
ಬರ್ಮಿಂಗ್‌ಹ್ಯಾಮ್(ಜು.09): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇದೀಗ ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗಿದೆ. ಎರಡನೇ ಟಿ20 ಪಂದ್ಯಕ್ಕೆ ಮಾಜಿ ನಾಯಕ ವಿರಾಟ್ ಕೊಹ್ಲಿ, ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆಗೆ ಲಭ್ಯರಿದ್ದಾರೆ. ಹೀಗಾಗಿ ಭಾರತ ಮತ್ತಷ್ಟು ಬಲಿಷ್ಠವಾಗಿದೆ.
ಈ ನಾಲ್ವರು ತಾರಾ ಆಟಗಾರರ ಅನುಪಸ್ಥಿತಿಯಲ್ಲಿಯೇ ಟೀಂ ಇಂಡಿಯಾ (Team India), ಬಲಾಢ್ಯ ಇಂಗ್ಲೆಂಡ್ ಎದುರು ಭರ್ಜರಿ ಗೆಲುವು ದಾಖಲಿಸಿದ್ದು, ಇದೀಗ ಕೊಹ್ಲಿ, ಬುಮ್ರಾ, ಜಡೇಜಾ ಹಾಗೂ ಪಂತ್ ಒಂದು ವೇಳೆ ಆಡುವ ಹನ್ನೊಂದರ ಬಳಗ ಕೂಡಿಕೊಂಡರೇ ಯಾರನ್ನು ತಂಡದಿಂದ ಕೈಬಿಡಲಾಗುತ್ತದೆ ಎನ್ನುವ ಕುತೂಹಲ ಜೋರಾಗಿದೆ. ಸೂಪರ್‌ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗಾಗಿ ಇಶಾನ್ ಕಿಶಾನ್ (Ishan Kishan) ಸ್ಥಾನ ಬಿಟ್ಟುಕೊಡುವ ಸಾಧ್ಯತೆಯಿದೆ. ಇನ್ನು ಕಳೆದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಆರ್ಶದೀಪ್ ಅವರ ಬದಲಿಗೆ ಜಸ್ಪ್ರೀತ್ ಬುಮ್ರಾ ಆಡುವ ಹನ್ನೊಂದರ ಬಳಗ ಕೂಡಿಕೊಳ್ಳುವ ಸಾಧ್ಯತೆ
ಆದರೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಜಹೀರ್ ಖಾನ್ (Zaheer Khan), ಇಂಗ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ (Indian Cricket Team) ಆಯ್ಕೆಯ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಂಗ್ಲೆಂಡ್ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಭಾರತ ತಂಡದ ಆಯ್ಕೆ ಹೇಗಿರಲಿದೆ ಎನ್ನುವುದನ್ನು ನೀವು ಕಾದು ನೋಡಬೇಕಿದೆ. ಯಾಕೆಂದರೆ ಕಳೆದ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿರಲಿಲ್ಲ. ಹೀಗಾಗಿ ಈ ಬಾರಿ ಹೆಚ್ಚೆಂದರೇ ಒಂದು ಬದಲಾವಣೆಯನ್ನು ಮಾಡಬಹುದು. ಅದು ಬೌಲಿಂಗ್‌ನಲ್ಲಿ ಆಗಿರಬಹುದು ಅಥವಾ ಬ್ಯಾಟಿಂಗ್‌ನಲ್ಲಿ ಆಗಿರಬಹುದು. ಇದನ್ನು ಹೊರತುಪಡಿಸಿ ಉಳಿದ್ಯಾವ ಬದಲಾವಣೆಗಳು ಆಗುವ ಸಾಧ್ಯತೆ ಕಡಿಮೆ. ಯಾಕೆಂದರೇ ಯಾವುದೇ ತಂಡವು ತನ್ನ ಗೆಲುವಿನ ಲಯವನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಎಂದು ಜಹೀರ್ ಖಾನ್ ಹೇಳಿದ್ದಾರೆ.
ಇಂದು ಇಂಗ್ಲೆಂಡ್ ವಿರುದ್ಧ 2ನೇ ಟಿ20, ಸರಣಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ
ಇನ್ನು ಮುಂದುವರೆದು ಮಾತನಾಡಿರುವ ಜಹೀರ್ ಖಾನ್, ಆರ್ಶದೀಪ್ ಸಿಂಗ್ ಬದಲಿಗೆ ವೇಗಿ ಜಸ್ಪ್ರೀತ್ ಬುಮ್ರಾ (Jasprit Bumrah) ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಎರಡನೇ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿಗೆ (Virat Kohli) ಸ್ಥಾನವಿಲ್ಲ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.
ಇಂಗ್ಲೆಂಡ್ ಎದುರಿನ ಎರಡನೇ ಹಾಗೂ ಮೂರನೇ ಟಿ20 ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.