
ರಾಯ್ಪುರ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯವು ಇಂದು ನಡೆಯಲಿದ್ದು, ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮೇಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಈ ಅನುಭವಿ ಜೋಡಿ, ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ 2027ರ ವಿಶ್ವಕಪ್ ಆಡಲು ನಾವು ಫಿಟ್ ಇದ್ದೇವೆ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಎರಡನೇ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.
ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ 135 ರನ್ ಸಿಡಿಸುವ ಮೂಲಕ ಆಯ್ಕೆ ಸಮಿತಿ ಹಾಗೂ ಗೌತಮ್ ಗಂಭೀರ್ ಅವರ ಪ್ರಶ್ನೆಗಳಿಗೆ ಬ್ಯಾಟ್‌ನಿಂದಲೇ ಉತ್ತರ ನೀಡಿದ್ದರು. ಕೊಹ್ಲಿ ರನ್ ಗಳಿಸುವ ರೀತಿ, ಬೌಂಡರಿ ಗಳಿಸುವ ರೀತಿ ಯುವಕರನ್ನು ನಾಚಿಸುವಂತಿತ್ತು. ಇನ್ನು ಮಾಜಿ ನಾಯಕ ರೋಹಿತ್ ಶರ್ಮಾ ಕೂಡಾ ಅದ್ಭುತ ಅರ್ಧಶತಕ ಸಿಡಿಸಿ ಮಿಂಚಿದ್ದರು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿಲ್ಲ. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಋತುರಾಜ್ ಗಾಯಕ್ವಾಡ್ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ವಿಫಲವಾಗಿದ್ದರು. ಇನ್ನು ವಾಷಿಂಗ್ಟನ್ ಸುಂದರ್ ಅವರನ್ನು ಬ್ಯಾಟಿಂಗ್ ಆಲ್ರೌಂಡರ್ ಆಗಿ ಆಡಿಸಬೇಕೋ ಅಥವಾ ಬೌಲಿಂಗ್ ಆಲ್ರೌಂಡರ್ ಆಗಿ ಆಡಿಸಬೇಕೋ ಎನ್ನುವ ಗೊಂದಲ ಟೀಂ ಮ್ಯಾನೇಜ್‌ಮೆಂಟ್‌ಗೆ ಇದ್ದಂಗಿದೆ.
ಇನ್ನು ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು, ಹರಿಣಗಳ ಬಾಲಂಗೋಚಿಗಳ ವಿಕೆಟ್ ಕಬಳಿಸಲು ತಿಣುಕಾಡಿದ್ದರು. ಪ್ರಸಿದ್ದ್ ಕೃಷ್ಣ ಹಾಗೂ ವಾಷಿಂಗ್ಟನ್ ಸುಂದರ್ ಪರಿಣಾಮಕಾರಿ ದಾಳಿ ನಡೆಸಲು ವಿಫಲವಾಗಿದ್ದರು. ಟೀಂ ಇಂಡಿಯಾ ಬೌಲಿಂಗ್‌ನಲ್ಲಿ ಸುಧಾರಿತ ಪ್ರದರ್ಶನ ತೋರಬೇಕಿದೆ.
ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿ ಇಂದಿನ ಪಂದ್ಯಕ್ಕೆ ಎರಡು ಬದಲಾವಣೆಯಾಗುವ ಸಾಧ್ಯತೆಯಿದೆ. ನಾಯಕ ತೆಂಬಾ ಬವುಮಾ ಹಾಗೂ ಸ್ಪಿನ್ನರ್ ಕೇಶವ್ ಮಹಾರಾಜ್ ತಂಡ ಕೂಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಇನ್ನು ಮಾರ್ಕೊ ಯಾನ್ಸನ್ ಅದ್ಭುತ ಆಲ್ರೌಂಡ್ ಪ್ರದರ್ಶನ ತೋರುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ. ಈಗಾಗಲೇ ಮೊದಲ ಪಂದ್ಯ ಸೋತು ಹಿನ್ನಡೆಯಲ್ಲಿರುವ ಹರಿಣಗಳ ಪಡೆ ಇದೀಗ ಎರಡನೇ ಪಂದ್ಯ ಗೆಲ್ಲುವ ಮೂಲಕ ಸರಣಿ ಗೆಲ್ಲುವ ಕನಸು ಜೀವಂತವಾಗಿಟ್ಟುಕೊಳ್ಳಲು ಎದುರು ನೋಡುತ್ತಿದೆ.
ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್/ಜಿಯೋ ಹಾಟ್‌ಸ್ಟಾರ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.