Ind vs Aus: ಗುರು ರಾಹುಲ್ ದ್ರಾವಿಡ್ ದಾಖಲೆ ಮುರಿದ ವಿರಾಟ್ ಕೊಹ್ಲಿ..!

By Naveen KodaseFirst Published Sep 26, 2022, 11:47 AM IST
Highlights

ರಾಹುಲ್ ದ್ರಾವಿಡ್ ರನ್ ದಾಖಲೆ ಮುರಿದ ಮಾಜಿ ನಾಯಕ ವಿರಾಟ್ ಕೊಹ್ಲಿ
ಭಾರತ ಪರ ಗರಿಷ್ಠ ಅಂತಾರಾಷ್ಟ್ರೀಯ ರನ್ ಬಾರಿಸಿದ ಎರಡನೇ ಆಟಗಾರ ಎನ್ನುವ ಕೀರ್ತಿ ದ್ರಾವಿಡ್ ಪಾಲು
ಗರಿಷ್ಠ ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡುಲ್ಕರ್‌ಗೆ ಅಗ್ರಸ್ಥಾನ

ಹೈದರಾಬಾದ್‌(ಸೆ.26): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. ಕ್ರಿಕೆಟ್‌ ಅಭಿಮಾನಿಗಳನ್ನು ಕಡೆಯ ಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯದಲ್ಲಿ ಕೊನೆಗೂ ಗೆಲುವಿನ ನಗೆ ಬೀರುವಲ್ಲಿ ಭಾರತ ತಂಡವು ಯಶಸ್ವಿಯಾಗಿದೆ. ಇನ್ನು ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಟೀಂ ಇಂಡಿಯಾ ಹೆಡ್‌ ಕೋಚ್ ಆಗಿರುವ ರಾಹುಲ್ ದ್ರಾವಿಡ್‌ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಹೌದು, ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ಎದುರಿನ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ 63 ರನ್ ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದರ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಭಾರತದ ಆಟಗಾರರ ಪಟ್ಟಿಯಲ್ಲಿ ರಾಹುಲ್‌ ದ್ರಾವಿಡ್‌ ಅವರನ್ನು ಹಿಂದಿಕ್ಕಿ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಆಸ್ಟ್ರೇಲಿಯಾ ಎದುರಿನ ಮೂರನೇ ಟಿ20 ಪಂದ್ಯ ಆರಂಭಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಭಾರತದ ಬ್ಯಾಟರ್‌ಗಳ ಪಟ್ಟಿಯಲ್ಲಿ 'ದ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಎರಡನೇ ಸ್ಥಾನದಲ್ಲಿದ್ದರು. ಆದರೆ ವಿರಾಟ್ ಕೊಹ್ಲಿ, ಮೂರನೇ ಟಿ20 ಪಂದ್ಯದಲ್ಲಿ ಕೇವಲ 48 ಎಸೆತಗಳಲ್ಲಿ 63 ರನ್ ಸಿಡಿಸುವುದರ ಮೂಲಕ ರಾಹುಲ್ ದ್ರಾವಿಡ್‌ ಅವರನ್ನು ಹಿಂದಿಕ್ಕಿ ಕಿಂಗ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಸದ್ಯ ವಿರಾಟ್ ಕೊಹ್ಲಿ 24,078 ರನ್‌ ಬಾರಿಸಿದ್ದು, ರಾಹುಲ್ ದ್ರಾವಿಡ್ ಅವರಿಗಿಂತ 14 ರನ್ ಮುಂದಿದ್ದಾರೆ. ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ದಾಖಲೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಹೆಸರಿನಲ್ಲಿದೆ. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ 34,375 ರನ್ ಬಾರಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಭಾರತದ ಹಾಗೂ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

IND vs AUS ಅಂತಿಮ ಪಂದ್ಯದಲ್ಲೂ ಆಸ್ಟ್ರೇಲಿಯಾ ಶಾಕ್, ಟಿ20 ಸರಣಿ ವಶಪಡಿಸಿದ ಭಾರತ

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಈಗಲೂ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿಗಿಂತ ಮುಂದಿದ್ದಾರೆ. ರಾಹುಲ್ ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24,208 ರನ್‌ ಬಾರಿಸಿದ್ದಾರೆ. ಇದರಲ್ಲಿ ಏಷ್ಯಾ ಇಲೆವನ್ ಹಾಗೂ ಐಸಿಸಿ ತಂಡಗಳ ಪರ ಆಡಿದ ರನ್‌ಗಳು ಸೇರಿವೆ. ಆದರೆ ವಿರಾಟ್ ಕೊಹ್ಲಿ ಇದುವರೆಗೂ ಯಾವುದೇ ಏಷ್ಯಾ ಇಲೆವನ್ ಅಥವಾ ಐಸಿಸಿ ಇಲೆವನ್ ತಂಡಗಳ ಪರ ಕಣಕ್ಕಿಳಿದು ಪಂದ್ಯಗಳನ್ನು ಆಡಿಲ್ಲ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ ಗರಿಷ್ಠ ರನ್ ಬಾರಿಸಿದ ವಿವರ ಹೀಗಿದೆ ನೋಡಿ

1. ಸಚಿನ್ ತೆಂಡುಲ್ಕರ್ - 34,357 ರನ್‌ -664 ಪಂದ್ಯಗಳು
2. ವಿರಾಟ್ ಕೊಹ್ಲಿ - 24,078 ರನ್‌ - 471 ಪಂದ್ಯಗಳು
3. ರಾಹುಲ್ ದ್ರಾವಿಡ್ - 24,064 ರನ್ - 404 ಪಂದ್ಯಗಳು
4. ಸೌರವ್ ಗಂಗೂಲಿ - 18,433 ರನ್ - 421 ಪಂದ್ಯಗಳು
5. ಎಂ ಎಸ್ ಧೋನಿ - 17,092 ರನ್ - 535 ಪಂದ್ಯಗಳು

click me!