
ಲಂಡನ್(ಆ.17): ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 151 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ 5 ಪಂದ್ಯಗಳ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಗೆಲುವನ್ನು ಟೀಂ ಇಂಡಿಯಾ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಸುಂದರ ಪದಗಳಲ್ಲಿ ಬಣ್ಣಿಸಿದ್ದಾರೆ.
ಹೌದು, ಆತಿಥೇಯ ಇಂಗ್ಲೆಂಡ್ ತಂಡಕ್ಕೆ ಲಾರ್ಡ್ಸ್ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಂ ಇಂಡಿಯಾ 272 ರನ್‌ಗಳ ಕಠಿಣ ಗುರಿ ನೀಡಿತ್ತು. ಈ ಸವಾಲಿನ ಗುರಿ ಬೆನ್ನತ್ತಿದ ಜೋ ರೂಟ್ ನೇತೃತ್ವದ ಇಂಗ್ಲೆಂಡ್ ತಂಡವು 51.5 ಓವರ್‌ಗಳಲ್ಲಿ 120 ರನ್‌ಗಳಿಗೆ ಸರ್ವಪತನ ಕಾಣುವ ಮೂಲಕ ಆಘಾತಕಾರಿ ಸೋಲು ಕಂಡಿತು. ಮೊದಲ ಇನಿಂಗ್ಸ್‌ನಲ್ಲಿ ಅಜೇಯ ಶತಕ ಬಾರಿಸಿದ್ದ ಇಂಗ್ಲೆಂಡ್ ನಾಯಕ ಜೋ ರೂಟ್, ಎರಡನೇ ಇನಿಂಗ್ಸ್‌ನಲ್ಲಿ 33 ರನ್ ಬಾರಿಸಿದರು. ಇದು ಎರಡನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರ ದಾಖಲಾದ ವೈಯುಕ್ತಿಕ ಗರಿಷ್ಠ ಸ್ಕೋರ್ ಎನಿಸಿತು. ಕೊನೆಯಲ್ಲಿ ವೇಗಿ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸುವ ಮೂಲಕ ಭಾರತ ಸ್ಮರಣೀಯ ಗೆಲುವು ದಾಖಲಿಸಲು ನೆರವಾದರು.
ಆಗಸ್ಟ್ 15ರಂದು ಟೀಂ ಇಂಡಿಯಾ ಗೆಲುವು ಸಾಧಿಸಿದರೆ ಸೆಲ್ಯೂಟ್ ಮಾಡ್ತೇನೆ : ರೋಹಿತ್ ಶರ್ಮಾ
ಲಾರ್ಡ್ಸ್ ಟೆಸ್ಟ್ ಪಂದ್ಯ ಆರಂಭವಾಗಿ ಎರಡನೇ ದಿನ ಪತ್ರಕರ್ತರೊಬ್ಬರು, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದೇ ಟೆಸ್ಟ್ ಪಂದ್ಯವನ್ನು ಗೆಲ್ಲಲು ಪ್ರಯತ್ನಿಸಲಿದೆಯೇ ಎಂದು ರೋಹಿತ್ ಶರ್ಮಾ ಅವರನ್ನು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ಹಿಟ್‌ಮ್ಯಾನ್, ಸಲ್ಯೂಟ್ ಮಾಡುತ್ತೇನೆ ಸರ್, ಇಂಗ್ಲೆಂಡ್ ಎದುರು ಆಗಸ್ಟ್ 15ರಂದೇ ಗೆಲುವು ಸಾಧಿಸಿದರೆ ಅದು ಸ್ಮರಣೀಯವಾಗಿ ಉಳಿಯಲಿದೆ ಎಂದು ಉತ್ತರಿಸಿದ್ದರು.
ಭಾರತ ಲಾರ್ಡ್ಸ್ ಟೆಸ್ಟ್ ಪಂದ್ಯದ ಕೊನೆಯ ದಿನ ಅಂದರೆ ಆಗಸ್ಟ್ 16ರಂದು ಇಂಗ್ಲೆಂಡ್ ಎದುರು ಗೆಲುವು ದಾಖಲಿಸುತ್ತಿದ್ದಂತೆಯೇ ಅದೇ ವಿಡಿಯೋ ತುಣುಕೊಂದನ್ನು ಹಂಚಿಕೊಂಡಿದ್ದು, ತಡವಾದರೂ, ಒಳ್ಳೆಯ ಫಲಿತಾಂಶವೇ ಹೊರಬಿತ್ತು. ಲಾರ್ಡ್ಸ್‌ನಲ್ಲಿದು ಅದ್ಭುತ ಗೆಲುವು. ತಂಡದ ಸಾಂಘಿಕ ಪ್ರದರ್ಶನಕ್ಕೆ ಒಲಿದ ಗೆಲುವಿದು. ಇದೊಂದು ಅವಿಸ್ಮರಣೀಯ ಫಲಿತಾಂಶ ಎಂದು ರೋಹಿತ್ ಬಣ್ಣಿಸಿದ್ದಾರೆ.
ಲಾರ್ಡ್ಸ್ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ 145 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 83 ರನ್ ಬಾರಿಸಿದ್ದರು. ವಿದೇಶಿ ನೆಲದಲ್ಲಿ ಚೊಚ್ಚಲ ಟೆಸ್ಟ್ ಶತಕ ಬಾರಿಸುವ ರೋಹಿತ್ ಶರ್ಮಾ ಕನಸು ಮತ್ತೊಮ್ಮೆ ಭಗ್ನವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.