
ಇಂದೋರ್(ಸೆ.24): ಈ ವರ್ಷ ರೆಡ್ ಹಾಟ್ ಫಾರ್ಮ್‌ನಲ್ಲಿರುವ ಪ್ರತಿಭಾನ್ವಿತ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಮತ್ತೊಂದು ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇನ್ನು ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ತಂಡಕ್ಕೆ ಕಮ್‌ಬ್ಯಾಕ್ ಮಾಡಿರುವ ಶ್ರೇಯಸ್ ಅಯ್ಯರ್ ಭರ್ಜರಿ ಶತಕ ಸಿಡಿಸುವ ಮೂಲಕ ತಾವು ಮುಂಬರುವ ಏಕದಿನ ವಿಶ್ವಕಪ್‌ಗೆ ರೆಡಿ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಈ ಇಬ್ಬರ ದ್ವಿಶತಕದ ಜತೆಯಾಟದ ನೆರವಿನಿಂದ ಟೀಂ ಇಂಡಿಯಾ, ಇದೀಗ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.
ಇಲ್ಲಿನ ಹೋಳ್ಕರು ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಆರಂಭದಲ್ಲೇ ಋತುರಾಜ್ ಗಾಯಕ್ವಾಡ್ ವಿಕೆಟ್ ಕಳೆದುಕೊಂಡಿತು. ಗಾಯಕ್ವಾಡ್ ಕೇವಲ 7 ರನ್ ಗಳಿಸಿ ಜೋಶ್ ಹೇಜಲ್‌ವುಡ್‌ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಟೀಂ ಇಂಡಿಯಾ ಕೇವಲ 16 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು.
ಗಿಲ್-ಅಯ್ಯರ್ ಶತಕದ ಜುಗಲ್ಬಂದಿ: ಆರಂಭದಲ್ಲೇ ಗಾಯಕ್ವಾಡ್ ವಿಕೆಟ್ ಕಳೆದುಕೊಂಡ ಬೆನ್ನಲ್ಲೇ ಎರಡನೇ ವಿಕೆಟ್‌ಗೆ ಶ್ರೇಯಸ್ ಅಯ್ಯರ್ ಹಾಗೂ ಶುಭ್‌ಮನ್ ಗಿಲ್ ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಿಂದಲೇ ಈ ಜೋಡಿ ಕಾಂಗರೂ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಆಸೀಸ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದ್ದ ಶ್ರೇಯಸ್ ಅಯ್ಯರ್ ಮೇಲೆ ಎರಡನೇ ಪಂದ್ಯದಲ್ಲಿ ದೊಡ್ಡ ಮೊತ್ತ ಪೇರಿಸಬೇಕಾದ ಅನಿವಾರ್ಯತೆ ಅವರ ಮುಂದಿತ್ತು. ಕ್ಲಾಸ್ ಇನಿಂಗ್ಸ್ ಆಡಿದ ಶ್ರೇಯಸ್ ಅಯ್ಯರ್ ಕೇವಲ 86 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾದರು. ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್ ವೃತ್ತಿಜೀವನದ ಮೂರನೇ ಶತಕ ಸಿಡಿಸಿ ಸಂಭ್ರಮಿಸಿದರು. ಅಂತಿಮವಾಗಿ ಶ್ರೇಯಸ್ ಅಯ್ಯರ್ 90 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 105 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಇನ್ನೊಂದೆಡೆ ಶ್ರೇಯಸ್ ಅಯ್ಯರ್‌ಗೆ ಹೆಗಲಿಗೆ ಹೆಗಲು ಕೊಟ್ಟವರಂತೆ ಮತ್ತೊಂದು ತುದಿಯಲ್ಲಿ ಆಕರ್ಷಕ ಬ್ಯಾಟಿಂಗ್ ನಡೆಸಿದ ಶುಭ್‌ಮನ್ ಗಿಲ್ ತಮ್ಮ ಖಾತೆಗೆ ಮತ್ತೊಂದು ಶತಕ ಸೇರಿಸಿಕೊಂಡರು. ಆರಂಭದಲ್ಲಿ ಕೊಂಚ ರಕ್ಷಣಾತ್ಮಕ ಆಟಕ್ಕೆ ಮೊರೆಹೋದ ಶುಭ್‌ಮನ್ ಗಿಲ್, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸಿದರು. ಅಂತಿಮವಾಗಿ ಗಿಲ್ 92 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಆಕರ್ಷಕ ಶತಕ ಪೂರೈಸುವಲ್ಲಿ ಯಶಸ್ವಿಯಾದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.