
ಛಟ್ಟೋಗ್ರಾಮ(ಡಿ.10): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ ದಿಟ್ಟ ಆರಂಭವನ್ನು ಪಡೆದಿದೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂಚ ಬಾಚಿಕೊಂಡಿರುವ ರಾಂಚಿ ಮೂಲದ ಎಡಗೈ ಬ್ಯಾಟರ್ ಇಶಾನ್ ಕಿಶನ್, ಆಕರ್ಷಕ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ. 85 ಎಸೆತಗಳನ್ನು ಎದುರಿಸಿದ ಇಶಾಣ್ ಕಿಶನ್ ವೃತ್ತಿಜೀವನದ ಮೊದಲ ಏಕದಿನ ಶತಕ ಸಿಡಿಸಿ ಅಬ್ಬರಿಸಿದ್ದಾರೆ. 24 ಓವರ್ ಅಂತ್ಯದ ವೇಳೆಗೆ ಟೀಂ ಇಂಡಿಯಾ ಕೇವಲ ಒಂದು ವಿಕೆಟ್ ಕಳೆದುಕೊಂಡು 162 ರನ್ ಬಾರಿಸಿದ್ದು, ಬೃಹತ್ ಮೊತ್ತದತ್ತ ದಾಪುಗಾಲು ಇಡುತ್ತಿದೆ.
ಇಲ್ಲಿನ ಝಹೂರ್ ಅಹಮದ್ ಚೌಧರಿ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ಮತ್ತೊಮ್ಮೆ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್ ಶಿಖರ್ ಧವನ್ ಮೂರನೇ ಪಂದ್ಯದಲ್ಲೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ಶಿಖರ್ ಧವನ್ 8 ಎಸೆತಗಳನ್ನು ಎದುರಿಸಿ ಕೇವಲ 3 ರನ್ ರನ್ ಗಳಿಸಿ ಮೆಹದಿ ಹಸನ್ ಬೌಲಿಂಗ್‌ನಲ್ಲಿ ಎಲ್‌ಬಿ ಬಲೆಗೆ ಬಿದ್ದು ಪೆವಿಲಿಯನ್ ಸೇರಿದರು. ಟೀಂ ಇಂಡಿಯಾ 15 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಯಿತು.
ಇಶಾನ್ ಕಿಶನ್ ಆಕರ್ಷಕ ಶತಕ: ಹೌದು, ಮೊದಲೆರಡು ಏಕದಿನ ಪಂದ್ಯಗಳಲ್ಲಿ ಬೆಂಚ್ ಕಾಯಿಸಿದ್ದ ರಾಂಚಿ ಮೂಲದ ಎಡಗೈ ಬ್ಯಾಟರ್ ಇಶಾನ್ ಕಿಶನ್, ಮೂರನೇ ಏಕದಿನ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು. ಆರಂಭದಲ್ಲಿ ವಿರಾಟ್ ಕೊಹ್ಲಿ ಜತೆ ಎಚ್ಚರಿಕೆಯ ಬ್ಯಾಟಿಂಗ್ ನಿಭಾಯಿಸಿದ ಇಶಾನ್ ಕಿಶನ್, ಪಿಚ್‌ಗೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸಲಾರಂಭಿಸಿದರು. ಮೊದಲ 49 ಎಸೆತಗಳನ್ನು ಎದುರಿಸಿ ಇಶಾನ್ ಕಿಶನ್ ಅರ್ಧಶತಕ ಪೂರೈಸಿದರು. ಅರ್ಧಶತಕ ಪೂರೈಸಿದ ಇಶಾನ್ ಕಿಶನ್ ಆ ಬಳಿಕ ಮತ್ತಷ್ಟು ಬ್ಯಾಟಿಂಗ್ ನಡೆಸುವ ಮೂಲಕ ರನ್ ವೇಗಕ್ಕೆ ಚುರುಕು ಮುಟ್ಟಿಸಿದರು. ಇಶಾನ್ ಕಿಶನ್ ಕೇವಲ 85 ಎಸೆತಗಳನ್ನು ಎದುರಿಸಿ 14 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ವೃತ್ತಿಜೀವನದ ಮೊದಲ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ.
ಕೊಹ್ಲಿ-ಇಶಾನ್ ಜುಗಲ್ಬಂದಿ: ಕೇವಲ 15 ರನ್‌ಗಳಿಗೆ ಒಂದು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಎರಡನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಇಶಾನ್ ಕಿಶನ್ ಮುರಿಯದ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಎರಡನೇ ವಿಕೆಟ್‌ಗೆ ಈ ಜೋಡಿ 119 ಎಸೆತಗಳಲ್ಲಿ ಮುರಿಯದ 147 ರನ್‌ಗಳ ಜತೆಯಾಟ ನಿಭಾಯಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.