ್ಟ್ಸ್‌ ಯಾರ್ರಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಭಾರತ ಕ್ರಿಕೆಟ್ ತಂಡವು ಸದ್ಯ ಗಾಯದ ಸಮಸ್ಯೆಯಿಂದ ಬಳಲುತ್ತಿದೆ. ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ, ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದ ತಾರಾ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡಾ ಗಾಯದ ಸಮಸ್ಯೆಯಿಂದಾಗಿ ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಇನ್ನು ಕಳೆದ ವರ್ಷದ ಕೊನೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸದ್ಯ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

click me!