
ನವದೆಹಲಿ(ಡಿ.01): ಟೀಂ ಇಂಡಿಯಾ ಕ್ರಿಕೆಟಿಗರಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಹಾಗೂ ವೇಗಿ ಉಮೇಶ್ ಯಾದವ್, ಗುರುವಾರವಾದ ಇಂದು(01), ದೀರ್ಘಕಾಲಿಕ ದ್ವಿಪಕ್ಷೀಯ ಸರಣಿಯನ್ನಾಡಲು ಬಾಂಗ್ಲಾದೇಶದತ್ತ ಪ್ರಯಾಣ ಬೆಳೆಸಿದ್ದಾರೆ. ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ವಿರಾಟ್ ಕೊಹ್ಲಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ಕೊಹ್ಲಿಗೆ ಪೂಜಾರ ಹಾಗೂ ಉಮೇಶ್ ಯಾದವ್ ಸಾಥ್ ನೀಡಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಜರುಗಿದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಹಲವು ಹಿರಿಯ ಕ್ರಿಕೆಟಿಗರು ವಿಶ್ರಾಂತಿ ಬಯಸಿ ತವರಿಗೆ ವಾಪಾಸಾದರೇ, ಯುವ ಆಟಗಾರರನ್ನೊಳಗೊಂಡ ಭಾರತ ತಂಡವು 3 ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯನ್ನಾಡಲು ನ್ಯೂಜಿಲೆಂಡ್ ಪ್ರವಾಸವನ್ನು ಕೈಗೊಂಡಿತ್ತು. ಇದೀಗ ಬಾಂಗ್ಲಾದೇಶ ಎದುರಿನ ಸರಣಿಗೆ ಹಿರಿಯ ಆಟಗಾರರು ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ನ್ಯೂಜಿಲೆಂಡ್ ಪ್ರವಾಸದಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಮೊಹಮ್ಮದ್ ಶಮಿ ಹಾಗೂ ಅಕ್ಷರ್ ಪಟೇಲ್ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ದ ಆಡಲಿರುವ 5 ಪಂದ್ಯಗಳಿಗೆ ನ್ಯೂಜಿಲೆಂಡ್ ಪ್ರವಾಸದಲ್ಲಿದ್ದ ಶಿಖರ್ ಧವನ್(ಏಕದಿನ ಸರಣಿಗೆ), ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಹಾಗೂ ರಿಷಭ್ ಪಂತ್ ಬಾಂಗ್ಲಾ ಎದುರಿನ ಸರಣಿಗೆ ಭಾರತ ತಂಡ ಕೂಡಿಕೊಳ್ಳಲಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪರ 6 ಪಂದ್ಯಗಳನ್ನಾಡಿದ್ದ ವಿರಾಟ್ ಕೊಹ್ಲಿ 296 ರನ್ ಸಿಡಿಸುವ ಮೂಲಕ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು. ಟಿ20 ವಿಶ್ವಕಪ್ ಟೂರ್ನಿ ಮುಗಿದ ಬಳಿಕ ತವರಿಗೆ ವಾಪಾಸ್ಸಾಗಿದ್ದ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಹಾಗೂ ಮಗಳು ವಾಮಿಕಾ ಜತೆ ಕೆಲ ಕ್ವಾಲಿಟಿ ಸಮಯವನ್ನು ಕಳೆದಿದ್ದರು. ವಿರಾಟ್ ಕೊಹ್ಲಿ ದಂಪತಿ ಕೆಲ ದಿನಗಳ ಹಿಂದಷ್ಟೇ ಉತ್ತರಖಂಡ್‌ಗೆ ಭೇಟಿ ನೀಡಿ ಅಲ್ಲಿಯ ಸ್ಥಳೀಯರನ್ನು ಭೇಟಿಯಾಗಿದ್ದು, ಕೆಲ ಫೋಟೋಗಳು ವೈರಲ್ ಆಗಿದ್ದವು.
ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಢಾಕಾದ ಮೀರ್‌ಪುರ್ ಕ್ರೀಡಾಂಗಣದಲ್ಲಿ ಡಿಸೆಂಬರ್ 4, ಡಿಸೆಂಬರ್ 7, ಡಿಸೆಂಬರ್ 10ರಂದು ಏಕದಿನ ಪಂದ್ಯಗಳು ನಡೆಯಲಿದ್ದು, ಡಿಸೆಂಬರ್ 14ರಿಂದ 18ರ ವರೆಗೂ ಛಟ್ಟೋಗ್ರಾಮ್‌ನಲ್ಲಿ ಮೊದಲ ಟೆಸ್ಟ್, ಡಿ.22ರಿಂದ 26ರ ವರೆಗೂ ಢಾಕಾದಲ್ಲಿ 2ನೇ ಟೆಸ್ಟ್ ನಡೆಯಲಿದೆ. ಟೆಸ್ಟ್ ಸರಣಿಯು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವ್ಯಾಪ್ತಿಗೆ ಒಳಪಡಲಿದೆ.
ಬಾಂಗ್ಲಾದೇಶ ಎದುರಿನ ಏಕದಿನ ಸರಣಿಗೆ ಭಾರತದ ಪರಿಷ್ಕೃತ ತಂಡ ಹೀಗಿದೆ ನೋಡಿ
ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್, ಶಹಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಕುಲ್ದೀಪ್ ಸೆನ್.
ಬಾಂಗ್ಲಾದೇಶ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ರವಿಚಂದ್ರನ್ ಅಶ್ವಿನ್, ಕೆ ಎಸ್ ಭರತ್(ವಿಕೆಟ್ ಕೀಪರ್), ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ವಿರಾಟ್ ಕೊಹ್ಲಿ, ರಿಷಭ್ ಪಂತ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಚೇತೇಶ್ವರ್ ಪೂಜಾರ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮೇಶ್ ಯಾದವ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.